ಮೇ.10ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಚುನಾವಣೆಯ ದಿನವನ್ನು ಮತದಾನದ ಹಬ್ಬವೆಂದು ಭಾವಿಸಿ ಪ್ರತಿಯೊಬ್ಬ ಮತದಾರರು ಯಾವುದೇ ಹಣ, ಆಸೆ-ಆಕಾಂಕ್ಷೆಗಳಿಗೆ ಒಳಗಾಗದೆ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ತಾ.ಪಂ ಕಾರ್ಯನಿರ್ವಾಹಕಾಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಶ್ರೀನಾಥ್ ಗೌಡ ತಿಳಿಸಿದರು.
ತಾಲೂಕು ಸ್ವೀಪ್ ಸಮಿತಿ ವತಿಯಿಂದ ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮತದಾನದ ದಿನದಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದ್ದು, ಮತದಾರರು ತಪ್ಪದೇ ಮತ ಚಲಾಯಿಸಿ ಪ್ರಾಮಾಣಿಕ ವ್ಯಕ್ತಿಗಳನ್ನು ಆರಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸದೃಢಗೊಳಿಸಿ ಉತ್ತಮ ದೇಶ ನಿರ್ಮಾಣ ಮಾಡಬೇಕೆಂದು ಮನವಿ ಮಾಡಿದರು.
ಈ ವೇಳೆ ತಾಲ್ಲೂಕು ಯೋಜನಾಧಿಕಾರಿ ರಾಮಾಂಜನೇಯ ಮತದಾನದ ಪ್ರತಿಜ್ಞಾ ವಿಧಿ ಬೋಧನೆ ಮಾಡಿ, ಮತದಾರರು ಕಡ್ಡಾಯವಾಗಿ ಮತದಾನ ಮಾಡಲು ತಿಳಿಸಿದರು.
ಗ್ರಾಮದ ಬೀದಿ-ಬೀದಿಗಳಲ್ಲಿ ಮತದಾನದ ಜಾಗೃತಿ ಮೂಡಿಸುವ ಘೋಷಣೆಗಳನ್ನು ಕೂಗುತ್ತಾ ಜಾಥಾ ಕೈಗೊಳ್ಳಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಸಿಬ್ಬಂದಿ, ಎನ್.ಆರ್. ಎಲ್.ಎಂ.ವಲಯ ಮೇಲ್ವಿಚಾರಕ ಯೋಗೇಶ್, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.