ಜಿಲ್ಲಾದ್ಯಂತ 32 ಬಾಲ ಕಾರ್ಮಿಕರ ರಕ್ಷಣೆ: ಡಾ.ಎನ್ ಶಿವಶಂಕರ್

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿ, ಜಿಲ್ಲಾ ಬಾಲಕಾರ್ಮಿಕ ಯೋಜನೆ ಮತ್ತು ಕಾರ್ಮಿಕ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕರ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 1986 ಮತ್ತು ತಿದ್ದುಪಡಿ ಕಾಯ್ದೆ 2016ರ ಬಗ್ಗೆ ಜನಜಾಗೃತಿ ಮೂಡಿಸಲು ಸಂಚಾರಿ ವಾಹನಕ್ಕೆ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಚಾಲನೆ ನೀಡಿ ಮಾತನಾಡಿದ ಅವರು, 14 ವರ್ಷದೊಳಗಿನ ಯಾವುದೇ ಮಕ್ಕಳನ್ನು ಯಾವುದೇ ಅಪಾಯಕಾರಿ ಕ್ಷೇತ್ರದಲ್ಲಿ ದುಡಿಮೆಗೆ ಇಟ್ಟುಕೊಂಡಲ್ಲಿ ಅಂತಹವರಿಗೆ ಕನಿಷ್ಠ 06 ತಿಂಗಳಿಗಿಂತ ಕಡಿಮೆ ಇಲ್ಲದಂತೆ ಹಾಗೂ 02 ವರ್ಷದವರೆಗೆ ಜೈಲು ಶಿಕ್ಷೆ ಮತ್ತು 20 ಸಾವಿದಿಂದ 50 ಸಾವಿರ ರೂ.ಗಳವರೆಗೂ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ತಿಳಿಸಿದರು.

ಬಾಲಕಾರ್ಮಿಕ ಪದ್ಧತಿಯಂತಹ ಸಮಾಜ ವಿರೋಧಿ ಆಚರಣೆ ಕುರಿತು ಇರುವ ಕಾನೂನುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಅವಶ್ಯಕವಾಗಿದೆ. ಜಿಲ್ಲೆಯ ನಾಲ್ಕೂ ತಾಲ್ಲೂಕುಗಳಲ್ಲಿ ಅಧಿಕಾರಿಗಳು ಈ ಬಗ್ಗೆ ದೊಡ್ಡ ಮಟ್ಟದಲ್ಲಿ ಅರಿವು ಮೂಡಿಸಬೇಕಿದೆ ಎಂದು ಸೂಚನೆ ನೀಡಿದರು.

ಪ್ರಸ್ತುತ 2023-24ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ ಅನಿರೀಕ್ಷಿತ ತಪಾಸಣೆ ಮತ್ತು ದಾಳಿಯಲ್ಲಿ 32 ಬಾಲ/ಕಿಶೋರ ಕಾರ್ಮಿಕರನ್ನು ರಕ್ಷಿಸಲಾಗಿದ್ದು ಸಂಬಂಧಪಟ್ಟ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಹೇಳಿದರು.

ದುಡಿಯುವ ಮಕ್ಕಳು / ಕಿಶೋರರು ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣವೇ ಮಕ್ಕಳ ಉಚಿತ ಸಹಾಯವಾಣಿ-1098 ಹಾಗೂ ಪೊಲೀಸ್ ಇಲಾಖೆಯ ತುರ್ತು ಸಹಾಯವಾಣಿ – 112 ಗೆ ಕರೆ ಮಾಡಿ ಮಕ್ಕಳನ್ನು ರಕ್ಷಿಸಬೇಕೆಂದು ಕರೆ ನೀಡಿದರು.

ಜಿಲ್ಲಾಯಾದ್ಯಂತ ಅನಿರೀಕ್ಷಿತ ತಪಾಸಣೆ ಮತ್ತು ದಾಳಿಗಳನ್ನು ಕೈಗೊಳ್ಳುವುದರ ಜತೆಗೆ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಎಲ್ಲ ಮಕ್ಕಳು ಸಹ ಕಡ್ಡಾಯವಾಗಿ ಶಾಲೆಗಳಲ್ಲಿ ಶಿಕ್ಷಣ ನೀಡಿ, ಉತ್ತಮ ಪ್ರಜೆಗಳನ್ನಾಗಿ ರೂಪಿಸುವುದೇ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

ಈ ವೇಳೆ ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ನಾಗೇಂದ್ರ ಹೆಚ್ ಆರ್ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರಾದ ಸುಬ್ಬಾರಾವ್.ಎಸ್ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂಧಿಗಳಾದ ಶ್ರೀಧರ್ ಹಾಗೂ ಶಿವಪ್ಪ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಸಿಬ್ಬಂದಿ ಕಾವ್ಯ ಮತ್ತು ಲಕ್ಷ್ಮೀಕಾಂತ ಹಾಜರಿದ್ದರು.

Leave a Reply

Your email address will not be published. Required fields are marked *