ರಾಜ್ಯಸಭೆ, ಪರಿಷತ್ ಚುನಾವಣೆ: ಬಿಜೆಪಿ ಅಚ್ಚರಿ ನಿರ್ಧಾರ, ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ನಿರಾಕರಣೆ

ಬೆಂಗಳೂರು: 2026ರ ರಾಜ್ಯಸಭೆ ಹಾಗೂ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿದ್ದು, ಕರ್ನಾಟಕದಿಂದ ರಾಜ್ಯಸಭೆಗೆ ಪ್ರೊ. ಎಂ. ನಾಗರಾಜ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ. ವಿಧಾನ ಪರಿಷತ್ ಚುನಾವಣೆಗೆ ಲಿಂಗರಾಜ್ ಪಾಟೀಲ್ ಹಾಗೂ ರಘು ಕೌಟಿಲ್ಯ ಅವರಿಗೆ ಟಿಕೆಟ್ ನೀಡಲಾಗಿದೆ.

ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಅಭ್ಯರ್ಥಿಗಳ ಪಟ್ಟಿಗೆ ಅನುಮೋದನೆ ನೀಡಿದ್ದು, ರಾಜ್ಯಸಭೆಗೆ ಒಬಿಸಿ ಸಮುದಾಯದ ನಾಯಕ ಪ್ರೊ. ಎಂ. ನಾಗರಾಜ ಅವರಿಗೆ ಅವಕಾಶ ಕಲ್ಪಿಸಿದೆ. ಸಂಘಟನೆಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿರುವ ಲಿಂಗರಾಜ್ ಪಾಟೀಲ್ ಮತ್ತು ರಘು ಕೌಟಿಲ್ಯ ಅವರನ್ನು ವಿಧಾನ ಪರಿಷತ್ ಚುನಾವಣಾ ಕಣಕ್ಕಿಳಿಸುವ ಮೂಲಕ ಪಕ್ಷವು ಸಂಘಟನಾ ನಿಷ್ಠೆಗೆ ಮನ್ನಣೆ ನೀಡಿದೆ.

ಇದೇ ವೇಳೆ, ಎನ್‌ಡಿಎ ಮೈತ್ರಿಕೂಟದ ಅಂಗಪಕ್ಷವಾದ ಜೆಡಿಎಸ್ ಗೆ ಬಿಜೆಪಿ ನಿರ್ಧಾರ ಭಾರಿ ಆಘಾತ ನೀಡಿದೆ. ಪ್ರಸ್ತುತ ರಾಜ್ಯಸಭಾ ಸದಸ್ಯರಾಗಿರುವ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಅವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅವರನ್ನು ಮತ್ತೊಮ್ಮೆ ಜಂಟಿ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ನಿರೀಕ್ಷೆ ಜೆಡಿಎಸ್ ವಲಯದಲ್ಲಿ ವ್ಯಕ್ತವಾಗಿತ್ತು. ಆದರೆ ಬಿಜೆಪಿ ಹೈಕಮಾಂಡ್ ವಯಸ್ಸು ಹಾಗೂ ಆರೋಗ್ಯದ ಅಂಶಗಳನ್ನು ಪರಿಗಣಿಸಿ ಅವರಿಗೆ ಟಿಕೆಟ್ ನೀಡದಿರುವುದಾಗಿ ತಿಳಿದುಬಂದಿದೆ.

ಈ ಕುರಿತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಈ ಹಿಂದೆ ಹಲವು ಬಾರಿ, ‘ರಾಜ್ಯಸಭಾ ಟಿಕೆಟ್ ವಿಚಾರದಲ್ಲಿ ಬಿಜೆಪಿ ನಾಯಕರ ಮೇಲೆ ಯಾವುದೇ ಒತ್ತಡ ಹೇರುವುದಿಲ್ಲ’ ಎಂದು ಹೇಳಿದ್ದರು. ಆದರೂ, ಮೈತ್ರಿಕೂಟದ ಬೆಂಬಲದೊಂದಿಗೆ ದೇವೇಗೌಡರ ಮರು ಆಯ್ಕೆ ಸಾಧ್ಯವಾಗಬಹುದು ಎಂಬ ಲೆಕ್ಕಾಚಾರ ಜೆಡಿಎಸ್‌ನಲ್ಲಿ ಇತ್ತು. ಬಿಜೆಪಿ ಹೊಸ ಮುಖಕ್ಕೆ ಅವಕಾಶ ನೀಡಿರುವುದರಿಂದ ಆ ನಿರೀಕ್ಷೆ ಹುಸಿಯಾಗಿದೆ.

ಇನ್ನೊಂದೆಡೆ, ರಾಜ್ಯಸಭೆ ಚುನಾವಣೆಗೆ ಬಿಜೆಪಿ ಈಗಾಗಲೇ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿತ್ತು. ವಿವಿಧ ರಾಜ್ಯಗಳ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ದೇಶದ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಜೂನ್ 18ರಂದು ಮತದಾನ ನಡೆಯಲಿದೆ.

ಕರ್ನಾಟಕದಲ್ಲಿ ಬಿಜೆಪಿ ಅಭ್ಯರ್ಥಿಗಳ ಘೋಷಣೆಯೊಂದಿಗೆ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣಾ ರಾಜಕೀಯ ಮತ್ತಷ್ಟು ಚುರುಕುಗೊಂಡಿದ್ದು, ದೇವೇಗೌಡರಿಗೆ ಟಿಕೆಟ್ ಕೈತಪ್ಪಿರುವುದು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

Leave a Reply

Your email address will not be published. Required fields are marked *

error: Content is protected !!