
ದೊಡ್ಡಬಳ್ಳಾಪುರ: ಶಾಸಕ ಧೀರಜ್ ಮುನಿರಾಜ್ ವಿರುದ್ಧ ಮಾಜಿ ಶಾಸಕರು ಹಾಗೂ ಅವರ ಬೆಂಬಲಿಗರು ವೈಯಕ್ತಿಕ ಹಾಗೂ ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದು ಸಮಂಜಸವಲ್ಲ ಎಂದು ಬಿಜೆಪಿ ಜಿಲ್ಲಾ ವಕ್ತಾರೆ ಪುಷ್ಪಾಶಿವಶಂಕರ್ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರಸಭಾ ಸದಸ್ಯ ಶಿವಶಂಕರ್ (ಶಂಕ್ರಿ) ಅವರು ಶಾಸಕರ ವಿರುದ್ಧ ವೈಯಕ್ತಿಕವಾಗಿ ಮಾತನಾಡುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.
ಶಿವಶಂಕರ್ ಅವರು ಈಗಲೂ ಬಿಜೆಪಿ ಕಾರ್ಯಕರ್ತರಾಗಿದ್ದು, ಪಕ್ಷದಲ್ಲಿದ್ದುಕೊಂಡೇ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂಬ ಆರೋಪಗಳಿವೆ. ನಗರಸಭೆ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳನ್ನು ಹೊರತುಪಡಿಸಿ ಸ್ವತಂತ್ರ ಅಭ್ಯರ್ಥಿಗಳಿಗೆ ಸಹಕಾರ ನೀಡಿದ ಬಗ್ಗೆ ಎಲ್ಲರಿಗೂ ತಿಳಿದಿದೆ ಎಂದು ಅವರು ಆರೋಪಿಸಿದರು.
ಶಿವಶಂಕರ್ ಅವರು ತಾವು ಬೆಳೆದು ಬಂದ ರಾಜಕೀಯ ಹಾದಿಯನ್ನು ಅರಿತು ಮಾತನಾಡಬೇಕು. ರಾಜಕೀಯ ನಿಂತ ನೀರಲ್ಲ. ಹಿಂದೆ ನಡೆದ ಬೆಳವಣಿಗೆಗಳನ್ನು ಮರೆತು ಇದೀಗ ಟೀಕೆ ಮಾಡುವುದು ಸರಿಯಲ್ಲ. ಬಿಜೆಪಿ ನಗರ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಅವರು ಏನು ಮಾಡಿದ್ದಾರೆ ಎಂಬುದು ಜನರಿಗೆ ಗೊತ್ತಿದೆ ಎಂದು ಪುಷ್ಪಾಶಿವಶಂಕರ್ ಹೇಳಿದರು.
ಮಾಜಿ ಶಾಸಕ ಹಾಗೂ ಹಾಲಿ ಶಾಸಕರ ನಡುವೆ ರಾಜಕೀಯ ಭಿನ್ನಾಭಿಪ್ರಾಯಗಳು ಇರುವುದು ಸಹಜ. ಆದರೆ ಶಾಸಕ ಧೀರಜ್ ಮುನಿರಾಜ್ ಅವರು ಈವರೆಗೆ ಉದ್ಧಟತನದಿಂದ ನಡೆದುಕೊಂಡಿಲ್ಲ. ವೈಯಕ್ತಿಕ ವಿಚಾರಗಳನ್ನು ಮುಂದಿಟ್ಟುಕೊಂಡು ಟೀಕಿಸುವ ಬದಲು ರಾಜಕೀಯ ಹಾಗೂ ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚಿಸುವುದು ಸೂಕ್ತ ಎಂದರು.
‘ಪಟಾಲಂ ಮಾತು ಕೇಳಬೇಡಿ’
ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಂತಿ ವೆಂಕಟೇಶ್ ಮಾತನಾಡಿ, ಸರ್ಕಾರಿ ಕಾರ್ಯಕ್ರಮಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಶಿಷ್ಟಾಚಾರದಂತೆ ಎಲ್ಲ ಪಕ್ಷಗಳ ಮುಖಂಡರನ್ನು ಆಹ್ವಾನಿಸಲಾಗುತ್ತಿದೆ. ಆದರೆ ಕಾರ್ಯಕ್ರಮಗಳಿಗೆ ಭಾಗವಹಿಸದೆ ರಾಜಕೀಯ ಟೀಕೆ ಮಾಡುವುದು ಸರಿಯಲ್ಲ ಎಂದು ಹೇಳಿದರು.
ನಮ್ಮ ಶಾಸಕರು ಯಾರ ಬಗ್ಗೆಯೂ ವೈಯಕ್ತಿಕವಾಗಿ ಟೀಕೆ ಮಾಡುವುದಿಲ್ಲ. ಮಾಜಿ ಶಾಸಕ ಟಿ. ವೆಂಕಟರಮಣಯ್ಯ ಅವರ ಸುತ್ತಮುತ್ತಲಿನವರು ಅವರನ್ನು ತಪ್ಪುದಾರಿಗೆಳೆಯುತ್ತಿದ್ದಾರೆ. ಯಾರ ಮಾತನ್ನೂ ಕೇಳದೆ ತಮ್ಮ ಪಟಾಲಂ ಅನ್ನು ಸರಿದಾರಿಗೆ ತರಬೇಕು ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪಿಂಚಣಿ ಸೇರಿದಂತೆ ಹಲವು ವಿಚಾರಗಳಲ್ಲಿ ಸಮಸ್ಯೆಗಳಿವೆ. ಈ ಬಗ್ಗೆ ಮಾತನಾಡುವ ಬದಲು ಕ್ಷೇತ್ರದ ಅಭಿವೃದ್ಧಿಗೆ ಶಾಸಕ ಧೀರಜ್ ಮುನಿರಾಜ್ ಅವರು ಸರ್ಕಾರಿ ಅನುದಾನ ತರುವ ಸಂದರ್ಭದಲ್ಲಿ ಯಾರು ಅಡ್ಡಿಪಡಿಸುತ್ತಿದ್ದಾರೆ ಎಂಬುದನ್ನು ಜನರು ಗಮನಿಸುತ್ತಿದ್ದಾರೆ ಎಂದು ಆರೋಪಿಸಿದರು.
ಸದನದಲ್ಲಿ ದೊಡ್ಡಬಳ್ಳಾಪುರ ಕ್ಷೇತ್ರದ ಪರವಾಗಿ ಶಾಸಕ ಧೀರಜ್ ಮುನಿರಾಜ್ ನಿರಂತರವಾಗಿ ಧ್ವನಿ ಎತ್ತುತ್ತಿದ್ದಾರೆ. ಇದನ್ನು ಕೆಲವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಶಾಸಕರ ವಿರುದ್ಧ ವೈಯಕ್ತಿಕ ಟೀಕೆಗಳನ್ನು ಮಾಡಲಾಗುತ್ತಿದೆ. ಶಾಸಕರ ತೇಜೋವಧೆ ಮಾಡುವ ಪ್ರಯತ್ನಗಳನ್ನು ನಿಲ್ಲಿಸಬೇಕು ಎಂದು ಬಂತಿ ವೆಂಕಟೇಶ್ ಹೇಳಿದರು
ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ನಾಗೇಶ್, ನಗರಾಧ್ಯಕ್ಷ ಮುದ್ದಣ್ಣ, ನಗರಸಭಾ ಸದಸ್ಯರಾದ ಎಂ.ಜಿ. ಶ್ರೀನಿವಾಸ್, ಶಿವು, ಪದ್ಮನಾಭ್, ಸುಮಿತ್ರಾ ಆನಂದ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.