ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್) ವ್ಯಾಪ್ತಿಯ ರೈತರು ಸೆ.22ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ ಎಂದು ಬಮೂಲ್ ನಿರ್ದೇಶಕ ಬಿ.ಸಿ. ಆನಂದ್ ಕುಮಾರ್ ತಿಳಿಸಿದ್ದಾರೆ.
ನಗರದ ಬಮೂಲ್ ಶಿಬಿರ ಕಚೇರಿಯಲ್ಲಿ ಮಾತನಾಡಿದ ಅವರು, ಹಿಂಡಿ, ಬೂಸ, ಮೇವು, ಸಾಗಾಣಿಕೆ ಸೇರಿದಂತೆ ನಿರ್ವಹಣಾ ವೆಚ್ಚಗಳು ನಿರಂತರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೈನುಗಾರಿಕೆ ನಡೆಸುತ್ತಿರುವ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರ ನಡುವೆ ಮಳೆ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಬರದ ಪರಿಸ್ಥಿತಿ ನಿರ್ಮಾಣವಾಗಿದ್ದು, ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರಿನ ಕೊರತೆಯೂ ಎದುರಾಗಿದೆ ಎಂದರು.
ರೈತರ ಸಂಕಷ್ಟವನ್ನು ಪರಿಗಣಿಸಿ ಸರ್ಕಾರ ಕೂಡಲೇ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ಕನಿಷ್ಠ 10 ಹೆಚ್ಚಿಸುವ ಮೂಲಕ ರೈತಪರ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸೆ.22ರಂದು ಆಯಾ ಗ್ರಾಮಗಳ ಎಂಪಿಸಿಎಸ್ ಸಂಘಗಳ ಮೂಲಕ ರೈತರು ನಗರದ ಬಮೂಲ್ ಶಿಬಿರ ಕಚೇರಿಗೆ ಆಗಮಿಸಿ, ಅಲ್ಲಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುವ ಪ್ರತಿಭಟನೆಗೆ ತೆರಳಬೇಕು. ತಾಲ್ಲೂಕಿನ ಎಲ್ಲಾ ರೈತರು ಪಕ್ಷಾತೀತವಾಗಿ ಹೋರಾಟದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಪ್ರತಿಭಟನೆಯಲ್ಲಿ ಬೆಂಗಳೂರು ಹಾಲು ಒಕ್ಕೂಟದ ವ್ಯಾಪ್ತಿಯ ಸಾವಿರಾರು ರೈತರು ಹಾಗೂ ರೈತ ಮಹಿಳೆಯರು ಭಾಗವಹಿಸಲಿದ್ದಾರೆ ಎಂದು ಬಿ.ಸಿ. ಆನಂದ್ ಕುಮಾರ್ ತಿಳಿಸಿದರು.
