3 ವರ್ಷಗಳಿಂದ ಸ್ಥಗಿತಗೊಂಡಿದ್ದ ವಾಲ್ಮೀಕಿ ಭವನ ಕಾಮಗಾರಿಗೆ ಮರುಜೀವ: 39.91 ಲಕ್ಷ ರೂ. ಅನುದಾನ ಬಿಡುಗಡೆ: 15 ದಿನಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವ ಗುರಿ- ಮುನಿಕೃಷ್ಣಪ್ಪ

ದೊಡ್ಡಬಳ್ಳಾಪುರ: ನಗರದ ತೆರಿನಬೀದಿ ವೃತ್ತದ ಬಳಿ ನಿರ್ಮಾಣವಾಗುತ್ತಿರುವ ಸುಸಜ್ಜಿತ ವಾಲ್ಮೀಕಿ ಭವನದ ಕಟ್ಟಡ ಕಾಮಗಾರಿ ಕಳೆದ ಮೂರು ವರ್ಷಗಳಿಂದ ಅನುದಾನದ ಕೊರತೆಯಿಂದ ಸ್ಥಗಿತಗೊಂಡಿತ್ತು. ಇದೀಗ ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಮಾಜ ಕಲ್ಯಾಣ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಅವರು 39 ಲಕ್ಷ 91 ಸಾವಿರ ರೂ. ಅನುದಾನ ಬಿಡುಗಡೆ ಮಾಡಿದ್ದಾರೆ ಎಂದು ತಾಲೂಕು ವಾಲ್ಮೀಕಿ ಸಮಾಜದ ಅಧ್ಯಕ್ಷ ಮುನಿಕೃಷ್ಣಪ್ಪ ತಿಳಿಸಿದರು.

ತಾವು ತಾಲೂಕು ವಾಲ್ಮೀಕಿ ಸಂಘದ ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡ ಬಳಿಕ ಕಟ್ಟಡದ ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅನುದಾನದ ಕೊರತೆ ಎದುರಾಗಿರುವುದನ್ನು ಗಮನಿಸಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಅವರ ಗಮನಕ್ಕೆ ತರಲಾಗಿತ್ತು. ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದ್ದಕ್ಕೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ 39.91 ಲಕ್ಷ ರೂ. ಬಿಡುಗಡೆ ಮಾಡಿದ್ದಾರೆ. ಅಲ್ಲದೆ, ಶೀಘ್ರವಾಗಿ ಅನುದಾನ ಮಂಜೂರು ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಹೇಳಿದರು.

ಇನ್ನೂ 15 ದಿನಗಳಲ್ಲಿ ವಾಲ್ಮೀಕಿ ಭವನದ ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಇದೇ ತಿಂಗಳಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಂದ ಭವನವನ್ನು ಉದ್ಘಾಟಿಸಲು ಉದ್ದೇಶಿಸಲಾಗಿದೆ. ಹಲವು ವರ್ಷಗಳ ಕನಸಾಗಿದ್ದ ವಾಲ್ಮೀಕಿ ಭವನ ಶೀಘ್ರದಲ್ಲೇ ಸಮುದಾಯದ ಬಳಕೆಗೆ ಲಭ್ಯವಾಗಲಿದೆ ಎಂದು ಮುನಿಕೃಷ್ಣಪ್ಪ ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!