
ದೇವನಹಳ್ಳಿ: ಸಮಾಜ ಕಲ್ಯಾಣ ಇಲಾಖೆ ಸಚಿವನಾಗಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವನಾಗಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಈ ನಿಟ್ಟಿನಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಸಹಕಾರ ಅಗತ್ಯ ಎಂದು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ದೇವನಹಳ್ಳಿ ಪಟ್ಟಣದ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ತ್ರಿವರ್ಣ ಧ್ವಜಕ್ಕೆ ಗೌರವ ವಂದನೆ ಸಲ್ಲಿಸಿ ಅವರು ಮಾತನಾಡಿದರು.
ಕಾರ್ಯಕ್ರಮಕ್ಕೂ ಮುನ್ನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಗ್ಯಾರಂಟಿ ಯೋಜನೆಗಳು ಜನರ ಬದುಕಿನಲ್ಲಿ ಬದಲಾವಣೆ ತಂದಿವೆ. ಯುವಕರನ್ನು ಸಂಘಟಿಸುವ ಉದ್ದೇಶದಿಂದ ರಾಜ್ಯಾದ್ಯಂತ 10 ಸಾವಿರ ಭಾರತ್ ಜೋಡೋ ಯುವಕರ ಸಂಘಗಳನ್ನು ಸ್ಥಾಪಿಸಲಾಗುತ್ತಿದ್ದು, ಪ್ರತಿ ಸಂಘಕ್ಕೆ ₹10 ಲಕ್ಷದಂತೆ ಒಟ್ಟು ₹1,000 ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲೆಯ ಕ್ರೀಡಾಂಗಣಗಳ ಅಭಿವೃದ್ಧಿಗೆ ಆದ್ಯತೆ
ದೇವನಹಳ್ಳಿ ಪಟ್ಟಣದ ಟೌನ್ ಕ್ರೀಡಾಂಗಣ ಅಭಿವೃದ್ಧಿಗೆ ಈಗಾಗಲೇ ಭೂಮಿಪೂಜೆ ನೆರವೇರಿಸಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ವಿಜಯಪುರ ರಸ್ತೆಯಲ್ಲಿರುವ ಕ್ರೀಡಾಂಗಣವನ್ನು ಸಂಸದ ಡಾ.ಕೆ.ಸುಧಾಕರ್ ಅವರು ಕೇಂದ್ರ ಸರ್ಕಾರದಿಂದ ಅನುಮೋದನೆ ಪಡೆದು ಅಭಿವೃದ್ಧಿಪಡಿಸುವ ಕಾರ್ಯ ಕೈಗೊಳ್ಳಲಾಗುವುದು. ಒಂದು ವರ್ಷದೊಳಗೆ ಎರಡು ಕ್ರೀಡಾಂಗಣಗಳನ್ನು ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನ ಆದಿನಾರಾಯಣ ಹೊಸಹಳ್ಳಿ ಬಳಿಯ ಜಿಲ್ಲಾ ಕ್ರೀಡಾಂಗಣವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಅಭಿವೃದ್ಧಿಪಡಿಸಲಾಗುವುದು ಎಂದರು.
ರೈತರು ಬೆಳೆ ವಿಮೆ ಮಾಡಿಸಿಕೊಳ್ಳಿ
ಮಳೆ ಕೊರತೆಯಿಂದ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ. ರೈತರು ಕಡಿಮೆ ಅವಧಿಯಲ್ಲಿ ಬೆಳೆಯಬಹುದಾದ ರಾಗಿ ಬಿತ್ತನೆಗೆ ಆದ್ಯತೆ ನೀಡಬೇಕು. ಪ್ರತಿಯೊಬ್ಬ ರೈತರೂ ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸಿಕೊಳ್ಳಬೇಕು. ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಅಗತ್ಯ ದಾಸ್ತಾನು ಮಾಡಲಾಗಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಚಿವರು ಸಲಹೆ ನೀಡಿದರು.
2027ರ ಅಂತ್ಯದೊಳಗೆ ಎತ್ತಿನಹೊಳೆ ನೀರು
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಾಲೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ತಿಳಿಸಿರುವಂತೆ ಎತ್ತಿನಹೊಳೆ ಯೋಜನೆಯ ನೀರನ್ನು ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ 2027ರ ಅಂತ್ಯದೊಳಗೆ ಹರಿಸುವ ಗುರಿ ಹೊಂದಲಾಗಿದೆ. ಹಾಸನ ಭಾಗದಲ್ಲಿ ನೀರಿನ ಲಭ್ಯತೆ ಇದ್ದು, ಕಾಮಗಾರಿ ಭರದಿಂದ ಸಾಗುತ್ತಿದೆ. ಮೊದಲ ಹಂತದಲ್ಲಿ ಕುಡಿಯುವ ನೀರಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಸರ್ಕಾರಿ ಶಾಲೆಗಳಿಗೆ ಹೈಟೆಕ್ ಸ್ಪರ್ಶ
ಜಿಲ್ಲೆಯ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಸಿಎಸ್ಆರ್ ಅನುದಾನ ಹಾಗೂ ಸರ್ಕಾರದ ಅನುದಾನವನ್ನು ಬಳಸಿಕೊಂಡು ಸರ್ಕಾರಿ ಶಾಲೆಗಳನ್ನು ಹೈಟೆಕ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಸಚಿವರು ತಿಳಿಸಿದರು.
ಪ್ರಸಕ್ತ ಸಾಲಿನಲ್ಲೇ ಮೆಟ್ರೋ ಕಾಮಗಾರಿ
ಜಿಲ್ಲೆಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. 40ರಿಂದ 50 ವರ್ಷ ಬಾಳಿಕೆ ಬರುವ ಕಾಂಕ್ರೀಟ್ ರಸ್ತೆಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗುತ್ತಿದೆ. ನಾಲ್ಕೂ ತಾಲ್ಲೂಕುಗಳಲ್ಲಿ ಭೂಗತ ವಿದ್ಯುತ್ ಮಾರ್ಗ ಅಳವಡಿಸುವ (ಯುಜಿಡಿ) ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ನೆಲಮಂಗಲ, ಹೊಸಕೋಟೆ ಹಾಗೂ ದೇವನಹಳ್ಳಿ ಭಾಗಗಳಿಗೆ ಪ್ರಸಕ್ತ ಸಾಲಿನಲ್ಲೇ ಮೆಟ್ರೋ ಕಾಮಗಾರಿ ಆರಂಭವಾಗಲಿದೆ ಎಂದು ಹೇಳಿದರು.
ಅಧಿವೇಶನ ಮುಗಿದ ಬಳಿಕ ಜಿಲ್ಲಾದ್ಯಂತ ಪ್ರವಾಸ ಕೈಗೊಂಡು ಪಂಚಾಯಿತಿವಾರು ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲಾಗುವುದು. ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ವಿದ್ಯಾರ್ಥಿಗಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ
ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿಲ್ಲೆಯ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ನಡೆಸಿಕೊಟ್ಟ ದೇಶಭಕ್ತಿ, ಸಾಂಸ್ಕೃತಿಕ ಹಾಗೂ ಕಲಾ ಪ್ರದರ್ಶನಗಳು ಪ್ರೇಕ್ಷಕರ ಗಮನ ಸೆಳೆದವು.
ಅಂಗಾಂಗ ದಾನಿಗಳ ಕುಟುಂಬಗಳಿಗೆ ಸನ್ಮಾನ
ಜಿಲ್ಲೆಯಲ್ಲಿ ಅಂಗಾಂಗ ದಾನ ಮಾಡಿ ಹಲವು ಜೀವಗಳಿಗೆ ನೆರವಾದ ಆರು ಮೃತರ ಕುಟುಂಬದ ಸದಸ್ಯರನ್ನು ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವಾಸಂತಿ ಅಮರ್, ಜಿಲ್ಲಾ ಪೊಲೀಸ್ ಅಧೀಕ್ಷಕ ಚಂದ್ರಕಾಂತ್, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅಧ್ಯಕ್ಷ ರಾಜಣ್ಣ, ತಾಲ್ಲೂಕು ಅಧ್ಯಕ್ಷ ಜಗನ್ನಾಥ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.