ಆಹಾರ ಘಟಕಗಳ ಮೇಲೆ ತಪಾಸಣೆ ಹೆಚ್ಚಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ‌ಸೂಚನೆ

ಆಹಾರ ಘಟಕಗಳಾದ ಹೋಟೆಲ್, ಡಾಭಾ, ಬೇಕರಿ, ಬೀದಿಬದಿ, ರಸ್ತೆ ಬದಿ ಕ್ಯಾಂಟೀನ್, ಇತರೆ ಆಹಾರ ಸಂಬಂಧಿತ ಘಟಕಗಳಿಗೆ ಅನಿರೀಕ್ಷಿತ ದಾಳಿ ನಡೆಸಿ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದುಕೊಳ್ಳದ ಆಹಾರ ಘಟಕಗಳ ಮೇಲೆ ಸೂಕ್ತ ಕ್ರಮ ಜರುಗಿಸಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹೆದ್ದಾರಿಗಳಲ್ಲಿನ ಡಾಭಾ, ರಸ್ತೆ ಬದಿ ಹೋಟೆಲ್, ಕ್ಯಾಂಟೀನ್ ಗಳಲ್ಲಿ ಆಹಾರ ಸುರಕ್ಷತೆ ಕ್ರಮಗಳು, ಆಹಾರದ ಗುಣಮಟ್ಟ ಕಾಯ್ದುಕೊಳ್ಳದೇ ವ್ಯಾಪಾರ ನಡೆಸುತ್ತಿರುತ್ತಾರೆ. ಅಂತಹ ಸ್ಥಳಗಳಲ್ಲಿ ಆಹಾರ ಸೇವನೆಯು ಮನುಷ್ಯನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಹಾಗೇಯೇ ಕೆಲವು ಆಹಾರ ಘಟಕಗಳು ಲೈಸೆನ್ಸ್( ಪರವಾನಗಿ) ಪಡೆಯದೇ ನಡೆಸುತ್ತಿರುತ್ತಾರೆ. ಅಂತಹ ಜಾಗಗಳಲ್ಲಿ ಹೆಚ್ಚು ದಾಳಿ ನಡೆಸಿ ಕಳಪೆ ಆಹಾರ ತಯಾರಿಕೆ ಘಟಕಗಳು ಕಂಡು ಬಂದಲ್ಲಿ ದಂಡ ವಿಧಿಸುವುದರ ಜೊತೆಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ ಎಂದರು.

ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಶಾಲಾ ಕಾಲೇಜು, ಅಂಗನವಾಡಿ, ವಸತಿ ನಿಲಯಗಳಲ್ಲಿ ಆಗಿಂದಾಗ್ಗೆ ತಪಾಸಣೆ ನಡೆಸಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪರಿಶೀಲಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ಅಂಕಿತಾಧಿಕಾರಿ ಮಾತನಾಡಿ ಏಪ್ರಿಲ್ ಮಾಹೆಯಿಂದ ಮೇ ಮಾಹೆಯವರೆಗೆ ಜಿಲ್ಲೆಯಲ್ಲಿ 115 ಆಹಾರ ಘಟಕಗಳಲ್ಲಿ ತಪಾಸಣೆ ನಡೆಸಿ, 44 ಘಟಕಗಳಿಗೆ ನೋಟಿಸ್ ನೀಡಲಾಗಿದೆ. 07 ಘಟಕಗಳಿಗೆ ದಂಡ ವಿಧಿಸಿ 33,000 ರೂ.ದಂಡ ಸಂಗ್ರಹಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಲಕ್ಕಾ ಕೃಷ್ಣ ರೆಡ್ಡಿ, ನಗರಾಭಿವೃದ್ಧಿ ಇಲಾಖೆ ಯೋಜನಾ ನಿರ್ದೇಶಕರಾದ ರಮೇಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕರಾದ ಅಶೋಕ್ ಕುಮಾರ್ ಡಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬೈಲಾಂಜನಪ್ಪ, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *