ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ

ದೊಡ್ಡಬಳ್ಳಾಪುರ: ಆಡಳಿತ ವ್ಯವಸ್ಥೆಯನ್ನು ಟೀಕಿಸುವುದಕ್ಕು ಮುನ್ನ ಪ್ರತಿಯೊಬ್ಬರು ನಮ್ಮ ಮತದಾನದ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸುವ ಮೂಲಕ ದೇಶದ ಭದ್ರತೆ, ಆರ್ಥಿಕ ಸುಭದ್ರತೆಗೆ ಸಮರ್ಥ ಆಡಳಿತಗಾರರನ್ನು ಆಯ್ಕೆ ಮಾಡಬೇಕು ಎಂದು ಪ್ರಧಾನ ಹಿರಿಯ ಸಿವಿಲ್ ನಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ಎಚ್.ಎ.ಶಿಲ್ಪಾ ಹೇಳಿದರು.

ಭಾರತ ಚುನಾವಣಾ ಆಯೋಗ, ತಾಲ್ಲೂಕು ಆಡಳಿತ, ಸಹಯೋಗದಲ್ಲಿ ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

1950ರಲ್ಲಿ ಭಾರತ ಚುನಾವಣ ಆಯೋಗ ಸ್ಥಾಪನೆಯಾದ ಜ.25 ಅನ್ನು ರಾಷ್ಟ್ರೀಯ ಮತದಾನದ ದಿನವನ್ನಾಗಿ ಆಚರಿಸುವ ಮೂಲಕ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಹಾಗೆಯೇ 18 ವರ್ಷ ತುಂಬಿರುವ ಎಲ್ಲರು ಕಡ್ಡಾಯವಾಗಿ ಮತದಾರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿಸಿಕೊಳ್ಳಬೇಕು. ವಿದ್ಯಾವಂತ ವರ್ಗ ಮತದಾನ ಮಾಡಬೇಕು ಹಾಗೆಯೇ ಮತದಾನ ಮಾಡುವಂತೆ ಇತರರಿಗು ಜಾಗೃತಿ ಮೂಡಿಸಬೇಕು. ಯಾವುದೇ ಅಮೀಷಗಳಿಗೆ ಒಳಗಾಗದೆ ಮತದಾನ ಮಾಡುವುದನ್ನು ಯಾರೂ ಮರೆಯಬಾರದು ಎಂದರು.

ಮತದಾನದ ಪ್ರಮಾಣ ಕಡಿಮೆಯಾದರೆ ಚುನಾವಣಾ ಫಲಿತಾಂಶದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ರಾಷ್ಟ್ರದ ಉಜ್ವಲ ಭವಿಷ್ಯಕ್ಕಾಗಿ ಪ್ರತಿಯೊಬ್ಬರೂ ಮತದಾನ ಮಡಬೇಕಿದೆ. ಯುವ ಮತದಾರರು ಪ್ರತಿ ಚುನಾವಣೆಯ ಮತದಾನದಲ್ಲಿ ಕಡ್ಡಾಯವಾಗಿ ಮತದಾನ ಮಾಡಬೇಕಿದೆ. ಜನರಿಗೆ ಮತದಾನದ ಬೆಲೆ ತಿಳಿಯುತ್ತಿಲ್ಲ. ಮತದಾನ ಸಂವಿಧಾನದ ಮೂಲಭೂತ ಕರ್ತವ್ಯವಾಗಿದ್ದು, ದಾನ ಮಾಡುವ ಅವಕಾಶವನ್ನು ನಾವು ಸದುಪಯೋಗಪಡಿಸಿಕೊಳ್ಳಬೇಕು ಕಡ್ಡಾಯವಾಗಿ ಮತದಾನ ಮಾಡುವ ಪ್ರತಿಜ್ಞೆಯನ್ನು ಸ್ವೀಕರಿಸಬೇಕು ಎಂದರು.

ತಹಶೀಲ್ದಾರ್ ವಿಭಾವಿದ್ಯಾರಾಥೋಡ್ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಮತದಾನದಂತೆ ನಾಯಕತ್ವದ ಪಾತ್ರವೂ ಮುಖ್ಯವಾಗಿದ್ದು, ವಿದ್ಯಾರ್ಥಿಗಳು ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡರೆ ಪ್ರಜಾಪ್ರಭುತ್ವದ ಸದೃಢತೆಗೆ ಪೂರಕವಾಗಲಿದೆ. ದೇಶವನ್ನು ಆಳುವ ಶಕ್ತಿ ತಮ್ಮಲ್ಲಿ ಅಂತರ್ಗತವಾಗಿದ್ದು, ಅದನ್ನು ಹೊರಗೆಡಹಲು ನಾಯಕತ್ವ ಬೆಳೆಸಿಕೊಳ್ಳಬೇಕಿದೆ. ನಮ್ಮ ಹಕ್ಕು, ಕರ್ತವ್ಯಗಳನ್ನು ಪಾಲನೆ ಮಾಡುವ ಜವಾಬ್ದಾರಿ ದೇಶದ ಪ್ರತಿಯೊಬ್ಬ ನಾಗರೀಕರ ಮೇಲಿದೆ ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ರವಿಮಾವಿನಕುಂಟೆ ಮಾತನಾಡಿ, ಮತದಾನದ ಮಹತ್ವ ಹಾಗೂ ಭಾರತ ಚುನಾವಣಾ ಆಯೋಗ ಸ್ಥಾಪಿಸಿದ ನೆನಪಿಗಾಗಿ 2011 ರಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸಲಾಗುತ್ತಿದೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯಬಲ್ಲ ಆರಂಭಿಕ ಹಂತವೇ ಚುನಾವಣಾ ಪ್ರಕ್ರಿಯೆಯಾಗಿದೆ. ಮತದಾನದ ಹಕ್ಕು ನಿರ್ಲಕ್ಷ್ಯ ಮಾಡುತ್ತಿರುವ ಕುರಿತು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಪ್ರತಿಯೊಬ್ಬರೂ ಮತದಾನ ಮಾಡುವ ಮೂಲಕ ಶೇ.100 ಮತದಾನವಾಗಲು ಸಹಕರಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಮತದಾರರ ಜಾಗೃತಿಗಾಗಿ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಉತ್ತಮವಾಗಿ ಕಾರ್ಯ ನಿರ್ವಹಿಸಿದ ಮತಗಟ್ಟೆ ಅಧಿಕಾರಿಗಳಿಗೆ ಪ್ರಶಂಸಾ ಪತ್ರ ನೀಡಲಾಯಿತು. ನೂತನವಾಗಿ ನೋಂದಾಯಿಸಿದ ಮತದಾರರಿಗೆ ಗುರುತಿನ ಚೀಟಿಗಳನ್ನು ವಿತರಿಸಲಾಯಿತು. ಮತದಾನದ ಕುರಿತಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಈ ವೇಳೆ 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ರವಿಬೆಟಗಾರ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಎನ್. ಮುನಿರಾಜು, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎ.ಕೃಷ್ಣಮೂರ್ತಿ, ಮತದಾನ ಕೇಂದ್ರದ ಸಂಪನ್ಮೂಲ ವ್ಯಕ್ತಿ ಡಿ.ಎನ್.ಬಾಬು ಇದ್ದರು.

Leave a Reply

Your email address will not be published. Required fields are marked *