ಇಡಿ, ಐ.ಟಿ, ಸಿ.ಬಿ.ಐ ಹಾಗೂ ರಾಜ್ಯಪಾಲರನ್ನು ದುರುಪಯೋಗ ಪಡಿಸಿಕೊಂಡು ಆಟ ಆಡ್ತೀರಾ? – ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಇಡಿ, ಐ.ಟಿ, ಸಿ.ಬಿ.ಐ ಹಾಗೂ ರಾಜ್ಯಪಾಲರನ್ನು ದುರುಪಯೋಗ ಪಡಿಸಿಕೊಂಡು ಆಟ ಆಡ್ತೀರಾ? ಅರವಿಂದ್ ಕೇಜ್ರಿವಾಲ್ ಆಯ್ತು. ಈಗ ನಾನು ಮತ್ತು ನನ್ನ ಪತ್ನಿಯನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಾನು ನಿನ್ನೆ ಮೊನ್ನೆ ಮಂತ್ರಿಯಾದವನಲ್ಲ. 40 ವರ್ಷದಿಂದ ಮಂತ್ರಿಯಾಗಿದ್ದೀನಿ. ಸುಳ್ಳು ಕೇಸಲ್ಲಿ ನನ್ನನ್ನು, ನನ್ನ ಧರ್ಮಪತ್ನಿಯನ್ನು ಎಳೀತೀರಾ? ರಾಜ್ಯದ ಜನರೇನು ಮೂರ್ಖರಾ. ರಾಜ್ಯದ ಜನ‌ರ ಆಶೀರ್ವಾದ ನನ್ನ  ಮೇಲೆ ಇರುವವರೆಗೂ ನಾನು ಬಿಜೆಪಿ ಮತ್ತು ಕೇಂದ್ರ ಸರ್ಕಾರದ ಷಡ್ಯಂತ್ರಗಳಿಗೆ ಜಗ್ಗಲ್ಲ, ಬಗ್ಗಲ್ಲ. ನಾಡಿನ ಪ್ರಜ್ಞಾವಂತರು ಕೂಡ ಸುಖಾ ಸುಮ್ಮನೆ ಜನಾದೇಶದಿಂದ ಆಯ್ಕೆಯಾದ ಮುಖ್ಯಮಂತ್ರಿಯ ತಂಟೆಗೆ ಬಂದರೆ ಸುಮ್ಮನಿರಲ್ಲ ಎನ್ನುವ ಎಚ್ಚರಿಕೆ ಕೊಡಬೇಕಿದೆ ಎಂದರು.

ಬಿಜೆಪಿ ಇವತ್ತಿನವರೆಗೂ ರಾಜ್ಯದಲ್ಲಿ ಸ್ವಂತ ಶಕ್ತಿಯಿಂದ ಒಂದು ಬಾರಿಯೂ ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕ ಮಾತ್ರ ಅಧಿಕಾರಕ್ಕೆ ಬಂದಿದೆ. ಈ ಬಾರಿ ಕಾಂಗ್ರೆಸ್ಸಿನ 50 ಮಂದಿ ಶಾಸಕರಿಗೆ ತಲಾ 50 ಕೋಟಿ ಆಫರ್ ನೀಡಿ ಖರೀದಿಸಲು ಯತ್ನಿಸಿದ್ದಾರೆ. ಎಲ್ಲಿಂದ ಬರತ್ತೆ ಈ ಹಣ? ಯಡಿಯೂರಪ್ಪ, ಬೊಮ್ಮಾಯಿ, ಆರ್.ಅಶೋಕ್ ಪ್ರಿಂಟ್ ಹಾಕಿದ್ದಾ ಈ ಹಣ? ರಾಜ್ಯವನ್ನು ಲೂಟಿ ಹೊಡೆದ ಹಣ ತಾನೇ. ಆದರೆ ನಮ್ಮ ಶಾಸಕರು ಇವರ ಆಮಿಷಕ್ಕೆ ಒಳಗಾಗಲಿಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ನಮ್ಮ ಐದೂ ಗ್ಯಾರಂಟಿಗಳು ಯಶಸ್ವಿಯಾಗಿ ಜಾರಿ ಆದ ಬಳಿಕ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಭಯಂಕರ ಸುಳ್ಳುಗಳನ್ನು ಹೊಸೆಯುತ್ತಿದ್ದಾರೆ. ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಹಸಿ ಹಸಿ ಸುಳ್ಳಿನ ಅಪಪ್ರಚಾರ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಗ್ಯಾರಂಟಿಗಳಿಗಾಗಿ 56 ಸಾವಿರ ಕೋಟಿ ರೂಪಾಯಿ ಕೊಟ್ಟರೆ, ಅಭಿವೃದ್ಧಿ ಕಾರ್ಯಗಳಿಗೆ ₹1.20 ಲಕ್ಷ ಕೋಟಿ ನೀಡಿದೆ.‌ ಇಂದು ನರಸೀಪುರದಲ್ಲಿ ₹470 ಕೋಟಿ ಮೌಲ್ಯದ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ದೊರೆತಿದೆ. ಬಿಜೆಪಿಯ ಸುಳ್ಳುಗಳಿಗೆ ಇವತ್ತಿನ ಅಭಿವೃದ್ಧಿ ಕಾರ್ಯಕ್ರಮ ಕನ್ನಡಿ ಹಿಡಿದಿದೆ ಎಂದು ತಿಳಿಸಿದರು.

ಈ ಬಿಜೆಪಿಯವರಿಗೆ, ಗ್ಯಾರಂಟಿ ವಿರೋಧಿಗಳಿಗೆ ನಾನು ನೇರವಾಗಿ ಒಂದು ಪ್ರಶ್ನೆ ಕೇಳುತ್ತಿದ್ದೀನಿ. ರಾಜ್ಯದಲ್ಲಿ ಬಿಜೆಪಿಯವರು ನಮ್ಮ ಗ್ಯಾರಂಟಿಗಳ ಫಲಾನುಭವಿಗಳಲ್ಲವಾ? ಬಿಜೆಪಿಯವರು ಉಚಿತವಾಗಿ ಬಸ್ಸಲ್ಲಿ ಓಡಾಡುತ್ತಿಲ್ಲವಾ? ಬಿಜೆಪಿಯವರು ಉಚಿತ ವಿದ್ಯುತ್ ಪಡೆಯುತ್ತಿಲ್ಲವಾ? ಬಿಜೆಪಿಯವರು ಗೃಹಲಕ್ಷ್ಮಿ ಹಣ ಪಡೆಯುತ್ತಿಲ್ಲವಾ?  ಇಲ್ಲಾ, ನಾವು ತೆಗೆದುಕೊಳ್ಳುತ್ತಿಲ್ಲ ಇಲ್ಲ ಎಂದು ಎದೆ ಮುಟ್ಟಿಕೊಂಡು ಹೇಳಲಿ ನೋಡೋಣ. ರಾಜ್ಯ ಸರ್ಕಾರದ ಗ್ಯಾರಂಟಿ ಫಲಾನುಭವಿಗಳನ್ನು ಅವಮಾನಿಸಿ, ಅಪಪ್ರಚಾರ ಮಾಡುವುದನ್ನು ನಿಲ್ಲಿಸದಿದ್ದರೆ ಕೋಟಿ ಕೋಟಿ ಫಲಾನುಭವಿಗಳು ನಿಮಗೆ ಸರಿಯಾದ ಪಾಠ ಕಲಿಸ್ತಾರೆ ಎಂದರು.

ನಮ್ಮ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಮಾಡುತ್ತಿರುವ ಆರೋಪಗಳು ಚುನಾವಣಾ ಭಾಷಣಕ್ಕಷ್ಟೇ ಸೀಮಿತ. ಇವುಗಳಲ್ಲಿ ಯಾವ ಸತ್ಯವೂ ಇಲ್ಲ ಎಂದರು.

ಬಿಜೆಪಿಯವರ ಮೇಲೆ ಅನೇಕ ಆರೋಪಗಳಿವೆ. ಕೊರೊನಾ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಅವ್ಯವಹಾರಗಳ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಡಿ.ಕುನ್ಹಾ ಅವರ ಆಯೋಗ ವರದಿ ಸಲ್ಲಿಸಿದ್ದು, 330 ರೂಪಾಯಿಗೆ ಸಿಗುವ ಪಿಪಿಇ ಕಿಟ್ ಅನ್ನು   2,140 ರೂಪಾಯಿಗಳಿಗೆ ಖರೀದಿ ಮಾಡಿದ್ದಾರೆ. ಇದಕ್ಕೆ ನರೇಂದ್ರ ಮೋದಿ ಏನು ಹೇಳುತ್ತಾರೆ? ಭ್ರಷ್ಟಾಚಾರ ಮಾಡಿರುವುದು ರಾಜ್ಯ ಬಿಜೆಪಿ ಸರ್ಕಾರ, ನಮ್ಮ ಸರ್ಕಾರದಲ್ಲಿ ಯಾವುದೇ ಭ್ರಷ್ಟಾಚಾರವಾಗಿಲ್ಲ. ಭ್ರಷ್ಟಾಚಾರ  ಮಾಡುವುದೂ ಇಲ್ಲ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ಅಬಕಾರಿ ಇಲಾಖೆಯಲ್ಲಿ ಕರ್ನಾಟಕ ಸರ್ಕಾರ 700 ಕೋಟಿ ವಸೂಲಿ ಮಾಡಿದೆ ಎಂದು ಸುಳ್ಳು ಹೇಳುತ್ತಿದ್ದಾರೆ. ಒಂದೇ ಒಂದು ರೂಪಾಯಿ ವಸೂಲಿ ಮಾಡಿರುವುದನ್ನು ನಿರೂಪಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಸಾಬೀತು ಮಾಡಲು ಆಗದಿದ್ದರೆ ಅವರು ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಿದ್ದಾರೆಯೇ? ಸುಳ್ಳು ಹೇಳಲು ಇತಿಮಿತಿ ಇರಬೇಕು ಎಂದು ತಿಳಿಸಿದರು.

ಪ್ರಧಾನಿ ಮೋದಿಯವರು ಚುನಾವಣಾ ಪ್ರಚಾರ ಸಭೆಗಳಲ್ಲಿ ಕರ್ನಾಟಕವನ್ನು ಗುರಿಯಾಗಿಸಿಕೊಂಡು ಟೀಕೆ ಮಾಡುತ್ತಿದ್ದಾರೆ. ಕರ್ನಾಟಕ ದೊಡ್ಡ ರಾಜ್ಯವಾಗಿದ್ದು, ವಿಧಾನಸಭೆಯ ಚುನಾವಣೆಯಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಪಡೆದಿರುವುದರಿಂದ ಹತಾಶರಾಗಿ ನನ್ನ ಮತ್ತು ನಮ್ಮ ಸರ್ಕಾರವನ್ನು ಪ್ರಧಾನಿಯವರು ಗುರಿಯಾಗಿಸಿ ಟೀಕೆ ಮಾಡುತ್ತಿದ್ದಾರೆ ಎಂದು ಹೇಳಿದರು.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಕಾನೂನು ಪ್ರಕಾರ ಮಾಡುವ ತನಿಖೆ ನಡೆಸಲಿ, ಅದಕ್ಕೆ ಯಾವುದೇ ರೀತಿಯ ಪ್ರತಿರೋಧವನ್ನು ನಾವು ಒಡ್ಡುವುದಿಲ್ಲ. ಇಡಿ ತನಿಖೆ ನಿಷ್ಪಪಕ್ಷಪಾತವಾಗಿ ನಡೆಯುತ್ತಿದೆಯೇ ಇಲ್ಲವೇ ಎಂಬುದರ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ ಸುಳ್ಳು ಆರೋಪಗಳ ಮೇಲೆ ತನಿಖೆ ನಡೆಯುತ್ತಿದೆ ಎಂಬುದಷ್ಟೇ ಹೇಳಬಲ್ಲೇ ಎಂದರು.

ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಗುತ್ತಿಗೆಗಳಲ್ಲಿ ಮೀಸಲಾತಿ ನೀಡಿರುವಂತೆ ಮುಸ್ಲಿಂಮರಿಗೂ ಮೀಸಲಾತಿ ನೀಡಿ ಎಂದು ಬೇಡಿಕೆಯಿಟ್ಟಿದ್ದಾರೆ. ಆದರೆ ಈ ಬಗ್ಗೆ ಯಾವುದೇ ತೀರ್ಮಾನ ಸರ್ಕಾರ ತೆಗೆದುಕೊಂಡಿಲ್ಲ. ಈಗಾಗಲೇ ಸುಳ್ಳು ಸುದ್ದಿ ಹರಡಿ ಸಮಾಜದ ಸೌಹಾರ್ದತೆ ಲೆಡಿಸಲು ಬಿಜೆಪಿ ಆರಂಭಿಸಿದೆ. ಅವರಿಗೆ ಕೋಮುಗಲಭೆ ಸೃಷ್ಟಿಸುವುದೇ ಕಾಯಕವಾಗಿದೆ. ಬಿಜೆಪಿಯವರೆಂದೂ  ಸಮಾಜದಲ್ಲಿ ಶಾಂತಿ, ಸೋದರತ್ವ ನೆಲೆಸಬೇಕೆಂದು ಬಯಸಿದವರೇ ಅಲ್ಲ ಎಂದು ಹೇಳಿದರು.

Leave a Reply

Your email address will not be published. Required fields are marked *