ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ನಾಳೆ ಬೆಳಗ್ಗೆ 11 ಗಂಟೆಗೆ ಹಿರಿಯ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳ ಸಭೆ ಕರೆದಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಮೀಟಿಂಗ್ ನಡೆಯಲಿದೆ.
ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಹಾಗೂ ಜಲಜೀವನ್ ಮಿಷನ್ ಕಾರ್ಯಕ್ರಮ ಅನುಷ್ಠಾನ ಕುರಿತು ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಚರ್ಚೆ ಮಾಡಲಿದ್ದಾರೆ.
ಈ ಬಾರಿ ವಾಡಿಕೆಯಷ್ಟು ಮಳೆ ಆಗುವ ಸಾಧ್ಯತೆ ಇದ್ದು, ಭಾರಿ ಪ್ರಮಾಣದ ಮಳೆಯಾಗುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಎದುರಾಗಬಹುದಾದ ಕುಡಿಯುವ ನೀರಿನ ಸಮಸ್ಯೆಗೆ ಈಗಲೇ ಪರಿಹಾರ ಕಂಡುಕೊಳ್ಳಲು ಸಿಎಂ ನಿರ್ಧರಿಸಿದ್ದಾರೆ.
ರಾಜ್ಯದ ಯಾವ ಭಾಗದಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಆಗಬಾರದು. ಕಳೆದ ವಾರವೇ ನೀಡಿರುವ ಸೂಚನೆ ಪ್ರಕಾರ ಅಗತ್ಯ ಮುನ್ನೆಚ್ಚರಿಕೆ ಮತ್ತು ಸಿದ್ಧತೆಗಳನ್ನು ಪರಿಣಾಮಕಾರಿಯಾಗಿ ಮಾಡಿಕೊಳ್ಳಬೇಕು ಎನ್ನುವ ಸೂಚನೆಯನ್ನೂ ನೀಡಿದ್ದಾರೆ. ಹಾಗಾಗಿ ಈ ವಿಚಾರ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಗೃಹ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಹಾರ ಮಾರ್ಗ ಸೂಚಿಸಲಿದ್ದಾರೆ.