
ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಸಮೀಪ ಎಸ್‌ಟಿಆರ್‌ಆರ್ ರಸ್ತೆಯಲ್ಲಿ ಶನಿವಾರ ತಡರಾತ್ರಿ ನಡೆದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ…
ಹೈವೆಯಿಂದ ಸರ್ವೀಸ್ ರಸ್ತೆಗೆ ಬರುತ್ತಿದ್ದ ಟಿಟಿಗೆ ಲಾರಿ ಡಿಕ್ಕಿಯಾದ ಪರಿಣಾಮ ವಾಹನದಲ್ಲಿದ್ದ 13 ಮಂದಿ ಪೈಕಿ ಮೂವರು ಮಹಿಳೆಯರು ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ.

ಜಯಮ್ಮ(60), ಯಶೋದಮ್ಮ(60), ಗಂಗಾ(38) ಮೃತ ದುರ್ದೈವಿಗಳು.
ಟಿಟಿ ವಾಹನ ಚಾಲಕ ಸೇರಿದಂತೆ 8 ಜನರಿಗೆ ಅಪಘಾತದಲ್ಲಿ ಗಾಯಗಳಾಗಿವೆ. ದೇವನಹಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಕೆಂಪಮ್ಮ ಎಂಬುವರು ಗಂಭೀರ ಗಾಯಗೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

15 ದಿನಗಳ ಪ್ರವಾಸಕ್ಕೆಂದು ಒಂದೇ ಏರಿಯಾದ ಜನರು ಹೊರಟಿದ್ದರು. ಸ್ತ್ರೀ ಶಕ್ತಿ ಸಂಘಟನೆ ಚೀಟಿ ಮೂಲಕ ಪ್ರವಾಸದ ಪ್ಲಾನ್ ಮಾಡಿದ್ದ 12 ಜನರ ತಂಡ ಇಂದು ಬೆಳಗ್ಗೆ 6 ಗಂಟೆಯ ಪ್ಲೈಟ್ ನಲ್ಲಿ ಕಾಶಿಗೆ ಟಿಕೆಟ್ ಬುಕ್ ಮಾಡಿತ್ತು. ಹೀಗಾಗಿ ತಿಪಟೂರಿನಿಂದ ಕೆಂಪೇಗೌಡ ಏರ್ಪೋರ್ಟ್ಗೆ ಟಿಟಿ ವಾಹನದ ಮೂಲಕ ರಾತ್ರಿ 10 ಗಂಟೆ ಸುಮಾರಿಗೆ ಹೊರಟಿದ್ದರು. ಏರ್ಪೋರ್ಟ್ನ ಟರ್ಮಿನಲ್ ದಾರಿಯ ಬಗ್ಗೆ ಸರಿಯಾಗಿ ತಿಳಿದಿರದ ಕಾರಣ ಗೂಗಲ್ ಮ್ಯಾಪ್ ಹಾಕಿಕೊಂಡು ಟಿಟಿ ಚಾಲಕ ವಾಹನ ಚಾಲನೆ ಮಾಡುತ್ತಿದ್ದ.

ಅಪಘಾತ ನಡೆದ ಸ್ಥಳಕ್ಕೂ ಹಿಂದೆಯೇ ಸರ್ವೀಸ್ ರಸ್ತೆಗೆ ಮೊದಲ ಟರ್ನಿಂಗ್ ಇತ್ತು. ಆದರೆ ಅದು ಗೊತ್ತಾಗದೆ ಮುಂದೆ ಪಾಸ್ ಆಗಿದ್ದ ಟಿಟಿ ವಾಹನ ಮುಂದಿನ ಟರ್ನಿಂಗ್ನಲ್ಲಿ ಯೂಟರ್ನ್ ಪಡೆಯುವ ವೇಳೆ ಲಾರಿ ಟಿಟಿಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಟಿಟಿಯ ಎಡಭಾಗ ಸಂಪೂರ್ಣ ಜಖಂ ಆಗಿದ್ದು, ಸಿಂಗಲ್ ಸೀಟ್ಗಳಲ್ಲಿ ಕುಳಿತಿದ್ದ ಮೂವರು ಮಹಿಳೆಯರ ದುರ್ಮರಣ ಹೊಂದಿದ್ದಾರೆ ಎಂದು ತಿಳಿದುಬಂದಿದೆ…