ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.
ತಾಲ್ಲೂಕಿನ ಕಂದಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾದರಹಳ್ಳಿ ಗ್ರಾಮದಲ್ಲಿ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕ ಮಿಷನ್ ಯೋಜನೆಯಡಿ ಕೈಗೊಂಡಿರುವ ಸಮಗ್ರ ಕೆರೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಅವರು, ಕಾಮಗಾರಿಯ ಪ್ರಗತಿ ಹಾಗೂ ಕೂಲಿಕಾರರ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿದರು.
ಗ್ರಾಮೀಣ ಕೂಲಿಕಾರರ ಸಂಘದ ಕಾರ್ಮಿಕರು ಕಾಮಗಾರಿ ನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ, ಕೆಲಸದ ಸ್ಥಳದಲ್ಲಿ ಕಾರ್ಮಿಕರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮೀಣ ಕೂಲಿಕಾರರ ಸಂಘಗಳನ್ನು ಪ್ರೋತ್ಸಾಹಿಸಬೇಕು. ಅಲ್ಲದೆ, ಕೂಲಿಕಾರರಿಗೆ ಯೋಜನೆಯ ಕುರಿತು ಅಗತ್ಯ ಮಾಹಿತಿ ನೀಡಿ, ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸಬೇಕು ಎಂದು ತಿಳಿಸಿದರು. ಇದೇ ವೇಳೆ ಯೋಜನೆಗೆ ಸಂಬಂಧಿಸಿದ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು.
ನಂತರ ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿರುವ ಶಿಥಿಲಾವಸ್ಥೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಕಟ್ಟಡವನ್ನು ಪರಿಶೀಲಿಸಿದ ಸಿಇಒ, ವಿದ್ಯಾರ್ಥಿಗಳಿಗೆ ಸುರಕ್ಷಿತ ಹಾಗೂ ಉತ್ತಮ ಕಲಿಕಾ ವಾತಾವರಣ ನಿರ್ಮಿಸುವಂತೆ ಸೂಚಿಸಿದರು. ಶಾಲೆಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಕಲ್ಪಿಸುವುದರ ಜತೆಗೆ, ಅಗತ್ಯವಿರುವ ಕಡೆ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಗರದಲ್ಲಿರುವ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆ, ಸರ್ಕಾರಿ ಪ್ರೌಢಶಾಲೆ ಹಾಗೂ ಪದವಿ ಕಾಲೇಜಿಗೂ ಭೇಟಿ ನೀಡಿ ಅಲ್ಲಿನ ಶೈಕ್ಷಣಿಕ ಹಾಗೂ ಮೂಲಸೌಕರ್ಯ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬಳಿಕ ಬೋರನಕಣಿವೆ ಹಿನ್ನೀರಿನಲ್ಲಿ ಪ್ರಗತಿಯಲ್ಲಿರುವ ‘ಬಹು ಗ್ರಾಮಗಳ ನೀರಿನ ಶುದ್ಧೀಕರಣ’ ಕಾಮಗಾರಿಯನ್ನು ಪರಿಶೀಲಿಸಿದ ಅವರು, ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿವರಾಜಯ್ಯ, ಸಹಾಯಕ ನಿರ್ದೇಶಕ (ಗ್ರಾ.ಉ.) ಇಂದ್ರೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಕೂಲಿಕಾರರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
