ತಾಲೂಕು ಮಟ್ಟದಲ್ಲೂ ಜನಸಂಪರ್ಕ ಸಭೆ ನಡೆಸಿ ಜನರಿಗೆ ಸ್ಪಂದಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಇಂಧನ ಸಚಿವ ಕೆ.ಜೆ.ಜಾರ್ಜ್

ಚಿಕ್ಕಮಗಳೂರು ಜಿಲ್ಲೆಯ ಜನರ ಸಮಸ್ಯೆಗಳಿಗೆ ಸ್ಥಳೀಯವಾಗಿಯೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ಜಿಲ್ಲಾ ಮಟ್ಟದಲ್ಲಿ ಮಾತ್ರವಲ್ಲದೆ, ತಾಲೂಕು ಮಟ್ಟದಲ್ಲೂ ಜನ ಸಂಪರ್ಕ ಸಭೆಗಳನ್ನು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿಯನ್ನೂ ಹೊಂದಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ನಗರದ ಕುವೆಂಪು ಕಲಾಮಂದಿರದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಮತನಾಡಿದ ಅವರು, “ಜಿಲ್ಲೆಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚಾಗಿದ್ದು, ಸ್ಥಳೀಯವಾಗಿಯೇ ಅವುಗಳಿಗೆ ಪರಿಹಾರ ಕಲ್ಪಿಸಲಾಗುವುದು,” ಎಂದರು.

“ರಾಜ್ಯದ ಎಲ್ಲ ಜಿಲ್ಲೆಗಳ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಆಯಾ ಜಿಲ್ಲೆಗಳಲ್ಲಿ ಜನಸಂಪರ್ಕ ಸಭೆಗಳನ್ನು ನಡೆಸಿ ಪರಿಹಾರ ಕಲ್ಪಿಸುವಂತೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಈ ಸಭೆ ಆಯೋಜಿಸಲಾಗಿದೆ. ಕೇವಲ ಸಭೆ ನಡೆಸಿ ಸಮಸ್ಯೆಗಳನ್ನು ಕೇಳಿಕೊಳ್ಳುವುದು ಮಾತ್ರವಲ್ಲ, ಅವುಗಳಿಗೆ ಪರಿಹಾರವನ್ನೂ ಕಲ್ಪಿಸುವ ಕೆಲಸ ಮಾಡಲಾಗುತ್ತದೆ. ಇದರಿಂದ ಜಿಲ್ಲೆಯ ಜನರು ತಮ್ಮ ಅಹವಾಲುಗಳ್ನು ಹೇಳಿಕೊಂಡು ಬೆಂಗಳೂರಿಗೆ ಬರುವುದು ತಪ್ಪಿದೆ,” ಎಂದು ತಿಳಿಸಿದರು.

*ಗ್ಯಾರಂಟಿ ಅನುಷ್ಠಾನದಲ್ಲಿ ಸಾಧನೆ*
“ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳ ಅನುಷ್ಠಾನದಲ್ಲಿ ಚಿಕ್ಕಮಗಳೂರು ಜಿಲ್ಲೆ ಉತ್ತಮ ಸಾಧನೆ ಮಾಡಿದ್ದು ರಾಜ್ಯಕ್ಕೇ ಪ್ರಥಮ ಸ್ಥಾನದಲ್ಲಿದೆ. ಈ ಕೆಲಸವನ್ನುಇನ್ನಷ್ಟು ಚುರುಕುಗೊಳಿಸುವ ಮೂಲಕ ಸರ್ಕಾರದ ನೆರವು ಎಲ್ಲಾ ಸಮುದಾಯದವರಿಗೆ ಸಿಗುವಂತೆ ನೋಡಿಕೊಳ್ಳಲಾಗುವುದು,” ಎಂದು ಹೇಳಿದರು.

ಶಾಸಕ ಹೆಚ್.ಡಿ.ತಮ್ಮಯ್ಯ ಮಾತನಾಡಿ, “ನಮ್ಮ ಜಿಲ್ಲೆಯಲ್ಲಿ ಈಗಾಗಲೇ 4 ರಿಂದ 6 ಬಾರಿ ಜನಸಂಪರ್ಕ ಸಭೆಗಳನ್ನು ಯಶಸ್ವಿಯಾಗಿ ನಡೆಸಿರುವ ಕೀರ್ತಿ ನಮ್ಮ ಉಸ್ತುವಾರಿ ಸಚಿವರಿಗೆ ಸಲ್ಲುತ್ತದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್, “ಪ್ರಾಸ್ತಾವಿಕ ಮಾತನಾಡಿ, ಕಳೆದ ಎರಡೂವರೆ ವರ್ಷದಲ್ಲಿ ಜನತಾ ದರ್ಶನ ಕಾರ್ಯಕ್ರಮಗಳನ್ನು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ನಡೆಸಲಾಗಿದೆ. ಅದರಲ್ಲಿ ಒಟ್ಟು 829 ಸ್ವೀಕರಿಸಲಾಗಿದ್ದು, ಅವುಗಳಲ್ಲಿ 496 ಅರ್ಜಿಗಳು ಕಂದಾಯ ಇಲಾಖೆಗೆ ಸಂಬಂಧಿಸಿದ್ದಾಗಿವೆ. ಆ ಪೈಕಿ ಬಹುತೇಕ ಅರ್ಜಿಗಳನ್ನು ಸಕಾರಾತ್ಮಕವಾಗಿ ಇತ್ಯರ್ಥಪಡಿಸಲಾಗಿದೆ,” ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಒಟ್ಟು 123 ದೂರು ಅರ್ಜಿಗಳು ಸ್ವೀಕೃತಗೊಂಡಿದ್ದು, ಇವುಗಳಲ್ಲಿ 60 ಅರ್ಜಿದಾರರು ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಸಚಿವರ ಮುಂದೆ ನಿವೇದಿಸಿಕೊಂಡರು. ಈ ಬಗ್ಗೆ ತ್ವರಿತ ಕ್ರಮ ಕೈಗೊಳ್ಳುವಂತೆ ಸಚಿವ ಕೆ.ಜೆ.ಜಾರ್ಜ್ ಅವರು ಅಧಿಕಾರಿಗಳಿಗೆ ನಿರ್ದೇಶಿಸಿದರು.

ಕ್ರಿಸ್ ಮಸ್ ಹಬ್ಬದ ಅಂಗವಾಗಿ ಪ್ರವಾಸೋದ್ಯಮಇಲಾಖೆಯಿಂದ ನಡೆಸಲು ಉದ್ದೇಶಿಸಿರುವ ಹೆಲಿ ಟೂರಿಸಂ ಕುರಿತ ಭಿತ್ತಿಪತ್ರಗಳನ್ನು ಇದೇ ವೇಳೆ ಇಂಧನ ಸಚಿವ ಕೆ.ಜೆ.ಜಾರ್ಜ್ ಬಿಡುಗಡೆ ಮಾಡಿದರು.

ಕ್ರೆಡಲ್ ಅಧ್ಯಕ್ಷರೂ ಆದ ಶಾಸಕ ಟಿ.ಡಿ.ರಾಜೇಗೌಡ, ಶಾಸಕ ಜಿ.ಹೆಚ್.ಶ್ರೀನಿವಾಸ್, ಮೆಸ್ಕಾಂ ಅಧ್ಯಕ್ಷರೂ ಆಗಿರುವ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಕ.ರಾ.ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷರಾದ ಬಿ.ಹೆಚ್.ಹರೀಶ್, ಜಿ.ಪಂ. ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ, ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ, ಜಿಲ್ಲಾಮಟ್ಟ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.

Leave a Reply

Your email address will not be published. Required fields are marked *

error: Content is protected !!