ಎಕ್ಸ್‌ಪ್ರೆಸ್ ರೈಲು ಹರಿದು ಇಬ್ಬರು ಮಹಿಳೆಯರು, ಮಗು ಬಲಿ

ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್‌ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರದ ಮುತ್ತೂರು ಬಳಿ ಸೋಮವಾರ ಮುಂಜಾನೆ ನಡೆದಿದೆ.

ಮುತ್ತೂರು ಕಡೆಯಿಂದ ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣದತ್ತ ಮೂವರು ನಡೆದುಕೊಂಡು ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಎರಡು ರೈಲ್ವೆ ಹಳಿಗಳಿರುವ ಮಾರ್ಗದ ತಿರುವಿನಲ್ಲಿ ರೈಲು ಬರುತ್ತಿರುವುದು ಗಮನಕ್ಕೆ ಬಾರದ ಹಿನ್ನೆಲೆಯಲ್ಲಿ ವೇಗವಾಗಿ ಬಂದ ಎಕ್ಸ್‌ಪ್ರೆಸ್ ರೈಲು ಮೂವರ ಮೇಲೂ ಹರಿದಿದೆ ಎಂದು ತಿಳಿದುಬಂದಿದೆ.

ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತರ ಗುರುತು ಪತ್ತೆ ಕಾರ್ಯ ಕೈಗೊಂಡಿದ್ದಾರೆ.

ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಮೃತದೇಹಗಳ ಮೇಲಿದ್ದ ಉಡುಪುಗಳ ಆಧಾರದ ಮೇಲೆ ಅವರು ಮುಸ್ಲಿಂ ಸಮುದಾಯಕ್ಕೆ ಸೇರಿದವರಿರಬಹುದು ಎಂದು ತಿಳಿದುಬಂದಿದ್ದು, ಈ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!