
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಸಮೀಪ ಶುಕ್ರವಾರ ಸಂಜೆ ಸುಮಾರು 6:15ಕ್ಕೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದು, ಐದು ವರ್ಷದ ಬಾಲಕಿಗೆ ಗಂಭೀರ ಗಾಯಗಳಾಗಿವೆ.
ದೇವನಹಳ್ಳಿ ತಾಲ್ಲೂಕಿನ ತೆಲ್ಲಹಳ್ಳಿ ಗ್ರಾಮದ ಅರುಣ್ (35), ಅವರ ಪತ್ನಿ ಅನುಷಾ (32) ಹಾಗೂ ಎರಡು ವರ್ಷದ ಮಗಳು ಹರ್ನಾ ಸ್ಥಳದಲ್ಲೇ ಮೃತಪಟ್ಟ ದುರ್ದೈವಿಗಳು. ಕುಟುಂಬದ ಮತ್ತೊಬ್ಬ ಮಗಳು ಅನುಷಿಕಾ (5) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸೂಲಿಬೆಲೆಯಿಂದ ದೇವನಹಳ್ಳಿ ಕಡೆಗೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಕುಟುಂಬದ ವಾಹನಕ್ಕೆ, ಹೊಸಕೋಟೆ ಮಾರ್ಗವಾಗಿ ಸಂಚರಿಸುತ್ತಿದ್ದ ಬಿಎಂಟಿಸಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬಸ್ ರಾಂಗ್ ರೂಟ್‌ನಲ್ಲಿ ಬಂದು ಅಪಘಾತಕ್ಕೆ ಕಾರಣವಾಗಿದೆ ಎಂಬ ಆರೋಪವೂ ಕೇಳಿಬಂದಿದೆ.
ಡಿಕ್ಕಿಯ ತೀವ್ರತೆಗೆ ದ್ವಿಚಕ್ರ ವಾಹನ ಸಂಪೂರ್ಣ ಜಖಂಗೊಂಡಿದ್ದು, ಅರುಣ್, ಅನುಷಾ ಹಾಗೂ ಮಗು ಹರ್ನಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ಬಳಿಕ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು.
ಅಪಘಾತದ ಮಾಹಿತಿ ತಿಳಿದು ಹೊಸಕೋಟೆ ಡಿವೈಎಸ್ಪಿ ಮಲ್ಲೇಶ್ ಹಾಗೂ ಸೂಲಿಬೆಲೆ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದಿಂದಾಗಿ ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡು ಭಾರೀ ಟ್ರಾಫಿಕ್ ಜಾಮ್ ಉಂಟಾಯಿತು.
ಈ ಸಂಬಂಧ ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣದ ಕುರಿತು ತನಿಖೆ ಮುಂದುವರಿದಿದೆ.