ಮೂರು ತಿಂಗಳಲ್ಲಿ 06 ದೌರ್ಜನ್ಯ ಪ್ರಕರಣಗಳು ದಾಖಲು: ದೌರ್ಜನ್ಯ ಪ್ರಕರಣಗಳ ಇತ್ಯರ್ಥ ಸಕಾಲದಲ್ಲಿ ಆಗಬೇಕು-ಎ.ಬಿ ಬಸವರಾಜು

ಜಿಲ್ಲೆಯಲ್ಲಿ ದೌರ್ಜನ್ಯ ಕಾಯ್ದೆಯಡಿಯಲ್ಲಿ ದಾಖಲಾಗುವ ಪ್ರಕರಣಗಳಿಗೆ ತ್ವರಿತವಾಗಿ ಸ್ಪಂದಿಸಿ ಸೂಕ್ತ ನ್ಯಾಯ ದೊರಕಿಸಿಕೊಡುವುದರ ಜೊತೆಗೆ ನೊಂದ ಫಲಾನುಭವಿಗಳಿಗೆ ಸಕಾಲದಲ್ಲಿ ಪರಿಹಾರಧನ ಮಂಜೂರು ಮಾಡುವುದರಿಂದ ಸಂತ್ರಸ್ತರಿಗೆ ಶೀಘ್ರ ನ್ಯಾಯ ಸಿಕ್ಕಂತಾಗುತ್ತದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 2025 ನೇ ಸಾಲಿನ 2 ನೇ ತ್ರೈಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ, ಪಿಇಎಂಎಸ್ ಮತ್ತು ಆರ್ ಕಾಯ್ದೆ-2013 ರ ಸಮಿತಿ ಸಭೆ ಹಾಗೂ ಎಸ್.ಸಿ.ಪಿ -ಟಿ.ಎಸ್.ಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಸ್.ಸಿ/ ಎಸ್.ಟಿ ಕಾಯ್ದೆ ಅಡಿಯಲ್ಲಿ ದಾಖಲಾಗುವ ಪ್ರಕರಣಗಳಿಗೆ ತ್ವರಿತವಾಗಿ ನ್ಯಾಯ ದೊರಕಿಸಿಕೊಡಲು ತನಿಖೆ ಚುರುಕಾಗಬೇಕು. ಪೊಲೀಸ್ ಇಲಾಖೆ ಪ್ರಕರಣಗಳ ಮಾಹಿತಿಯನ್ನು ಸಮಾಜ ಕಲ್ಯಾಣ ಇಲಾಖೆಗೆ ನೀಡುವುದರ ಮೂಲಕ ಸಕಾಲದಲ್ಲಿ ಸಂತ್ರಸ್ತರಿಗೆ ಪರಿಹಾರ ಧನ ನೀಡಲು ಸಹಾಯವಾಗುತ್ತದೆ. ಪ್ರಕರಣಗಳ ತನಿಖೆಯನ್ನು ಶೀಘ್ರ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗುತ್ತದೆ. ಶೀಘ್ರ ನ್ಯಾಯ ಸಿಕ್ಕರೆ ದೌರ್ಜನ್ಯ ಪ್ರಕರಣಗಳು ಮರುಕಳಿಸುವುದನ್ನು ತಪ್ಪಿಸಬಹುದು ಎಂದು ಅಭಿಪ್ರಾಯಪಟ್ಟರು.

ಅಧಿಕಾರಿಗಳು ಉಪವಿಭಾಗ ಹಾಗೂ ತಾಲ್ಲೂಕು ಮಟ್ಟದಲ್ಲಿ ಕಡ್ಡಾಯವಾಗಿ ಕುಂದು ಕೊರತೆ ಸಭೆಗಳನ್ನು ನಡೆಸಿ ಸ್ಥಳೀಯ ಸಮಸ್ಯೆಗಳನ್ನು ಸ್ಥಳೀಯ ಹಂತದಲ್ಲಿಯೇ ಬಗೆಹರಿಸಿ. ಪೊಲೀಸ್ ಠಾಣೆಗಳಲ್ಲಿ ನಡೆಯುವ ಕುಂದು ಕೊರತೆ ಸಭೆಗಳಿಗೆ ಜಾಗೃತಿ ಸಮಿತಿಯ ಸದಸ್ಯರನ್ನು ಆಹ್ವಾನಿಸಿ ಎಂದರು.

*6 ದೌರ್ಜನ್ಯ ಪ್ರಕರಣಗಳು ದಾಖಲು*

ಜಿಲ್ಲೆಯಲ್ಲಿ ಏಪ್ರಿಲ್ 01 ರಿಂದ ಜೂನ್ 22 ರವರೆಗೆ 06 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ಸೂಕ್ತ ತನಿಖೆ ನಡೆಸಿ ನೊಂದವರಿಗೆ ನ್ಯಾಯ ಒದಗಿಸಲಾಗುವುದು ಎಂದರು.

ಸಫಾಯಿ ಕರ್ಮಚಾರಿಗಳಿಗೆ ತಾವು ಮಾಡುವ ವೃತ್ತಿಯಲ್ಲಿ ಅನುಸರಿಸಬೇಕಾದ ಸುರಕ್ಷತೆ ಕ್ರಮಗಳ ಬಗ್ಗೆ ಅರಿವು ಇರುವುದಿಲ್ಲ, ಪಂಚಾಯಿತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಸಫಾಯಿ ಕರ್ಮಚಾರಿಗಳಿಗೆ ಅರಿವು ಮೂಡಿಸಿ, ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಿ ಎಂದರು.

ಸಫಾಯಿ ಕರ್ಮಚಾರಿಗಳಿಗೆ ನಿವೇಶನ ಹಂಚಿಕೆ, ವಸತಿ ಹಂಚಿಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

*ಕ್ರಿಯಾ ಯೋಜನೆ ರೂಪಿಸಲು ಸೂಚನೆ*

2025-26 ನೇ ಸಾಲಿನ ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಅನುದಾನಕ್ಕೆ ಕ್ರಿಯಾ ಯೋಜನೆ ಸಿದ್ಧಪಡಿಸಿ ಶೀಘ್ರ ಅನುಮೋದನೆ ಪಡೆಯಲು ಅಧಿಕಾರಿಗಳಿಗೆ ಡಿ.ಸಿ ಸೂಚಿಸಿದರು.

ಸಭೆಯಲ್ಲಿ ಸಿಇಒ ಡಾ.ಕೆ.ಎನ್ ಅನುರಾಧ, ಉಪವಿಭಾಗಾಧಿಕಾರಿ ದುರ್ಗ ಶ್ರೀ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪ್ರೇಮಾ, ನಗರಾಭಿವೃದ್ಧಿ ಇಲಾಖೆಯ ಯೋಜನಾ ನಿರ್ದೇಶಕರಾದ ರಮೇಶ್, ಡಿವೈಎಸ್ಪಿ ರವಿ, ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯರು, ಪಿ.ಇ.ಎಂ.ಎಸ್ ಮತ್ತು ಆರ್ ಆಕ್ಟ್-2013 ಸಮಿತಿ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *