
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ ಸಿದ್ದರಾಮಯ್ಯ ಅವರು ಮಾರ್ಚ್ 6ರಂದು ಬೆಳಗ್ಗೆ 10:15ಕ್ಕೆ ತಮ್ಮ ದಾಖಲೆಯ 17ನೇ ಬಜೆಟ್ ಅನ್ನು ಮಂಡಿಸಲು ಸಜ್ಜಾಗಿದ್ದಾರೆ.
ಮಾರ್ಚ್ 6 ಬೆಳಗ್ಗೆ 10:15ಕ್ಕೆ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್ 27ಕ್ಕೆ ಅಂತ್ಯವಾಗಲಿದೆ. ಒಟ್ಟು 14 ದಿನ ಬಜೆಟ್ ಅಧಿವೇಶನ ನಡೆಯಲಿದೆ ಎಂದು ವಿಧಾನಸಭೆ ಕಾರ್ಯದರ್ಶಿ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಜೆಟ್ ಮಂಡಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ 16 ಬಾರಿ ಬಜೆಟ್ ಮಂಡಿಸಿರುವ ಸಿಎಂ ಸಿದ್ದರಾಮಯ್ಯ ತಮ್ಮ 17ನೇ ಬಜೆಟ್ ಮಂಡನೆಗೆ ತಯಾರಿ ನಡೆಸುತ್ತಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.
ರಾಜ್ಯದಲ್ಲಿ ಸುದೀರ್ಘ ಅವಧಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆ ಹೊಂದಿದ್ದ ದೇವರಾಜ ಅರಸು ಅವರ ದಾಖಲೆಯನ್ನು ಸಿದ್ದರಾಮಯ್ಯ ಮುರಿದಿದ್ದಾರೆ. ದೇವರಾಜ ಅರಸು ಅವರು ಸತತವಾಗಿ ಏಳೂವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದರು. ದೇವರಾಜ ಅರಸು ಅವರು 2,789 ದಿನ ಅಂದ್ರೆ 7 ವರ್ಷ- 239 ದಿನಗಳ (ಎರಡು ಅವಧಿ) ಕಾಲ ರಾಜ್ಯದ ಮುಖ್ಯಮಂತ್ರಿ ಆಗಿದ್ದರು. ಸಿದ್ದರಾಮಯ್ಯ ಕೂಡ ಈಗಾಗಲೇ 7 ವರ್ಷ 239 ದಿನ ಪೂರೈಸಿ ಅರಸು ದಾಖಲೆ ಮುರಿದಿದ್ದಾರೆ.
ಕಾಂಗ್ರೆಸ್ ಪಕ್ಷದ ಪ್ರಬಲ ನಾಯಕ ಸಿದ್ದರಾಮಯ್ಯ ಅವರು ತಮ್ಮದೇ ವರ್ಚಸ್ಸು, ಚಾತುರ್ಯತೆಯಿಂದ ಬೆಳೆದು ಬಂದಿದ್ದಾರೆ. 2013 ರಿಂದ 2018 ರವರ ಅವಧಿಯಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ರು. ಪೂರ್ಣ ಐದು ವರ್ಷಗಳ ಅವಧಿಯನ್ನು ಪೂರೈಸಿದ್ದರು. ಬಳಿಕ ಮೇ 20, 2023 ರಂದು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.