
ರಾಜ್ಯದಲ್ಲಿ ಖಾಲಿ ಇರುವ 1600 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದ ಇಂದಿನ ಕಾರ್ಯಕಲಾಪಗಳಲ್ಲಿ ಭಾಗವಹಿಸಿ. ಪೊಲೀಸ್ ಇಲಾಖೆಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಸದಸ್ಯರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಹಿಂದಿನ ಸರ್ಕಾರದಲ್ಲಿ 545 ಪಿ.ಎಸ್.ಐ ನೇಮಕಾತಿ ವಿಚಾರದಲ್ಲಿ ಗೊಂದಲ ಉಂಟಾಗಿ ನೇಮಕಾತಿ ಪ್ರಕ್ರಿಯೆ ಸ್ಥಗಿತವಾಗಿತ್ತು. ಸದ್ಯ ಸರ್ಕಾರ 947 ಪಿ.ಎಸ್.ಐ ಹುದ್ದೆಗಳನ್ನು ಭರ್ತಿ ಮಾಡಿದೆ. ಆಯ್ಕೆಗೊಂಡ ಅಭ್ಯರ್ಥಿಗಳು ತರಬೇತಿ ಪಡೆಯುತ್ತಿದ್ದಾರೆ ಎಂದರು.
ತರಬೇತಿ ಪೂರ್ಣಗೊಂಡ ನಂತರ ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ 42 ಪಿ.ಎಸ್.ಐ ಹುದ್ದೆಗಳ ಪೈಕಿ 32 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುವುದು. ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 33 ಪೊಲೀಸ್ ಠಾಣೆಗಳಿದ್ದು, 1549 ಹುದ್ದೆಗಳಲ್ಲಿ 1394 ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 155 ಹುದ್ದೆಗಳು
ಖಾಲಿಯಿವೆ. ಪೊಲೀಸ್ ಠಾಣೆಗಳ ದಿನನಿತ್ಯದ ಕರ್ತವ್ಯಕ್ಕೆ ತೊಂದರೆಯಾಗದಂತೆ 103 ಗೃಹ ರಕ್ಷಕ ಸಿಬ್ಬಂದಿ ನೇಮಿಸಿಕೊಂಡು ಕರ್ತವ್ಯ ಭಾರವನ್ನು ಸರಿದೂಗಿಸಲಾಗಿದೆ ಎಂದು ಹೇಳಿದ್ದಾರೆ…
ಮುಂಬರುವ ದಿನಗಳಲ್ಲಿ ಮಾನದಂಡಗಳನ್ನು ಆಧರಿಸಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಪೊಲೀಸ್ ಕಮಿಷನರೇಟ್ ಸ್ಥಾಪಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯ ಕಾನೂನು ಸುವ್ಯವಸ್ಥೆ ಹದಗೆಡದಂತೆ ಕಾಪಾಡಲು ಸ್ಪೆಷಲ್ ಆಕ್ಷನ್ ಪೋರ್ಸ್ ಶಿವಮೊಗ್ಗದಲ್ಲಿ ನಿಯೋಜಿಸಲಾಗಿದೆ ಎಂದು ಉತ್ತರಿಸಿದರು…