
ದೊಡ್ಡಬಳ್ಳಾಪುರ: ನಗರದ ಕನಕದಾಸ ರಸ್ತೆ, ದೇವರಾಜನಗರದಲ್ಲಿರುವ ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಪುಟಾಣಿ ಮಕ್ಕಳು ನಿತ್ಯವೂ ಸಮಸ್ಯೆ ಎದುರಿಸುವಂತಾಗಿದೆ.
ಅಂಗನವಾಡಿ ಕೇಂದ್ರದ ಬಾಗಿಲು ಮುಂದೆಯೇ ಚರಂಡಿ ನೀರು ನಿಂತು ರಸ್ತೆ ಮೇಲೆ ಹರಿಯುತ್ತಿರುವುದರಿಂದ, ಕೇಂದ್ರಕ್ಕೆ ಬರುವ ಮಕ್ಕಳು ಅದೇ ಕೊಳಚೆ ನೀರನ್ನು ತುಳಿದುಕೊಂಡೇ ಒಳಗೆ ತೆರಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಮಕ್ಕಳ ಆರೋಗ್ಯದ ಬಗ್ಗೆ ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.

ಚರಂಡಿ ನೀರು ನಿಂತಿರುವ ಪರಿಣಾಮ ಸುತ್ತಮುತ್ತ ದುರ್ವಾಸನೆ ಹರಡಿದ್ದು, ಅಂಗನವಾಡಿ ಕೇಂದ್ರದ ಮಕ್ಕಳು ಹಾಗೂ ಸಿಬ್ಬಂದಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕೊಳಚೆ ನೀರಿನಿಂದ ಸೊಳ್ಳೆ ಹಾಗೂ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ.
ಈ ಸಮಸ್ಯೆ ಕುರಿತು ನಗರಸಭೆಗೆ ಹಲವು ಬಾರಿ ಮನವಿ ಮಾಡಿದ್ದರೂ, ಸ್ವಚ್ಛತಾ ಸಿಬ್ಬಂದಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪ ಸಾರ್ವಜನಿಕರಿಂದ ಕೇಳಿಬಂದಿದೆ. ಸಮಸ್ಯೆ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸದಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಪುಟಾಣಿ ಮಕ್ಕಳು ಓಡಾಡುವ ಸ್ಥಳದಲ್ಲೇ ಚರಂಡಿ ನೀರು ಹರಿಯುತ್ತಿರುವುದರಿಂದ, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಉಂಟಾಗುವ ಮುನ್ನ ನಗರಸಭೆ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಚರಂಡಿ ಸ್ವಚ್ಛಗೊಳಿಸಬೇಕು. ಅಲ್ಲದೆ, ಚರಂಡಿ ನೀರು ರಸ್ತೆಗೆ ಹರಿಯದಂತೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.