ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ SSLC ಮುಖ್ಯ ಪರೀಕ್ಷೆ; ಅಗತ್ಯ ಕ್ರಮಕ್ಕೆ ಎಡಿಸಿ ಅಮರೇಶ್.ಹೆಚ್ ಸೂಚನೆ

2023ರ ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕಾರ್ಯವು ಅತ್ಯಂತ ಶಾಂತಿಯುತವಾಗಿ, ಸುಗಮವಾಗಿ ಸುವ್ಯವಸ್ಥಿತವಾಗಿ, ಪಾರದರ್ಶಕವಾಗಿ ಮತ್ತು ಕಾನೂನು ಭದ್ರತೆಯಲ್ಲಿ ನಡೆಯಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ “2022-23ನೇ ಸಾಲಿನ ಎಸ್.ಎಸ್.ಎಲ್.ಸಿ ಮುಖ್ಯ ಪರೀಕ್ಷೆ ಕುರಿತ ಪೂರ್ವಭಾವಿ ಸಭೆ”ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರೀಕ್ಷಾ ವೇಳಾಪಟ್ಟಿಯೂ ವಿದ್ಯಾರ್ಥಿ ಸ್ನೇಹಿಯಾಗಿದೆ ಎಂದರಲ್ಲದೆ, ಪ್ರತಿದಿನ ಬೆಳಿಗ್ಗೆ 10:15 ಗಂಟೆಗೆ ಮೊದಲ ಬೆಲ್ ಆಗಲಿದ್ದು, 10:30 ಗಂಟೆಗೆ ಪರೀಕ್ಷೆ ಆರಂಭವಾಗಲಿದೆ. ವಿದ್ಯಾರ್ಥಿಗಳು ಪರೀಕ್ಷೆಗೆ ಸಮಯಕ್ಕೆ ಸರಿಯಾಗಿ ಬರುವಂತೆ ಮನವರಿಕೆ ಮಾಡಬೇಕು ಎಂದು ತಿಳಿಸಿದರು.

ಪರೀಕ್ಷಾ ಕೇಂದ್ರಕ್ಕೆ ಸಿಬ್ಬಂದಿಗಳಾಗಲೀ, ವಿದ್ಯಾರ್ಥಿಗಳಾಗಲೀ ಮೊಬೈಲ್, ಕ್ಯಾಮೆರಾ, ಡಿಜಿಟಲ್ ಗಡಿಯಾರವನ್ನು ತರಬಾರದು ಎಂದು ಕಟ್ಟುನಿಟ್ಟಾಗಿ ಹೇಳಿದರು.

ಪ್ರತಿ ಕೊಠಡಿಗೆ 24 ವಿದ್ಯಾರ್ಥಿಗಳಂತೆ ಕೊಠಡಿ ನಿಗದಿಗೊಳಿಸಲು ಸೂಚಿಸಿದರಲ್ಲದೆ, ಪ್ರತಿ ಪರೀಕ್ಷಾ ಕೇಂದ್ರಗಳಲ್ಲೂ ಉತ್ತಮ ಆಸನ ವ್ಯವಸ್ಥೆ, ಶುಭ್ರ ಶೌಚಾಲಯ, ಕುಡಿಯುವ ನೀರು ಸಿಸಿ ಕ್ಯಾಮರಾ, ಗಾಳಿ ಬೆಳಕಿನಿಂದ ಕೂಡಿದ ಕೊಠಡಿಗಳು ಇತ್ಯಾದಿ ಮೂಲಭೂತ ಸೌಲಭ್ಯಗಳು ಇರುವ ಕುರಿತು ಭೇಟಿ ನೀಡಿ, ಖಚಿತಪಡಿಸಿಕೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಿಳಿಸಿದರು.

ಜಿಲ್ಲೆಯಲ್ಲಿ 2022-23ನೇ ಸಾಲಿನ ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆಗೆ 14,040 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ 295 ವಿದ್ಯಾರ್ಥಿಗಳು ಖಾಸಗಿ ಅಭ್ಯರ್ಥಿಗಳಾಗಿದ್ದಾರೆ ಎಂದು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ 58 ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಈ ಪೈಕಿ ದೇವನಹಳ್ಳಿಯಲ್ಲಿ ಮಾತ್ರ ಒಂದು ಪರೀಕ್ಷಾ ಕೇಂದ್ರವನ್ನು ಖಾಸಗಿ ಅಭ್ಯರ್ಥಿಗಳಿಗಾಗಿ ತೆರೆಯಲಾಗಿದೆ ಎಂದರು.

ದೂರದ ಪರೀಕ್ಷಾ ಕೇಂದ್ರಗಳಿಗೆ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಅಡ್ಮಿಷನ್ ಟಿಕೆಟ್ ತೋರಿಸಿ ಉಚಿತ ಪ್ರಯಾಣ ಮಾಡಲು ಅವಕಾಶ ನೀಡುವಂತೆ ಮತ್ತು ರೆಗ್ಯುಲರ್ ಮಾರ್ಗ ಇಲ್ಲದ ಕಡೆಗಳಲ್ಲಿ ಮಕ್ಕಳಿಗಾಗಿಯೇ ಪರೀಕ್ಷಾ ವಿಶೇಷ ಬಸ್‌ಗಳನ್ನು ಒದಗಿಸುವಂತೆ ದೊಡ್ಡಬಳ್ಳಾಪುರ ಮತ್ತು ಇತರ ಕೆಎಸ್‌ಆರ್‌ಟಿಸಿ ಡಿಪೋ ಮ್ಯಾನೇಜರ್ ಅವರಿಗೆ ಸೂಚಿಸಿದರು.

ಎಸ್.ಎಸ್.ಎಲ್.ಸಿ. ಪರೀಕ್ಷಾ ಕಾರ್ಯನಿರತರೆಲ್ಲರೂ ಕಡ್ಡಾಯವಾಗಿ ಮಂಡಳಿಯಿಂದ ನೀಡಿರುವ ಫೋಟೋ ಸಹಿತ ಗುರುತಿನ ಚೀಟಿಯನ್ನು ಧರಿಸಬೇಕು ಹಾಗೂ ಅನಧಿಕೃತ ವ್ಯಕ್ತಿಗಳು ಒಳಗೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ ಎಂದರಲ್ಲದೆ, ಪರೀಕ್ಷೆ ಕುರಿತಂತೆ ಸುಳ್ಳು ಸುದ್ದಿಗೆ ಆಸ್ಪದ ನೀಡದಂತೆ ಎಚ್ಚರಿಕೆ ವಹಿಸಲು ತಿಳಿಸಿದರು.

ಸಭೆಯಲ್ಲಿ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಎನ್. ಶ್ರೀಕಂಠ, ಜಿಲ್ಲಾ ಡಯಟ್ ನ ಪ್ರಾಂಶುಪಾಲರಾದ ಉಷಾಕುಮಾರಿ, ಶಿಕ್ಷಣಾಧಿಕಾರಿ ಹನುಮಂತಪ್ಪ, ನಾಲ್ಕು ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿಷಯ ಪರಿವೀಕ್ಷಕರು, ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಪೋಲೀಸ್ ಅಧಿಕಾರಿಗಳು, ತಾಲ್ಲೂಕು ಕಂದಾಯ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಆರೋಗ್ಯಾಧಿಕಾರಿಗಳು, ಖಜಾನಾಧಿಕಾರಿಗಳು, ಸಂಬಂಧಿಸಿದ ಭಾಗೀದಾರ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *