70 ವರ್ಷಗಳಿಂದ ಇದ್ದ ಪೊಲೀಸ್ ಕ್ಯಾಪ್ ಬದಲಾವಣೆ: ಪೊಲೀಸ್ ಸಿಬ್ಬಂದಿಗೆ ನೂತನ ಪೀಕ್ ಕ್ಯಾಪ್ ವಿತರಣೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ, ಇದು ಪೊಲೀಸ್ ಇಲಾಖೆಯ ಗುರಿಯೂ ಆಗಲಿ. ಇದರಿಂದ ಇಡೀ ಕರ್ನಾಟಕ ಜನತೆ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತಾರೆ. ನಮ್ಮ ಯುವ ಶಕ್ತಿ, ಯುವಜನರ ಚೈತನ್ಯ ಮತ್ತು ಸಾಮರ್ಥ್ಯಗಳು ಮಾದಕ ವಸ್ತುಗಳಿಂದ ಬಲಿ ಆಗಬಾರದು. ಇದಕ್ಕೆ ಪೊಲೀಸ್ ಇಲಾಖೆ ಕಟಿಬದ್ಧ ನಿಲುವು ತಳೆಯಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಪ್ ವಿತರಣೆ, ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಉದ್ಘಾಟನೆ ಹಾಗೂ ಸನ್ಮಿತ್ರ ಕಾರ್ಯಯೋಜನೆ ಕೈಪಿಡಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಘರ್ಷಣೆ, ಅನೈತಿಕ ಪೊಲೀಸ್ ಗಿರಿ ಹೆಚ್ಚಾಗಿತ್ತು. ಹಿಂದಿದ್ದ ಅಧಿಕಾರಿಗಳು ನಿಯಂತ್ರಣ ಮಾಡಲಿಲ್ಲ. ಇಬ್ಬರು ಅಧಿಕಾರಿಗಳನ್ನು ಬದಲಾಯಿಸಿ ಆದೇಶ ಹೊರಡಿಸಿದೆ. ಈಗ ದಕ್ಷಿಣ ಕನ್ನಡ ಜಿಲ್ಲೆ ನಿಯಂತ್ರಣದಲ್ಲಿದೆ. ಈ ಸಾಧನೆ ಮಾಡಿದ್ದೂ ನಮ್ಮದೇ ಅಧಿಕಾರಿಗಳು ಮತ್ತು ಸಿಬ್ಬಂದಿ. ಇವರೇನು ಬೇರೆ ಗ್ರಹದಿಂದ ಬಂದವರಲ್ಲ. ನಿಮ್ಮವರೇ, ನಮ್ಮವರೇ ಆಗಿದ್ದಾರೆ. ಆದ್ದರಿಂದ ನೀವು ಮನಸ್ಸು ಮಾಡಿದರೆ ಎಲ್ಲವೂ ಸಾಧ್ಯವಿದೆ. ಸಾಧಿಸುವ ಛಲ ಬೇಕಷ್ಟೆ ಎಂದರು.

ಇದೇ ರೀತಿ ಇಡೀ ರಾಜ್ಯದಲ್ಲಿ ಮಾದಕ ವಸ್ತು ಹಾವಳಿ ತಪ್ಪಿಸಲು ನಿಮ್ಮಿಂದ ಸಾಧ್ಯವಿದೆ. ನೀವು ಮನಸ್ಸು ಮಾಡಿದರೆ ಕರ್ನಾಟಕ ಪೊಲೀಸರ ಘನತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಾಗುತ್ತದೆ ಎಂದು ಹೇಳಿದರು.

ಕೆಲವು ಪೊಲೀಸರು ರಿಯಲ್ ಎಸ್ಟೇಟ್ ಮಾಡುವವರ ಜೊತೆ, ಡ್ರಗ್ ಜಾಲದ ಜೊತೆ ಶಾಮೀಲಾಗಿರ್ತಾರೆ. ರೌಡಿಗಳನ್ನು ಮೊಳಕೆಯಲ್ಲೆ ಚಿವುಟಿ ಹಾಕುವುದು ಪೊಲೀಸರಿಂದ ಸಾಧ್ಯವಿದೆ. ಪೊಲೀಸರ ಬಗ್ಗೆ ಅಪರಾಧ ಜಗತ್ತಿಗೆ ಭಯ ಕಡಿಮೆಯಾಗಿದೆ. ಯಾಕೆ ಹೀಗಾಯ್ತು ಎಂದು ಆತ್ಮಸಾಕ್ಷಿಯನ್ನು ಕೇಳಿಕೊಳ್ಳಬೇಕು ಎಂದು ತಿಳಿಸಿದರು.

ಡ್ರಗ್ ಮಾರುವವರು, ತರುವವರು, ಎಲ್ಲಿಂದ ಡ್ರಗ್ಸ್ ಬರುತ್ತದೆ, ಈ ಜಾಲದ ಏಜೆಂಟರು ಯಾರ್ಯಾರು ಎನ್ನುವುದೂ ಪೊಲೀಸರಿಗೆ ಗೊತ್ತಿರುತ್ತದೆ. ಆದಷ್ಟು ಬೇಗ ರಾಜ್ಯ, “ಡ್ರಗ್ ಮುಕ್ತ ಕರ್ನಾಟಕ” ಆಗಲಿ, ಇದನ್ನು ಮಾಡಿ ತೋರಿಸಿ ಎಂದರು.

ಇಂದು ನಾನೇ ಬಿಡುಗಡೆ ಮಾಡಿದ ಪೀಕ್ ಕ್ಯಾಪ್ ಮಾದರಿಯನ್ನೂ ಆಯ್ಕೆ ಮಾಡಿದ್ದು ಕೂಡ ನಾನೆ. 1956 ರಿಂದ ಸುಮಾರು 70 ವರ್ಷಗಳಿಂದ ಇದ್ದ ಒಂದೇ ಮಾದರಿಯ ಕ್ಯಾಪ್ ಅನ್ನು ಇಂದು ಬದಲಾಯಿಸಿದ್ದೇವೆ. ಅಧಿಕಾರಿ ಮತ್ತು ಸಿಬ್ಬಂದಿಗೆ ಒಂದೇ ಮಾದರಿ ಕ್ಯಾಪ್ ಒದಗಿಸಲಾಗಿದ್ದು ಇದರಿಂದ ನಿಮ್ಮ ಆತ್ಮ ವಿಶ್ವಾಸ ಹೆಚ್ಚಾಗಲಿ ಎಂದು ಹೇಳಿದರು.

ಕೇವಲ ಕ್ಯಾಪ್ ಬದಲಾಗುವುದಲ್ಲ. ನಿಮ್ಮ ಕಾರ್ಯಕ್ಷಮತೆಯೂ ಬದಲಾಗಲಿ. ಪೊಲೀಸ್ ಇಲಾಖೆಯ ದಕ್ಷತೆಯಿಂದ ಸರ್ಕಾರಕ್ಕೆ ಒಳ್ಳೆ ಹೆಸರು ಬರುತ್ತದೆ. ಇಂಡಿಯಾ ಜಸ್ಟೀಸ್ ವರದಿಯಲ್ಲಿ ಕರ್ನಾಟಕ ಪೊಲೀಸ್ ನಂಬರ್ ಒನ್ ಸ್ಥಾನದಲ್ಲಿದೆ ಎನ್ನುವ ವರದಿ ರಾಜ್ಯದ ಘನತೆ ಹೆಚ್ಚಿಸಿದೆ ಎಂದರು.

Leave a Reply

Your email address will not be published. Required fields are marked *

error: Content is protected !!