ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿರ್ಧಾರ- ಸಿಎಂ ಸಿದ್ದರಾಮಯ್ಯ

ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಎಡ, ಬಲ ಹಾಗೂ ಇತರೇ ಸಮುದಾಯಗಳಿಗೆ 5.25, 5.25 ಮತ್ತು 4.5 ಮೀಸಲಾತಿ ಕಲ್ಪಿಸಲು ಸರ್ವಾನುಮತದಿಂದ ಒಪ್ಪಿಗೆ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಒಳಮೀಸಲಾತಿಗೆ ಸಂಬಂಧಿಸಿದಂತೆ ಇಂದು ನಡೆದ ಸಂಪುಟ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಮೀಸಲಾತಿಯನ್ನು ಶೇ.50ಕ್ಕೆ ಮಿತಿಗೊಳಿಸುವ ಹೈಕೋರ್ಟ್ ತೀರ್ಪಿನ ಪ್ರಕಾರ ಪರಿಶಿಷ್ಟ ಜಾತಿಯೊಳಗೆ ಒಳ ಮೀಸಲಾತಿಯನ್ನು ಮರು ನಿಗದಿಪಡಿಸಿ ಪರಿಶಿಷ್ಟ ಜಾತಿಗೆ 15% ಹಾಗೂ ಪರಿಶಿಷ್ಟ ವರ್ಗಗಳಿಗೆ ಶೇ.3 ರಷ್ಟು ಮೀಸಲಾತಿ ನೀಡಲಾಗಿದೆ. ಒಳಮೀಸಲಾತಿಗೆ ರಚಿಸಲಾಗಿದ್ದ ಕಾಯ್ದೆಗೆ ಅನುಗುಣವಾಗಿ 17% ಮೀಸಲಾತಿಗೆ 6%, 6% ಹಾಗೂ 5% ಇದ್ದರೆ, ಈಗಿನ 15% ಮೀಸಲಾತಿಗೆ 5.3%, 5.3% ಹಾಗೂ 4.4% ಮೀಸಲಾತಿಯನ್ನು ನಿಗದಿ ಮಾಡಿ ವರದಿ ನೀಡಲಾಗಿದ್ದು, ಅಂತಿಮವಾಗಿ ಸಚಿವ ಸಂಪುಟ ಸಭೆಯು ಎಡಗೈ ಸಂಬಂಧಿತ ಜಾತಿಗಳಿಗೆ 5.25%, ಬಲಗೈ ಜಾತಿಗಳಿಗೆ 5.25%, ಬೋವಿ, ಲಂಬಾಣಿ, ಕೊರಚ, ಕೊರಮ ಹಾಗೂ 59 ಅಲೆಮಾರಿ ಜಾತಿಗಳು ಸೇರಿ 4.5% ಮೀಸಲಾತಿ ನೀಡಲು ತೀರ್ಮಾನಿಸಿದೆ ಎಂದರು.

ಈ ನಿರ್ಧಾರದಿಂದ ಎಲ್ಲ ಸಮುದಾಯಗಳಿಗೂ ಸಮಾನ ನ್ಯಾಯ ಸಿಗಲಿದೆ ಎಂದು ವಿಶ್ವಾಸವಿದೆ. ನೇಮಕಾತಿ ಮಾಡುವ ಸಂದರ್ಭದಲ್ಲಿ ಒಳಮೀಸಲಾತಿಯನ್ನು ಇದರನ್ವಯ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.

ಶೇ. 6ರಷ್ಟು ಮೀಸಲಾತಿಗೆ ಸಂಬಂಧಿಸಿದಂತೆ ಉಚ್ಛ ನ್ಯಾಯಾಲಯ ಅಂತಿಮವಾಗಿ ತೀರ್ಮಾನ ಕೈಗೊಳ್ಳುವವರೆಗೆ ಅವುಗಳನ್ನು ಬ್ಯಾಕ್ ಲಾಗ್ ಎಂದು ಪರಿಗಣಿಸಲಾಗುವುದು. ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿಗೆ ಸಂಬಂಧಿಸಿದಂತೆ ರಾಷ್ಟ್ರದಲ್ಲಿಯೇ ಮಹತ್ವಪೂರ್ಣ ನಿರ್ಧಾರ ಇದಾಗಿದ್ದು, ರೋಸ್ಟರ್‌ಗೆ ಸಂಬಂಧಿಸಿದಂತೆ ಸೂಕ್ತ ಪರಿಹಾರವನ್ನು ಕೈಗೊಂಡು ರಾಜ್ಯದ ಶೋಷಿತ ವರ್ಗಗಳ ಬದುಕಿನಲ್ಲಿ ತಿರುವು ನೀಡಲಾಗುತ್ತಿದೆ ಎಂದರು.

ಒಳಮೀಸಲಾತಿ ಕುರಿತು ಬಹುಕಾಲದಿಂದ ಅನೇಕ ಹೋರಾಟಗಳು ನಡೆದಿವೆ. ನಂತರ ಚಿತ್ರದುರ್ಗದಲ್ಲಿ ನಡೆದ ಪರಿಶಿಷ್ಟ ಜಾತಿ ಸಮಾವೇಶದಲ್ಲಿ ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸುವ ಐತಿಹಾಸಿಕ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ‌ಈ ಸಮಾವೇಶದಲ್ಲಿ 101 ಪರಿಶಿಷ್ಟ ಜಾತಿಗಳು, ಅಲೆಮಾರಿ ಸಮಾಜ ಸೇರಿದಂತೆ 59 ಜಾತಿಗಳ ಪ್ರತಿನಿಧಿಗಳು ಪಾಲ್ಗೊಂಡು ಒಳಮೀಸಲಾತಿಗೆ ಸರ್ವಾನುಮತದಿಂದ ಒಪ್ಪಿಗೆ ನೀಡಿದ್ದರು. ಗೃಹ ಸಚಿವ ಡಾ: ಜಿ. ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ಪ್ರಣಾಳಿಕಾ ಸಮಿತಿಯಲ್ಲಿಯೂ ಒಳಮೀಸಲಾತಿಯನ್ನು ನಮ್ಮ ಸರ್ಕಾರ ಬಂದಮೇಲೆ ನೀಡಲಿದೆ ಎಂಬ ಭರವಸೆ ನೀಡಲಾಗಿತ್ತು ಎಂದರು.

ಸುಪ್ರೀಂ ಕೋರ್ಟ್ ಒಳಮೀಸಲಾತಿ ಕಲ್ಪಿಸುವ ತೀರ್ಮಾನವನ್ನು ಆಯಾ ರಾಜ್ಯಗಳೇ ತೆಗೆದುಕೊಳ್ಳಬಹುದು ಎಂದು ಆದೇಶ ನೀಡಿದ ನಂತರ, ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ಅವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚಿಸಲಾಯಿತು. ಅವರು ನೀಡಿದ ವರದಿ ಆಧರಿಸಿ ಸಚಿವ ಸಂಪುಟವು ಪರಿಶಿಷ್ಟ ಜಾತಿಯ ಬಲ, ಎಡ ಸಮುದಾಯಗಳು ಹಾಗೂ ಇತರೇ ಅಲೆಮಾರಿ ಜಾತಿಗಳಿಗೆ ಕ್ರಮವಾಗಿ 6%:6%:5% ಮೀಸಲಾತಿ ಕಲ್ಪಿಸುವ ನಿರ್ಧಾರ ತೆಗೆದುಕೊಂಡಿತ್ತು. ಪರಿಶಿಷ್ಟರಿಗೆ ಒಟ್ಟು 24% ಅಂದರೆ 7% ರಷ್ಟು ಎಸ್.ಟಿ ಗೆ ಹಾಗೂ 17% ಎಸ್.ಸಿ ಸಮುದಾಯಗಳಿಗೆ ಮೀಸಲಿಡಲಾಯಿತು. ಹೀಗಾಗಿ ಒಟ್ಟು ಶೇ 56% ರಷ್ಟು ಮೀಸಲಾತಿ ನೀಡಿದಂತಾಯಿತು ಎಂದು ತಿಳಿಸಿದ್ದಾರೆ.

ನ್ಯಾಯಾಲಯವು ಇಂದಿರಾ ಸಹಾನಿ ಪ್ರಕರಣವನ್ನು ಉಲ್ಲೇಖಿಸಿ ಮೀಸಲಾತಿ ಶೇ 50 ರಷ್ಟು ಮೀರಬಾರದು ಎಂದು ಪುನರುಚ್ಛರಿಸಿತ್ತು. ಆದರೆ ಈ ಮೀಸಲಾತಿಗೆ ಅಪಸ್ವರಗಳು ಎದ್ದ ನಂತರ ಗೊಂದಲ ನಿವಾರಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ತಾಂತ್ರಿಕ ಸಮಿತಿ ರಚಿಸಿ ವರದಿಯನ್ನು ಪಡೆಯಲಾಗಿದೆ. ಅದರಂತೆ ಕೋರ್ಟ್ ಆದೇಶದ ಶೇಕಡ 50 ಮಿತಿಗೆ ಒಳಪಟ್ಟು ಇಂದಿನ ಸಚಿವ ಸಂಪುಟದಲ್ಲಿ ಎಡ, ಬಲ ಹಾಗೂ ಇತರೇ ಸಮುದಾಯಗಳಿಗೆ 5.25%, 5.25% ಹಾಗೂ 4.5% ಮೀಸಲಾತಿ ಕಲ್ಪಿಸುವ ದಿಟ್ಟ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಈಗಾಗಲೇ ಬಜೆಟ್ ನಲ್ಲಿ ಘೋಷಿಸಿರುವಂತೆ ಈ ವರ್ಷ 56,432 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಿ, ತುರ್ತು ಕ್ರಮ ಕೈಗೊಳ್ಳಲಾಗುವುದು. ನಮ್ಮ ಸರ್ಕಾರವು ಶೇಕಡಾ 56 ಮೀಸಲಾತಿ ನೀಡಬೇಕೆನ್ನುವ ನಿರ್ಧಾರಕ್ಕೆ ಬದ್ಧವಾಗಿದೆ. ಸಿ ಕೆಟಗರಿಯಲ್ಲಿ ನೇಮಕಾತಿಗೆ ಲಭ್ಯವಾಗುವ ಹುದ್ದೆಗಳಲ್ಲಿ ಶೇ.20ರಷ್ಟನ್ನು 59 ಅಲೆಮಾರಿ ಜಾತಿಗಳಿಗೆ ಮೀಸಲಿಡಲು ಸoಪುಟದಲ್ಲಿ ನಿರ್ಧರಿಸಲಾಗಿದೆ. ಈಗ ಪ್ರಸಕ್ತ ತೀರ್ಮಾನದಂತೆ ಸಿ ಕೆಟಗರಿಗೆ 4.5% ಮೀಸಲಾತಿ ಕಲ್ಪಿಸಲಾಗಿದೆ ಎಂದರು.

ನಮ್ಮ ಸರ್ಕಾರವು ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ನೀತಿಗೆ ಬದ್ಧವಾಗಿದ್ದು, ಜನರಿಗೆ ನೀಡಿದ ವಚನದಂತೆ ನಡೆದು ಕೊಂಡಿದ್ದೇವೆ. ದಲಿತ ಸಂಘಟನೆಗಳು ಸೇರಿದಂತೆ ಇತರ ಸಮುದಾಯಗಳು ಈ ನಿರ್ಧಾರವನ್ನು ಸ್ವಾಗತಿಸುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ನಮ್ಮ ಸರ್ಕಾರವು ಶೇಕಡ 24 ಮೀಸಲಾತಿಗೆ ಅಂದರೆ ಪರಿಶಿಷ್ಟ ಜಾತಿಗೆ ಶೇಕಡಾ 17 ಮತ್ತು ಪರಿಶಿಷ್ಟ ಪಂಗಡಕ್ಕೆ ಶೇಕಡಾ 7ರ ತೀರ್ಮಾನಕ್ಕೆ ಬದ್ಧವಾಗಿದೆ. ಭವಿಷ್ಯದಲ್ಲಿ ಶೇಕಡ 17ರಷ್ಟು ಮೀಸಲಾತಿ ಕಲ್ಪಿಸಬಹುದು ಎಂದು ಕೋರ್ಟ್ ತೀರ್ಪು ಸರ್ಕಾರದ ಪರವಾಗಿ ಬಂದಲ್ಲಿ ಈ ಹಿಂದೆ ಸಚಿವ ಸಂಪುಟದಲ್ಲಿ ತೆಗೆದುಕೊಂಡಿರುವ 6%, 6% ಹಾಗೂ 5% ಮೀಸಲಾತಿ ತೀರ್ಮಾನದಂತೆ ಶೇಕಡ 6 ಅನ್ನು ಬ್ಯಾಕ್ ಲಾಗ್ ಎಂದು ತೀರ್ಮಾನಿಸಲಾಗುವುದು ಎಂದರು.

Leave a Reply

Your email address will not be published. Required fields are marked *

error: Content is protected !!