ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಕ್ರಿಯಾ ಯೋಜನೆ: ತ್ವರಿತ ಅನುಷ್ಠಾನಕ್ಕೆ ಸೂಚನೆ

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಪ್ರಸಕ್ತ ವರ್ಷದ ಕ್ರಿಯಾ ಯೋಜನೆಯನ್ನು ತ್ವರಿತ ಅನುಷ್ಠಾನ ಮಾಡಿ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ಅನುಷ್ಠಾನಕ್ಕೆ ತರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮಂಡಳಿಯಲ್ಲಿ ಪ್ರಸ್ತುತ ರೂ.2,106 ಕೋಟಿ ಲಭ್ಯವಿದೆ. ಸರ್ಕಾರ ಅಧಿಕಾರಕ್ಕೆ ಬಂದ ನಂತರ 757.66 ಕೋಟಿ ರೂ. ವೆಚ್ಚ ಮಾಡಲಾಗಿದೆ, ಈ ಆರ್ಥಿಕ ವರ್ಷಾಂತ್ಯದ ವೇಳೆಗೆ ಇನ್ನೂ ಒಂದು ಸಾವಿರ ಕೋಟಿ ರೂ. ವೆಚ್ಚ ಆಗುವ ಸಾಧ್ಯತೆಗಳಿವೆ. ಇದಕ್ಕಾಗಿ ಮಂಡಳಿಯ ಅಧ್ಯಕ್ಷರು, ಕಲ್ಯಾಣ ಕರ್ನಾಟಕದ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರುಗಳು ಹಾಗೂ ಹಿರಿಯ ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದರು.

ನಿಯಮಿತವಾಗಿ ಪ್ರಗತಿ ಪರಿಶೀಲನೆ ನಡೆಸಿ, ಹಿನ್ನಡೆ ಕಂಡಿರುವ ಯೋಜನೆಗಳ ತ್ವರಿತ ಅನುಷ್ಠಾನ ಮಾಡಬೇಕು. ಪ್ರಾರಂಭವಾಗದ ಕಾಮಗಾರಿಗಳನ್ನು ಮರುಪರಿಶೀಲನೆ ಮಾಡಿ, ಬದಲಿಸುವ ಮೂಲಕ ಸಕಾಲದಲ್ಲಿ ಅನುದಾನ ವೆಚ್ಚ ಮಾಡಬೇಕು. ಕಾಮಗಾರಿಗಳ ಅನುಷ್ಠಾನಕ್ಕೆ ನೀಲ ನಕ್ಷೆ ರೂಪಿಸಿ, ಅದರಂತೆ ಕಾರ್ಯನಿರ್ವಹಿಸಬೇಕು. ಮುಂದಿನ ವರ್ಷದ ಕ್ರಿಯಾ ಯೋಜನೆಯನ್ನು ಮಾರ್ಚ್‌ ಅಂತ್ಯದ ಒಳಗೆ ರೂಪಿಸಬೇಕು. ಎಸ್‌.ಸಿ.ಎಸ್‌.ಪಿ. / ಟಿ.ಎಸ್.ಪಿ. ಅಡಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದವರ ಜನಸಂಖ್ಯೆ ಶೇ. 50 ಕ್ಕೂ ಹೆಚ್ಚಾಗಿ ವಾಸವಿರುವ ಸ್ಥಳಗಳನ್ನು ಅಭಿವೃದ್ಧಿ ಪಡಿಸಬೇಕು ಎಂದು ತಿಳಿಸಿದರು.

ಪ್ರಗತಿಯಲ್ಲಿರುವ ಕೆಲಸಗಳನ್ನೆಲ್ಲ ಈ ವರ್ಷವೇ ಪೂರ್ಣಗೊಳಿಸಬೇಕು. ಹಿಂದಿನ ವರ್ಷದ ಕಾಮಗಾರಿಗಳನ್ನು ಆದಷ್ಟು ಶೀರ್ಘ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಪ್ರಾಕೃತಿಕ ಅಸಮತೋಲನದಿಂದಾಗಿ ಅಭಿವೃದ್ಧಿಯಲ್ಲಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕ ಭಾಗವನ್ನು ರಾಜ್ಯದ ಇತರೆ ಜಿಲ್ಲೆಗಳ ಅಭಿವೃದ್ಧಿ ವೇಗಕ್ಕೆ ಸಮಾನವಾಗಿ ಮುನ್ನಡೆಸಿಕೊಂಡು ಹೋಗಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *