ಮೋರಿ ಬಳಿ ತ್ಯಾಜ್ಯ ರಾಶಿ; ದುರ್ವಾಸನೆ, ಸೊಳ್ಳೆ ಕಾಟಕ್ಕೆ ವಿನಾಯಕನಗರ ನಿವಾಸಿಗಳ ಪರದಾಟ

ದೊಡ್ಡಬಳ್ಳಾಪುರ: ನಗರದ ವಿನಾಯಕನಗರದ ಸರ್ಕಾರಿ ಪ್ರಾಥಮಿಕ ಶಾಲೆ ಸಮೀಪದಲ್ಲಿರುವ ರಾಜಕಾಲುವೆಗೆ ಅಡ್ಡಲಾಗಿ ನಿರ್ಮಿಸಿರುವ ಮೋರಿ ಬಳಿ ತ್ಯಾಜ್ಯ ರಾಶಿ ಬಿದ್ದಿದ್ದು, ಸ್ಥಳೀಯ ನಿವಾಸಿಗಳು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಮೋರಿ ಸುತ್ತಮುತ್ತ ಕಸ-ತ್ಯಾಜ್ಯ ಸಂಗ್ರಹಗೊಂಡಿರುವ ಪರಿಣಾಮ ಪರಿಸರದಲ್ಲಿ ದುರ್ವಾಸನೆ ಹರಡುತ್ತಿದೆ. ಇದರಿಂದ ಶಾಲಾ ವಿದ್ಯಾರ್ಥಿಗಳು, ನಿವಾಸಿಗಳು ಹಾಗೂ ಈ ಮಾರ್ಗವಾಗಿ ಸಂಚರಿಸುವ ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕಸದ ರಾಶಿಯಿಂದ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿದ್ದು, ಸೊಳ್ಳೆ ಕಾಟದಿಂದ ಸ್ಥಳೀಯರು ಹೈರಾಣಾಗಿದ್ದಾರೆ. ಸುತ್ತಮುತ್ತಲಿನ ಪ್ರದೇಶದಲ್ಲಿ ಅನೈರ್ಮಲ್ಯ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯೂ ಸಾರ್ವಜನಿಕರಲ್ಲಿ ಮೂಡಿದೆ.

ತ್ಯಾಜ್ಯವನ್ನು ತೆರವುಗೊಳಿಸಿ, ಸ್ಥಳವನ್ನು ಸ್ವಚ್ಛಗೊಳಿಸುವಂತೆ ಸ್ಥಳೀಯ ನಿವಾಸಿಗಳು ಹಲವು ಬಾರಿ ನಗರಸಭೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಆದರೆ ಇದುವರೆಗೆ ಸೂಕ್ತ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಶಾಲೆಯ ಸಮೀಪವೇ ತ್ಯಾಜ್ಯ ರಾಶಿ ಬಿದ್ದಿರುವುದರಿಂದ ಮಕ್ಕಳ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುವ ಆತಂಕವಿದೆ. ಕೂಡಲೇ ನಗರಸಭೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತ್ಯಾಜ್ಯವನ್ನು ತೆರವುಗೊಳಿಸುವುದರ ಜೊತೆಗೆ ರಾಜಕಾಲುವೆ ಹಾಗೂ ಮೋರಿಯನ್ನು ಸ್ವಚ್ಛಗೊಳಿಸಿ, ಮತ್ತೆ ಕಸ ಹಾಕದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಿವಾಸಿಗಳು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!