ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ ಯತ್ನಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್‌ಪೇಟೆಯಲ್ಲಿ ಗುರುವಾರ ನಡೆದಿದೆ.

ದಾಬಸ್‌ಪೇಟೆಯ ಪ್ರೇಮ್ ಶಿವ ಜ್ಯುವೆಲರ್ಸ್ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು, ದಾಳಿಯಲ್ಲಿ ಅಂಗಡಿ ಮಾಲೀಕ ಕುನ್ನರಾಮ್ ಅವರ ಕಾಲಿಗೆ ಗುಂಡು ತಗುಲಿ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಧ್ಯಾಹ್ನ ಊಟ ಮಾಡುತ್ತಿದ್ದ ವೇಳೆ ಬುಲೆರೋ ವಾಹನದಲ್ಲಿ ಬಂದ ಐದರಿಂದ ಆರು ಮಂದಿಯಲ್ಲಿ ಇಬ್ಬರು ದುಷ್ಕರ್ಮಿಗಳು ಗ್ರಾಹಕರಂತೆ ಅಂಗಡಿಗೆ ಪ್ರವೇಶಿಸಿದ್ದಾರೆ. ಬಳಿಕ ಏಕಾಏಕಿ ಗನ್ ಹೊರತೆಗೆದು ಮಾಲೀಕನ ಮೇಲೆ ಎರಡು ಸುತ್ತು ಗುಂಡು ಹಾರಿಸಿ ಚಿನ್ನಾಭರಣ ದೋಚಲು ಯತ್ನಿಸಿದ್ದಾರೆ.

ಈ ವೇಳೆ ಅಂಗಡಿ ಮಾಲೀಕ ಪ್ರತಿರೋಧ ವ್ಯಕ್ತಪಡಿಸಿದ್ದರಿಂದ ದುಷ್ಕರ್ಮಿಗಳ ಯೋಜನೆ ವಿಫಲವಾಗಿದೆ. ಗುಂಡಿನ ದಾಳಿಯ ನಡುವೆಯೂ ಅಂಗಡಿಯ ಸಿಬ್ಬಂದಿ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ದರೋಡೆ ಯತ್ನ ವಿಫಲವಾಗುತ್ತಿದ್ದಂತೆ ಆರೋಪಿಗಳು ಸ್ಥಳದಿಂದ ಪರಾರಿಯಾಗಿ ದೊಡ್ಡಬಳ್ಳಾಪುರ ಮಾರ್ಗವಾಗಿ ಎಸ್ಕೇಪ್ ಆಗಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಎಎಸ್ಪಿ-1 ವೆಂಕಟೇಶ್ ಪ್ರಸನ್ನ, ಎಎಸ್ಪಿ-2 ಲಕ್ಷ್ಮಿನಾರಾಯಣ ಹಾಗೂ ದಾಬಸ್‌ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆರೋಪಿಗಳ ಬಂಧನಕ್ಕಾಗಿ ವಿಶೇಷ ತಂಡಗಳನ್ನು ರಚಿಸಿ ಶೋಧ ಕಾರ್ಯ ಆರಂಭಿಸಲಾಗಿದೆ.

ದರೋಡೆಕೋರರು ಯಾವುದೇ ಚಿನ್ನಾಭರಣ ದೋಚದೇ ಪರಾರಿಯಾದರೂ, ಜನನಿಬಿಡ ಪ್ರದೇಶದಲ್ಲೇ ಗುಂಡಿನ ದಾಳಿ ನಡೆಸಿರುವ ಘಟನೆ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರು ಹೊರವಲಯದಲ್ಲಿ ಇಂತಹ ದರೋಡೆ ಯತ್ನಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಪಿಗಳನ್ನು ಶೀಘ್ರ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಸಾರ್ವಜನಿಕರಿಂದ ಕೇಳಿಬಂದಿದೆ.

Leave a Reply

Your email address will not be published. Required fields are marked *

error: Content is protected !!