
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬಳಿಕ ರಾಜ್ಯದಲ್ಲಿ ನೂತನ ಸರ್ಕಾರ ರಚನೆಗೆ ಚಟುವಟಿಕೆಗಳು ವೇಗ ಪಡೆದಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿ ಎಲ್ ಪಿ) ನಾಯಕರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಶನಿವಾರ ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪಿಸಿದರು. ಮಾಜಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಈ ಪ್ರಸ್ತಾವನೆಯನ್ನು ಅನುಮೋದಿಸಿದರು. ಬಳಿಕ ಸಭೆಯಲ್ಲಿ ಭಾಗವಹಿಸಿದ್ದ ಎಲ್ಲ ಶಾಸಕರು ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲ ಅವರ ಮೇಲ್ವಿಚಾರಣೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿತು.
ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಡಿ.ಕೆ. ಶಿವಕುಮಾರ್ ಅವರು ಶನಿವಾರ ಸಂಜೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಸಾಧ್ಯತೆ ಇದೆ.
ಇದರೊಂದಿಗೆ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸುವ ಹಾದಿ ಸುಗಮವಾಗಿದೆ.
ಇನ್ನೊಂದೆಡೆ ಕರ್ನಾಟಕ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ದಿನಾಂಕ ನಿಗದಿಯಾಗಿದೆ. ಜೂನ್ 3ರ ಬುಧವಾರ ಸಂಜೆ 4.05 ಕ್ಕೆ ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂಬ ಮಾಹಿತಿ ಉನ್ನತ ಮೂಲಗಳಿಂದ ತಿಳಿದುಬಂದಿದೆ.