
ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು ಹಾಗೂ ವಿದ್ಯುತ್ ಖಾಸಗೀಕರಣ ಕೈಬಿಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎಸ್ಕೆಎಂ ಮತ್ತು ಜೆಸಿಟಿಯು ಸಂಯುಕ್ತ ಆಶ್ರಯದಲ್ಲಿ ಸೋಮವಾರ ಜೈಲ್ಭರೋ ಚಳವಳಿ ನಡೆಸಲಾಯಿತು. ಬಳಿಕ ಪ್ರತಿಭಟನಾಕಾರರು ಉಪವಿಭಾಗಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ತಾಲ್ಲೂಕು ಕಚೇರಿ ಸಮೀಪದ ಜಗಜ್ಯೋತಿ ಬಸವೇಶ್ವರ ವೃತ್ತದಿಂದ ವಿವಿಧ ರೈತ ಹಾಗೂ ಕಾರ್ಮಿಕ ಸಂಘಟನೆಗಳ ಕಾರ್ಯಕರ್ತರು ಮೆರವಣಿಗೆಯಲ್ಲಿ ಆಗಮಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ತಾಲ್ಲೂಕು ಕಚೇರಿಯೊಳಗೆ ಪ್ರವೇಶಿಸಲು ಪ್ರತಿಭಟನಾಕಾರರು ಯತ್ನಿಸಿದಾಗ ಪೊಲೀಸರು ಗೇಟ್ಗಳನ್ನು ಬಂದ್ ಮಾಡಿ ತಡೆಯೊಡ್ಡಿದರು. ಆದರೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದ ಪ್ರತಿಭಟನಾಕಾರರು ಪೊಲೀಸರ ತಡೆಯನ್ನು ಲೆಕ್ಕಿಸದೆ ಕಚೇರಿ ಆವರಣದೊಳಗೆ ನುಗ್ಗಿ ಧರಣಿ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಕಚೇರಿಯಿಂದ ಹೊರಗೆ ಕಳುಹಿಸಿದರು. ಈ ವೇಳೆ ಕಾರ್ಮಿಕ ಸಂಘಟನೆಗಳ ಮುಖಂಡರಾದ ಪಿ.ಎ. ವೆಂಕಟೇಶ್ ಹಾಗೂ ರೇಣುಕಾರಾಧ್ಯ ಅವರನ್ನು ಪೊಲೀಸರು ವಶಕ್ಕೆ ಪಡೆದು ಜೀಪ್ನಲ್ಲಿ ಕರೆದೊಯ್ಯಲು ಮುಂದಾದರು. ಇದನ್ನು ವಿರೋಧಿಸಿದ ಪ್ರತಿಭಟನಾಕಾರರು ಪೊಲೀಸ್ ಜೀಪ್ಗೆ ಅಡ್ಡಗಟ್ಟಿ ಮುಖಂಡರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಭಾರಿ ಮಳೆ ಸುರಿದ ಹಿನ್ನೆಲೆಯಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ಪಕ್ಕಕ್ಕೆ ಸರಿಸಿ, ವಶಕ್ಕೆ ಪಡೆದ ಮುಖಂಡರನ್ನು ಠಾಣೆಗೆ ಕರೆದೊಯ್ದರು. ಬಳಿಕ ಎಸಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ಬಂಧಿತ ಮುಖಂಡರನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಲಾಯಿತು. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಪೊಲೀಸರು ಇಬ್ಬರು ಕಾರ್ಮಿಕ ಮುಖಂಡರನ್ನು ಬಿಡುಗಡೆ ಮಾಡಿದರು.
ಸರ್ಕಾರಗಳ ವಿರುದ್ಧ ಚಂದ್ರತೇಜಸ್ವಿ ಆಕ್ರೋಶ
ಪ್ರತಿಭಟನೆಯಲ್ಲಿ ಮಾತನಾಡಿದ ಸಿಪಿಐಎಂ ಮುಖಂಡ ಆರ್. ಚಂದ್ರತೇಜಸ್ವಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ, ಕಾರ್ಮಿಕ, ದಲಿತ, ಮಹಿಳೆ, ವಿದ್ಯಾರ್ಥಿ ಹಾಗೂ ಯುವಜನ ವಿರೋಧಿ ಕಾನೂನು ಮತ್ತು ನೀತಿಗಳನ್ನು ಜಾರಿಗೆ ತರುವ ಮೂಲಕ ಪ್ರಜಾಪ್ರಭುತ್ವದ ಹಕ್ಕುಗಳನ್ನು ದಮನಿಸುತ್ತಿವೆ ಎಂದು ಆರೋಪಿಸಿದರು.
ಐತಿಹಾಸಿಕ ಕ್ವಿಟ್ ಇಂಡಿಯಾ ಚಳವಳಿಯ ನೆನಪು ಮತ್ತು ಸ್ಫೂರ್ತಿಯಲ್ಲಿ ದೇಶದಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ‘ಕಾರ್ಪೊರೇಟ್ ಕಂಪನಿಗಳೇ ದೇಶ ಬಿಟ್ಟು ತೊಲಗಿ’ ಎಂಬ ಘೋಷಣೆಯೊಂದಿಗೆ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.
ಹಿಂದೆ ರಾಜರು ರೈತರ ಭೂಮಿಯನ್ನು ಕಸಿದು ಬ್ರಾಹ್ಮಣರು ಹಾಗೂ ರಾಜ ಪರಿವಾರಗಳಿಗೆ ನೀಡುತ್ತಿದ್ದ ರೀತಿಯಲ್ಲೇ ಇಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಭೂಮಿಯನ್ನು ಅಂಬಾನಿ, ಅದಾನಿ ಸೇರಿದಂತೆ ದೇಶಿ ಹಾಗೂ ವಿದೇಶಿ ಕಾರ್ಪೊರೇಟ್ ಕಂಪನಿಗಳ ಪಾಲಾಗಿಸುತ್ತಿವೆ ಎಂದು ದೂರಿದರು.
ಪ್ರಮುಖ ಬೇಡಿಕೆಗಳು
ಪ್ರತಿಭಟನಾಕಾರರು ಸುಪ್ರೀಂಕೋರ್ಟ್ ಆದೇಶದಂತೆ ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ತರಬೇಕು, ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು, ಬಲವಂತದ ಹಾಗೂ ಅನ್ಯಾಯದ ಭೂಸ್ವಾಧೀನ ಮತ್ತು ಕಾರ್ಪೊರೇಟ್ ಭೂ ಕಬಳಿಕೆ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ವಿಬಿ-ರಾಮ್ಜಿ ಕಾಯ್ದೆ ರದ್ದುಪಡಿಸಬೇಕು, ವಿದ್ಯುತ್ ತಿದ್ದುಪಡಿ ಕಾಯ್ದೆ–2025 ರದ್ದುಪಡಿಸಬೇಕು, ಬೀಜ ಕಾಯ್ದೆ ಹಾಗೂ ಕೃಷಿ ಮಾರುಕಟ್ಟೆ ಕುರಿತ ರಾಷ್ಟ್ರೀಯ ಧೋರಣಾ ಚೌಕಟ್ಟು ನೀತಿ ರದ್ದುಪಡಿಸಬೇಕು ಎಂದು ಆಗ್ರಹಿಸಿದರು.
ಇದರ ಜೊತೆಗೆ ಬ್ಯಾಂಕ್, ವಿಮೆ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳ ಖಾಸಗೀಕರಣವನ್ನು ಕೂಡಲೇ ನಿಲ್ಲಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಿಪಿಐಎಂ ರಾಜ್ಯ ಕಾರ್ಯದರ್ಶಿ ಪ್ರಭ ಬೆಳವಂಗಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಿಂಹಮೂರ್ತಿ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ರುದ್ರಾರಾಧ್ಯ, ದೊಡ್ಡಬೆಳವಂಗಲ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ಶಶಿಧರ್, ದೇವನಹಳ್ಳಿ ರೈತ ಮುಖಂಡರಾದ ಕಾರಹಳ್ಳಿ ಶ್ರೀನಿವಾಸ್, ಮಾರೇಗೌಡ, ಹೊಸಕೋಟೆ ವೆಂಕಟರಾಜು, ದಲಿತ ಮುಖಂಡ ಗೂಳ್ಯ ಹನುಮಣ್ಣ ಸೇರಿದಂತೆ ನೂರಾರು ರೈತರು, ಕಾರ್ಮಿಕರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.