
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬೆಲವಂಗಲ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್ ಆಯ್ಕೆಯಾಗಿದ್ದಾರೆ.
ರಾಜ್ಯದ ವಿವಿಧ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಒಟ್ಟು 200 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಈ ಪ್ರಶಂಸನಾ ಪದಕವನ್ನು ಘೋಷಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಪೊಲೀಸ್ ಮಹಾ ನಿರೀಕ್ಷಕರಾದ ಡಾ. ಎಂ.ಎ. ಸಲೀಂ ಸೋಮವಾರ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಲವಂಗಲ ಪೊಲೀಸ್ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಕಲ್ಲಪ್ಪ ಎಸ್. ಖರತ್ ಅವರು ತಮ್ಮ ಸೇವಾ ಅವಧಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ, ಅಪರಾಧ ಪ್ರಕರಣಗಳ ಪತ್ತೆಯಲ್ಲಿ ಹಾಗೂ ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಬೆಳೆಸುವಲ್ಲಿ ತೋರಿದ ಕಾರ್ಯಕ್ಷಮತೆಯನ್ನು ಪರಿಗಣಿಸಿ ಈ ಗೌರವಕ್ಕೆ ಪಾತ್ರರಾಗಿದ್ದಾರೆ.
ಡಿಜಿ-ಐಜಿಪಿ ಪ್ರಶಂಸನಾ ಪದಕಕ್ಕೆ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಕಲ್ಲಪ್ಪ ಎಸ್. ಖರತ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ಗೌರವದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ಇಲಾಖೆಗೆ ಮತ್ತಷ್ಟು ಹೆಮ್ಮೆ ತಂದಂತಾಗಿದೆ.
ಇನ್ಸ್ ಪೆಕ್ಟರ್ ಕಲ್ಲಪ್ಪ ಎಸ್. ಖರತ್ ಮಾತನಾಡಿ, ಡಿಜಿ-ಐಜಿಪಿ ಪ್ರಶಂಸನಾ ಪದಕಕ್ಕೆ ಆಯ್ಕೆಯಾಗಿರುವುದಕ್ಕೆ ಸಂತಸ ತಂದಿದೆ. ಜವಾಬ್ದಾರಿ ಇನ್ನಷ್ಟು ಹೆಚ್ಚಾಗಿದೆ. ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಅವಿರತವಾಗಿ ಶ್ರಮಿಸಲಾಗುವುದು ಎಂದು ಹೇಳಿದರು.