28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಕೂಡಲೇ ₹10 ಸಾವಿರ ಕೋಟಿ ವಿಶೇಷ ಪರಿಹಾರ ಪ್ಯಾಕೇಜ್ ಘೋಷಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಒತ್ತಾಯಿಸಿದರು.

ತುಮಕೂರು ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ನೆರವಿಗಾಗಿ ಕಾಯದೆ ರಾಜ್ಯ ಸರ್ಕಾರ ತನ್ನ ಜವಾಬ್ದಾರಿಯನ್ನು ಮೊದಲು ನಿರ್ವಹಿಸಿ ರೈತರ ನೆರವಿಗೆ ಧಾವಿಸಬೇಕು ಎಂದು ಹೇಳಿದರು.

ರಾಜ್ಯದ ವಾಸ್ತವಿಕ ಬರ ಪರಿಸ್ಥಿತಿಯನ್ನು ಅಧ್ಯಯನ ಮಾಡಲು ಬಿಜೆಪಿ ಏಳು ಅಧ್ಯಯನ ತಂಡಗಳನ್ನು ರಚಿಸಿದ್ದು, ಈ ತಂಡಗಳು ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ರೈತರೊಂದಿಗೆ ಸಂವಾದ ನಡೆಸಿ, ಬೆಳೆ ಹಾನಿಯ ಮಾಹಿತಿ ಸಂಗ್ರಹಿಸುತ್ತಿವೆ ಎಂದು ತಿಳಿಸಿದರು.

ತುಮಕೂರು ಜಿಲ್ಲೆಯ ಎಲ್ಲಾ 10 ತಾಲೂಕುಗಳನ್ನು ಅಧಿಕೃತವಾಗಿ ಬರಪೀಡಿತ ಪ್ರದೇಶಗಳೆಂದು ಘೋಷಿಸಬೇಕು ಎಂದು ಆಗ್ರಹಿಸಿದ ಅವರು, ತೆಂಗು, ರಾಗಿ, ಹಣ್ಣು ಹಾಗೂ ತರಕಾರಿ ಬೆಳೆಗಾರರು ಭಾರೀ ನಷ್ಟ ಅನುಭವಿಸಿದ್ದಾರೆ. ಮಳೆಯ ಕೊರತೆಯಿಂದ ಹಲವು ಕಡೆ ಬಿತ್ತನೆ ಆರಂಭವಾಗಿಲ್ಲ. ಕೆಲವೆಡೆ ಬಿತ್ತನೆ ಮಾಡಿದ ಬೆಳೆಗಳು ಮೊಳಕೆಯೊಡೆಯದೆ ಹಾಳಾಗಿವೆ ಎಂದು ಹೇಳಿದರು.

ರೈತರು ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದು, ಕೃಷಿ ಚಟುವಟಿಕೆ ಮುಂದುವರಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ರಾಜ್ಯ ಸರ್ಕಾರ ತಕ್ಷಣವೇ ₹10 ಸಾವಿರ ಕೋಟಿ ವಿಶೇಷ ಪರಿಹಾರ ಪ್ಯಾಕೇಜ್ ಬಿಡುಗಡೆ ಮಾಡಬೇಕು. ಕೇಂದ್ರದ ನೆರವು ಪಡೆಯುವ ಪ್ರಕ್ರಿಯೆ ಸಮಾನಾಂತರವಾಗಿ ಮುಂದುವರಿಯಬಹುದು ಎಂದು ಅಭಿಪ್ರಾಯಪಟ್ಟರು.

ಬೆಳೆ ವಿಮೆ ಪ್ರೀಮಿಯಂ ಪಾವತಿಸುವ ಸ್ಥಿತಿಯಲ್ಲೂ ರೈತರು ಇಲ್ಲ. ಆದ್ದರಿಂದ ರೈತರ ಪಾಲಿನ ಸಂಪೂರ್ಣ ಬೆಳೆ ವಿಮೆ ಪ್ರೀಮಿಯಂ ಅನ್ನು ರಾಜ್ಯ ಸರ್ಕಾರವೇ ಭರಿಸಬೇಕು. ಜೊತೆಗೆ ತುಮಕೂರು ಜಿಲ್ಲೆಯ ಪ್ರತಿಯೊಂದು ತಾಲೂಕಿಗೂ ಕನಿಷ್ಠ ₹50 ಲಕ್ಷ ಅನುದಾನ ನೀಡಿ ಬೆಳೆ ವಿಮೆ ಪ್ರೀಮಿಯಂ ಪಾವತಿಗೆ ನೆರವಾಗಬೇಕು ಎಂದು ಒತ್ತಾಯಿಸಿದರು.

ಹೇಮಾವತಿ ಸೇರಿದಂತೆ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಕುಸಿದಿದ್ದು, ಕೆರೆ-ಕಟ್ಟೆಗಳು ಬತ್ತುತ್ತಿವೆ. ಗ್ರಾಮೀಣ ಪ್ರದೇಶಗಳಲ್ಲಿ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಾಗಿದೆ. ಪ್ರಸ್ತುತ ತಾಲೂಕಿಗೆ ನೀಡುತ್ತಿರುವ ₹1 ಕೋಟಿ ಅನುದಾನ ಸಾಕಾಗುವುದಿಲ್ಲ. ಹೆಚ್ಚುವರಿಯಾಗಿ ಪ್ರತಿ ತಾಲೂಕಿಗೆ ₹2 ಕೋಟಿ ಬಿಡುಗಡೆ ಮಾಡಿ ಕುಡಿಯುವ ನೀರಿನ ವ್ಯವಸ್ಥೆ ಬಲಪಡಿಸಬೇಕು ಎಂದು ಆಗ್ರಹಿಸಿದರು.

ಅಂತರ್ಜಲ ಮಟ್ಟ ಕುಸಿದಿರುವುದರಿಂದ ಕೊಳವೆಬಾವಿ ಅವಲಂಬಿಸಿರುವ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ತೆಂಗು, ಅಡಿಕೆ ಸೇರಿದಂತೆ ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಪ್ರತಿದಿನ ಕನಿಷ್ಠ ಏಳು ಗಂಟೆಗಳ ನಿರಂತರ ತ್ರಿಫೇಸ್ ವಿದ್ಯುತ್ ಪೂರೈಕೆ ಖಚಿತಪಡಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಬರ ಹಾಗೂ ಪ್ರವಾಹದಂತಹ ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮೊದಲು ತನ್ನ ಸಾಂವಿಧಾನಿಕ ಜವಾಬ್ದಾರಿ ನಿರ್ವಹಿಸಿ ಪರಿಹಾರ ಕ್ರಮ ಕೈಗೊಳ್ಳಬೇಕು. ರೈತರ ಹಿತಾಸಕ್ತಿಯ ರಕ್ಷಣೆಯೇ ಸರ್ಕಾರದ ಮೊದಲ ಕರ್ತವ್ಯ ಎಂದು ವಿಜಯೇಂದ್ರ ಹೇಳಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ರೈತರ ಸಮಸ್ಯೆಗಳಿಗಿಂತ ರಾಜಕೀಯ ಬೆಳವಣಿಗೆಗಳು ಹಾಗೂ ಅಧಿಕಾರದ ಒಳಜಗಳಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಆರೋಪಿಸಿದ ಅವರು, ಸಚಿವ ಪ್ರಿಯಾಂಕ್ ಖರ್ಗೆ ಅವರ ಪೊಲೀಸ್ ನೇಮಕಾತಿ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಕುರಿತ ಹೇಳಿಕೆಗೂ ಪ್ರತಿಕ್ರಿಯಿಸಿ, ಅಧಿಕಾರ ಶಾಶ್ವತವಲ್ಲ ಎಂಬುದನ್ನು ಆಡಳಿತದಲ್ಲಿರುವವರು ನೆನಪಿಟ್ಟುಕೊಳ್ಳಬೇಕು. ನಿರುದ್ಯೋಗಿ ಯುವಕರ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವುದು ಸರ್ಕಾರದ ಆದ್ಯತೆಯಾಗಬೇಕು ಎಂದರು.

ಇದೇ ವೇಳೆ ಕಾಂಗ್ರೆಸ್‌ನ ಒಳಜಗಳ ಆಡಳಿತದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಇತ್ತೀಚಿನ ಸಚಿವ ಸಂಪುಟ ವಿಸ್ತರಣೆಯಲ್ಲೂ ಹಲವು ಜಿಲ್ಲೆಗಳು ಹಾಗೂ ಹಿಂದುಳಿದ ಸಮುದಾಯಗಳಿಗೆ ಸಮರ್ಪಕ ಪ್ರಾತಿನಿಧ್ಯ ದೊರೆತಿಲ್ಲ ಎಂದು ಅವರು ಟೀಕಿಸಿದರು.

Leave a Reply

Your email address will not be published. Required fields are marked *

error: Content is protected !!