
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಜಿಲ್ಲಾಡಳಿತ ಭವನದಲ್ಲಿನ ವಿವಿಧ ಇಲಾಖೆಗಳ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಅಧಿಕಾರಿಗಳ ಹಾಜರಾತಿ ಹಾಗೂ ಸಮಯಪಾಲನೆ ಕುರಿತು ರಿಯಾಲಿಟಿ ಚೆಕ್ ನಡೆಸಿದರು.
ಜಿಲ್ಲಾಡಳಿತ ಭವನದಲ್ಲಿರುವ ಕಂದಾಯ ಇಲಾಖೆ, ಭೂ ದಾಖಲೆಗಳ ಇಲಾಖೆ, ಆರೋಗ್ಯ ಇಲಾಖೆ, ಕೃಷಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸೇರಿದಂತೆ ಹಲವು ಇಲಾಖೆಗಳ ಕಚೇರಿಗಳಿಗೆ ಭೇಟಿ ನೀಡಿ ಅಧಿಕಾರಿಗಳು ಮತ್ತು ಸಿಬ್ಬಂದಿಯ ಹಾಜರಾತಿಯನ್ನು ಪರಿಶೀಲಿಸಿದರು.
ಇತ್ತೀಚೆಗೆ ರಾಜ್ಯ ಸರ್ಕಾರ ಎಲ್ಲಾ ಸರ್ಕಾರಿ ನೌಕರರಿಗೆ ‘ಕರ್ತವ್ಯ’ ಆಪ್ ಮೂಲಕ ಡಿಜಿಟಲ್ ಹಾಜರಾತಿಯನ್ನು ಕಡ್ಡಾಯಗೊಳಿಸಿದೆ. ಇದರಂತೆ ಬೆಳಗ್ಗೆ 10 ಗಂಟೆಯೊಳಗೆ ಲಾಗಿನ್ ಹಾಗೂ ಸಂಜೆ 5.30ಕ್ಕೆ ಲಾಗ್‌ಔಟ್ ಮಾಡಬೇಕು ಎಂದು ಸೂಚಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಬೆಳಗ್ಗೆ 10.30ರಿಂದ 11 ಗಂಟೆಯ ನಡುವೆ ವಿವಿಧ ಇಲಾಖೆಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಿದ್ದಾರೆಯೇ, ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡಿದ್ದಾರೆಯೇ, ತಡವಾಗಿ ಬಂದಿದ್ದರೆ ಕಾರಣವೇನು, ಕ್ಷೇತ್ರ ಕಾರ್ಯಕ್ಕೆ ತೆರಳಿದ್ದರೆ ಅದರ ವಿವರವನ್ನು ‘ಕರ್ತವ್ಯ’ ಆಪ್‌ನಲ್ಲಿ ದಾಖಲಿಸಿದ್ದಾರೆಯೇ ಎಂಬುದರ ಕುರಿತು ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಪ್ರಶ್ನಿಸಿದರು.
ಪರಿಶೀಲನೆ ವೇಳೆ ಕೆಲವು ಕಚೇರಿಗಳಲ್ಲಿ ಅಧಿಕಾರಿಗಳ ಕುರ್ಚಿಗಳು ಖಾಲಿ ಇರುವುದನ್ನು ಗಮನಿಸಿದ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡು ಸೂಕ್ತ ಕಾರಣ ನೀಡುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಜೊತೆಗೆ, ಎಲ್ಲರೂ ನಿಗದಿತ ಸಮಯಕ್ಕೆ ‘ಕರ್ತವ್ಯ’ ಆಪ್‌ನಲ್ಲಿ ಕಡ್ಡಾಯವಾಗಿ ಹಾಜರಾತಿ ದಾಖಲಿಸಬೇಕು. ನಿಯಮ ಉಲ್ಲಂಘಿಸಿದರೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಿಬ್ಬಂದಿಯಲ್ಲಿ ಆತಂಕ:
ಸೋಮವಾರದಂತೆ ಸಿಬ್ಬಂದಿ ಹಂತ ಹಂತವಾಗಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ ಜಿಲ್ಲಾಧಿಕಾರಿ ಅನಿರೀಕ್ಷಿತವಾಗಿ ವಿವಿಧ ಇಲಾಖೆಗಳಿಗೆ ಭೇಟಿ ನೀಡಿರುವುದು ಸಿಬ್ಬಂದಿಯಲ್ಲಿ ಆತಂಕ ಮೂಡಿಸಿತು. ತಮ್ಮ ಕಚೇರಿಯಲ್ಲೇ ಜಿಲ್ಲಾಧಿಕಾರಿಯನ್ನು ಕಂಡ ಕೆಲ ಸಿಬ್ಬಂದಿ ಅಚ್ಚರಿ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಗಳ ಇಂತಹ ಅನಿರೀಕ್ಷಿತ ಪರಿಶೀಲನೆಗಳು ಅಧಿಕಾರಿಗಳ ಸಮಯಪಾಲನೆ ಹಾಗೂ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದರ ಜೊತೆಗೆ ಸಾರ್ವಜನಿಕರ ಕೆಲಸಗಳು ಸಮಯಕ್ಕೆ ಸರಿಯಾಗಿ ನಡೆಯಲು ಸಹಕಾರಿಯಾಗಲಿವೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.