
ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಬಯಲು ಸೀಮೆ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಕೃಷ್ಣಾ ನಾಯ್ಕ್, ಉತ್ತರ ಪಶ್ಚಿಮ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಸಿದ್ದೇಶ್ವರ ಹೆಬ್ಬಾಳ್ ಹಾಗೂ ಕೆಆರ್ಐಡಿಎಲ್ ಅಧೀಕ್ಷಕ ಇಂಜಿನಿಯರ್ ಸಣ್ಣ ಕೆಂಚಪ್ಪ ಅವರಿಗೆ ಸೇರಿದ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆದಿದೆ.
ಕೃಷ್ಣಾ ನಾಯ್ಕ್ ಅವರಿಗೆ ಸೇರಿದ ದಾವಣಗೆರೆಯ ಸಿದ್ದವೀರಪ್ಪ ಬಡಾವಣೆಯ ಎರಡು ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಸಿದ್ದೇಶ್ವರ ಹೆಬ್ಬಾಳ್ ಅವರಿಗೆ ಸಂಬಂಧಿಸಿದ ದಾವಣಗೆರೆಯ ಸರಸ್ವತಿ ನಗರ ಹಾಗೂ ಆಂಜನೇಯ ಬಡಾವಣೆಯ ನಿವಾಸಗಳಲ್ಲಿ ದಾಖಲೆಗಳ ಪರಿಶೀಲನೆ ಮುಂದುವರಿದಿದೆ. ಸಣ್ಣ ಕೆಂಚಪ್ಪ ಅವರಿಗೆ ಸೇರಿದ ದಾವಣಗೆರೆಯ ಶಿವಕುಮಾರ್ ಬಡಾವಣೆಯ ಮನೆ ಹಾಗೂ ಹರಪನಹಳ್ಳಿಯ ಮತ್ತೊಂದು ನಿವಾಸದ ಮೇಲೂ ದಾಳಿ ನಡೆದಿದೆ.

ದಾವಣಗೆರೆ, ಬೆಳಗಾವಿ, ಹುಬ್ಬಳ್ಳಿ ಹಾಗೂ ವಿಜಯನಗರ ಸೇರಿದಂತೆ ವಿವಿಧ ಕಡೆಗಳಲ್ಲಿ ಒಟ್ಟು 12 ತಂಡಗಳು ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿವೆ. ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪುರ ನೇತೃತ್ವದಲ್ಲಿ ಪರಿಶೀಲನೆ ನಡೆಯುತ್ತಿದೆ.
ಇದೇ ವೇಳೆ ಸಿದ್ದೇಶ್ವರ ಹೆಬ್ಬಾಳ್ ಅವರ ನಿವಾಸದಲ್ಲಿ ಲಕ್ಷಾಂತರ ರೂಪಾಯಿ ನಗದು, ಚಿನ್ನ ಹಾಗೂ ಬೆಳ್ಳಿ ಆಭರಣಗಳು ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ದಾಖಲೆಗಳು, ಆಸ್ತಿ ವಿವರಗಳು ಹಾಗೂ ಬ್ಯಾಂಕ್ ವ್ಯವಹಾರಗಳ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ದಾಳಿಯ ಬಳಿಕ ಹೆಚ್ಚಿನ ಮಾಹಿತಿಗಾಗಿ ಲೋಕಾಯುಕ್ತ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.