2023 ಆಗಸ್ಟ್ 15 ರಂದು 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಡಾ. ಶಿವಶಂಕರ ಎನ್ ಅವರು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ 77ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿ ಬೆಳಗ್ಗೆ 8 ಗಂಟೆಗೆ ಧ್ವಜಾರೋಹಣ ನಡೆಸಲಾಗುವುದು. ನಂತರ ದೇವನಹಳ್ಳಿಯ ಕ್ರೀಡಾಂಗಣ ದಲ್ಲಿ ಬೆಳಗ್ಗೆ 9 ಗಂಟೆಯಿಂದ ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಆಹ್ವಾನ ಪತ್ರಿಕೆಗಳ ಮುದ್ರಣ, ಕಾರ್ಯಕ್ರಮದ ವೇದಿಕೆ ನಿರ್ಮಾಣ ವ್ಯವಸ್ಥೆ, ವೇದಿಕೆಗೆ ಅಗತ್ಯವಾದ ಅಲಂಕಾರಿಕ ಹೂ ಗಿಡಗಳ ವ್ಯವಸ್ಥೆ, ಸಾಂಸ್ಕೃತಿಕ ಕಾರ್ಯಕ್ರಮ, ಪಥಸಂಚಲನ, ಉಪಾಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಯವರು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಅನುರಾಧ ಕೆ.ಎನ್, ಅಪರ ಜಿಲ್ಲಾಧಿಕಾರಿ ಅಮರೇಶ್. ಹೆಚ್ ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.