
ದೇವನಹಳ್ಳಿ: ಗುರು ರಾಯರ ದರ್ಶನ ಮುಗಿಸಿಕೊಂಡು ಬೆಂಗಳೂರಿನತ್ತ ಮರಳುತ್ತಿದ್ದ ಪ್ರಯಾಣಿಕರಿದ್ದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದು, ಬಳಿಕ ಮತ್ತೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಭೀಕರ ಸರಣಿ ಅಪಘಾತ ಸಂಭವಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಸಾವಕನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಈ ಘಟನೆ ನಡೆದಿದೆ.

ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಅವರ ಕಾಲು ಕಟ್ ಆಗಿದೆ ಎಂದು ತಿಳಿದುಬಂದಿದೆ. ಗಾಯಾಳುವನ್ನು ಸ್ಥಳೀಯರು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ಬೆಂಗಳೂರಿನತ್ತ ಸಾಗುತ್ತಿದ್ದ ಕಾರು ಮೊದಲಿಗೆ ಮುಂದೆ ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ನಿಯಂತ್ರಣ ತಪ್ಪಿ ನಂತರ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಘಟನೆಯ ಭೀಕರ ದೃಶ್ಯಗಳು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅಪಘಾತದ ತೀವ್ರತೆಯನ್ನು ಬಿಂಬಿಸುತ್ತಿವೆ.

ವಿಷಯ ತಿಳಿಯುತ್ತಿದ್ದಂತೆ ವಿಶ್ವನಾಥಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಅಪಘಾತಕ್ಕೆ ನಿಖರ ಕಾರಣವೇನು ಎಂಬ ಕುರಿತು ತನಿಖೆ ಕೈಗೊಂಡಿದ್ದಾರೆ.