
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಏರ್ಪೋರ್ಟ್ ರಸ್ತೆಯ ಭುವನಹಳ್ಳಿ ಗೇಟ್ ಸಮೀಪ ನಡೆದಿದೆ.
ಬೆಂಗಳೂರು ಪಿಣ್ಯ ಮೂಲದ ಚಂದನಾ (24) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಚಂದನ ಅವರು ಜೂಪಿಟರ್ ದ್ವಿಚಕ್ರ ವಾಹನದಲ್ಲಿ ಹಿಂಬದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ದೇವನಹಳ್ಳಿ ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಜೂಪಿಟರ್ ಬೈಕ್, ಭುವನಹಳ್ಳಿ ಬ್ರಿಡ್ಜ್ ಇಳಿಜಾರು ಪ್ರದೇಶದಲ್ಲಿ ಮುಂದೆ ಸಾಗುತ್ತಿದ್ದ ಸೈಕಲ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ ಗ್ರಿಲ್‌ಗೆ ಅಪ್ಪಳಿಸಿದೆ.
ಘಟನೆಯ ವೇಳೆ ಬೈಕ್ ಹಿಂಬದಿ ಕುಳಿತಿದ್ದ ಚಂದನಾ ಅವರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಸೈಕಲ್ ಸವಾರ ಹಾಗೂ ಬೈಕ್ ಸವಾರನಿಗೂ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ದೇವನಹಳ್ಳಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.