ಒಳಮೀಸಲಾತಿ ಜಾರಿಗಾಗಿ ಮಾದಿಗ ಸಮುದಾಯಗಳ ಸ್ವಾಭಿಮಾನದ ಒಕ್ಕೂಟದ ವತಿಯಿಂದ ಮಾ.19ರಂದು ಬೆಳಗ್ಗೆ 10ಕ್ಕೆ ಬೆಂಗಳೂರು ನಗರದ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯಮಟ್ಟದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಒಳಮಿಸಲಾತಿ ಆದೇಶವನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನೆಡೆಯುತ್ತಿರುವ ಹೋರಾಟದಲ್ಲಿ ಭಾಗವಹಿಸಲು ದೊಡ್ಡಬಳ್ಳಾಪುರ ತಾಲ್ಲೂಕಿನಿಂದ ಸಮುದಾಯದ ಸಾವಿರಾರು ಮುಖಂಡರು, ಪ್ರಮುಖರು ಬಸ್ ಗಳ ಮೂಲಕ ತೆರಳಿದರು.
ಈ ಕುರಿತು ಮುಖಂಡ ಬಚ್ಚಳ್ಳಿ ನಾಗರಾಜು ಮಾತನಾಡಿ ಸುಪ್ರೀಂಕೋರ್ಟ್ ಆದೇಶದಂತೆ ಸರ್ಕಾರದ ದತ್ತಾಂಶಗಳನ್ನು ಪರಿಗಣಿಸಿ ಬಿಳಂಬ ನೀತಿ ಅನುಸರಿಸದೆ ಒಳಮೀಸಲಾತಿಯನ್ನು ಜಾರಿಗೊಳಿಸಬೇಕು, ಮಾದಿಗ ಸಮುದಾಯವನ್ನು ಕೇವಲ ವೋಟ್ ಬ್ಯಾಂಕ್ ಆಗಿ ಬಳಸಿಕೊಳ್ಳಲಾಗುತ್ತಿದೆ. ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ್ದರು ರಾಜ್ಯ ಸರ್ಕಾರ ಆದೇಶವನ್ನು ಜಾರಿಗೆ ತರಲು ಮುಂದಾಗುತ್ತಿಲ್ಲ , ಮುಖ್ಯಮಂತ್ರಿಗಳು ಈ ಕೂಡಲೇ ಯಥಾವತ್ತಾಗಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಲಿ ಇಲ್ಲವೇ ಕುರ್ಚಿ ಖಾಲಿ ಮಾಡಲಿ ಎಂದು ಆಗ್ರಹಿಸಿದರು.
ಮಾದಿಗ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಕೊಟ್ಟಿದ್ದರೆ ನಾವೇಗೆ ಹೋರಾಟಕ್ಕೆ ಮುಂದಾಗಬೇಕಿತ್ತು. ಇದು ನಮ್ಮ ಹಕ್ಕು, ಸುಪ್ರೀಂ ಕೋರ್ಟ್ ನೀಡುವ ಆದೇಶವನ್ನು ಯಥಾವತ್ತಾಗಿ ಸರ್ಕಾರ ಜಾರಿಗೊಳಿಸಬೇಕು ಇಲ್ಲವಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರ್ಚಿ ಮಾಡಲಿ ಎಂದರು.
ಪ್ರಮುಖ ಹಕ್ಕೋತ್ತಾಯಗಳು
ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಸರ್ಕಾರದಲ್ಲಿ ಲಭ್ಯವಿರುವ ದತ್ತಾಂಶಗಳನ್ನು ಪರಿಗಣಿಸಿ ವಿಳಂಬ ನೀತಿ ಅನುಸರಿಸದೆ ರಾಜ್ಯ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಬೇಕು.
ನ್ಯಾ. ಸದಾಶಿವ ಆಯೋಗದ ವರದಿ ಮತ್ತು ಒಳಮೀಸಲಾತಿ ವರ್ಗಿಕರಣದ ಶಿಫಾರಸ್ಸಗಳನ್ನು ಸಚಿವ ಸಂಪುಟದಲ್ಲಿ ಅಧಿಕೃತಗೊಳಿಸಿ ಹೆಚ್ಚಳವಾಗಿರುವ ಮೀಸಲಾತಿಯ ಶೇ. 17 ರ ಅನುಪಾತದಲ್ಲಿ ಹೆಚ್ಚುವರಿ ಶೇ. 2 ಮೀಸಲಾತಿಯನ್ನು ಜಾತಿ ಜನಸಂಖ್ಯೆಗೆ ಅನುಗುಣವಾಗಿ ಮಾದಿಗ ಮತ್ತು ಸಂಬಂಧಿತ ಜಾತಿಗಳಿಗೆ ಶೇ. 7% ಮೀಸಲಾತಿಯನ್ನು ನಿಗದಿಪಡಿಸಬೇಕು.
ಸಚಿವ ಸಂಪುಟವು ನಿರ್ಣಯಿಸಿದಂತೆ ಒಳಮೀಸಲಾತಿ ಜಾರಿಯಾಗುವವರೆಗೂ ಸರ್ಕಾರಿ ಉದ್ಯೋಗಗಳಲ್ಲಿ ಸುಮಾರು 37 ಸಾವಿರ ಹುದ್ದೆಗಳ ನೇಮಕಾತಿಗಳನ್ನು ತಡೆಹಿಡಿಯಬೇಕು.
ನಿಜವಾದ 49 ಅಲೆಮಾರಿಗಳನ್ನು ಪ್ರತ್ಯೇಕವಾಗಿ ಗುರ್ತಿಸಿ ಶೇ.1 ಕ್ಕಿಂತ ಹೆಚ್ಚು ಒಳಮೀಸಲಾತಿಯನ್ನು ನೀಡಿ ಪ್ರತ್ಯೇಕ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಅಲೆಮಾರಿಗಳಿಗೆ ನ್ಯಾಯ ಒದಗಿಸಲು ಪ್ರತ್ಯೇಕ ಅಲೆಮಾರಿ ಆಯೋಗವನ್ನು ಸ್ಥಾಪಿಸಬೇಕು.
ಸಮಾಜ ಕಲ್ಯಾಣ ಇಲಾಖೆಯ ಬಜೆಟ್‌ನಲ್ಲಿ ಮತ್ತು ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುಧಾನವನ್ನು ಜನಸಂಖ್ಯಾವಾರು ಹಂಚಿಕೆ ಮಾಡಬೇಕು. ಮಾದಿಗ, ಸಮಗಾರ, ಡೋಹರ, ಮಚಗಾರ ಜಾತಿಗಳ ಜನಸಂಖ್ಯೆಯ ಆಧಾರದ ಮೇಲೆ ಪ್ರತ್ಯೇಕವಾಗಿ ನಿಗಮ ಮಂಡಳಿಗಳಿಗೆ ತಲಾ ಒಂದು ಸಾವಿರ ಕೋಟಿ ಅನುದಾನ ಮೀಸಲಿಟ್ಟು ಅದೇ ವರ್ಷ ವೆಚ್ಚ ಮಾಡಲು ಕ್ರಮ ಕೈಗೊಳ್ಳಬೇಕು.
ಪ್ರತಿಭಟನೆಯಲ್ಲಿ ಸಮುದಾಯದ ಮುಖಂಡರಾದ ರಾಮಮೂರ್ತಿ ರಾಮು ( ನೇರಳೆಘಟ್ಟ), ಕೆ ವಿ ಮುನಿಯಪ್ಪ, ಟಿ.ಡಿ.ಮುನಿಯಪ್ಪ, ಅಂಜನಮೂರ್ತಿ, ರಾಮಕೃಷ್ಣಪ್ಪ ಸೇರಿದಂತೆ ಹಲವು ಸಂಘಟನೆಗಳ ದಲಿತ ಮುಖಂಡರು ಉಪಸ್ಥಿತರಿದ್ದರು.