ಭೀಕರ ಸರಣಿ ಅಪಘಾತ: ಐವರು ಸ್ಥಳದಲ್ಲೇ ಸಾವು, ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ

 

ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸುಂಕಲಮ್ಮ ದೇವಸ್ಥಾನದ ಸಮೀಪ ಭಾನುವಾರ ಭೀಕರ ಸರಣಿ ರಸ್ತೆ ಅಪಘಾತ ಸಂಭವಿಸಿ ಆಟೋದಲ್ಲಿದ್ದ ನಾಲ್ವರು ಮಹಿಳೆಯರು ಹಾಗೂ ಚಾಲಕ ಸೇರಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಥಾರ್ ಕಾರು, ಆಟೋ ಹಾಗೂ ಕ್ಯಾಂಟರ್ ವಾಹನಗಳ ನಡುವೆ ಈ ಸರಣಿ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಥಾರ್ ಕಾರು ತನ್ನ ಮುಂದೆ ಚಲಿಸುತ್ತಿದ್ದ ಆಟೋಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಆಟೋ ನಿಯಂತ್ರಣ ತಪ್ಪಿ ಮುಂಭಾಗದಲ್ಲಿದ್ದ ಕ್ಯಾಂಟರ್ ವಾಹನಕ್ಕೆ ಅಪ್ಪಳಿಸಿದೆ. ಪರಿಣಾಮ ಆಟೋ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಉಮಾದೇವಿ (55), ವಿಜಯಾ (40), ಲಕ್ಷ್ಮಮ್ಮ (50), ಸರೋಜಮ್ಮ ಹಾಗೂ ಆಟೋ ಚಾಲಕ ಆಂಜಿನಪ್ಪ (35) ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಬಾಗೇಪಲ್ಲಿ ಪಟ್ಟಣದ ನಿವಾಸಿಗಳಾಗಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಗಾಯಗೊಂಡ ಹತ್ತಕ್ಕೂ ಹೆಚ್ಚು ಮಂದಿಯನ್ನು ಸ್ಥಳೀಯರು ಹಾಗೂ ಪೊಲೀಸರು ತಕ್ಷಣ ರಕ್ಷಿಸಿ ಸಮೀಪದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ.

ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕುಶಲ್ ಚೌಕ್ಸೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಾಗೇಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!