
ದೊಡ್ಡಬಳ್ಳಾಪುರ: ಬೀದರ್ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಕೂಡಲೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಬಿಜೆಪಿಯಿಂದ ಜ.4 ರಂದು ಸಚಿವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ರಾಜ್ಯ ವಕ್ತಾರ ದೊಡ್ಡರಿ ವೆಂಕಟೇಶ್ ಹೇಳಿದರು.
ಗುತ್ತಿಗೆದಾರನ ಆತ್ಮಹತ್ಯೆಗೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೂ ಸಂಬಂಧವಿದ್ದರೂ ಏನೂ ನಡೆದಿಲ್ಲ ಎಂಬಂತೆ ಉಡಾಫೆ ಉತ್ತರ ನೀಡುತ್ತಿದ್ದಾರೆ. ಮೃತ ಸಚಿನ್ ಪಾಂಚಾಳ ಏಳು ಪುಟ ಡೆತ್‌ನೊಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲ್ಲದೇ ಹಿಂದೂ ಸಮಾಜದ ಸಿದ್ದಲಿಂಗ ಸ್ವಾಮೀಜಿ, ಶಾಸಕ ಬಸವರಾಜ ಮತ್ತಿಮೂಡ, ಕಲಬುರ್ಗಿಯ ಬಿಜೆಪಿ ನಾಯಕರಾದ ಚಂದುಪಾಟೀಲ, ಮಣಿಕಂಠ ರಾಠೋಡ್ ಅವರ ಕೊಲೆಗೆ ಸಂಚು ರೂಪಿಸಿರುವ ಕುರಿತು ಡೆತ್ ನೋಟ್‌ನಲ್ಲಿ ಇದೆ ಎಂದು ದೂರಿದರು.
ಸಿದ್ದಲಿಂಗಸ್ವಾಮೀಜಿ ಅವರ ಧ್ವನಿ ಅಡಗಿಸಲು ಮಹಾರಾಷ್ಟ್ರದ ಸುಪಾರಿ ಕಿಲ್ಲರ್ ಬಳಸುವ ವಿಚಾರವೂ ಡೆತ್ ನೋಟಿನಲ್ಲಿದೆ. ಹಾಗಾಗಿ ಇದೊಂದು ಗಂಭೀರ ವಿಚಾರ. ರಾಜ್ಯದ ಪೊಲೀಸ್ ಇಲಾಖೆಯಿಂದ ಅತ್ಯಂತ ಶಕ್ತಿಶಾಲಿ ಖರ್ಗೆ ಕುಟುಂಬದ ವಿರುದ್ಧ ತನಿಖೆ ಮಾಡಲು ಸಾಧ್ಯವಿಲ್ಲ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಸರ್ಕಾರಿ ನೌಕರರು, ಗುತ್ತಿಗೆದಾರರು ಸೇರಿ ಆರು ಜನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಈಶ್ವರಪ್ಪ ಅವರ ಮೇಲೆ ಆರೋಪ ಬರುತ್ತಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟದ್ದನ್ನು ಪ್ರಿಯಾಂಕ್ ಖರ್ಗೆ ಮರೆಯಬಾರದು. ಸಚಿನ್ ಅವರ ಕುಟುಂಬಕ್ಕೆ ತಕ್ಷಣದಿಂದ ಭದ್ರತೆ ಕಲ್ಪಿಸಬೇಕು. ಅವರ ಕುಟುಂಬಕ್ಕೆ ₹1 ಕೋಟಿ ಪರಿಹಾರ ನೀಡಬೇಕು. ಸೋದರಿಯರು ವಿದ್ಯಾವಂತರಿದ್ದು, ಕುಟುಂಬದ ಒಬ್ಬರು ಸದಸ್ಯರಿಗೆ ಸರ್ಕಾರಿ ನೌಕರಿ ಕೊಡಬೇಕು ಎಂದು ಒತ್ತಾಯಿಸಿದರು.
ಗುತ್ತಿಗೆದಾರರ ಆತ್ಮಹತ್ಯೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಪಾತ್ರ ಇರುವುದು ಸ್ಪಷ್ಟ, ರಾಜಿನಾಮೆ ನೀಡುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ರಾಮಕೃಷ್ಣಪ್ಪ ಹೇಳಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ (ಬಂತಿ), ರವಿಕುಮಾರ್ ಸೇರಿದಂತೆ ಇತರರ ಇದ್ದರು.