
ದೊಡ್ಡಬಳ್ಳಾಪುರ: ಕನ್ನಡ ಸಾಹಿತ್ಯ ಪರಿಷತ್ತನ್ನು ಕನ್ನಡಿಗರ ಸ್ವಾಭಿಮಾನದ ಗೌರವ ಸಂಸ್ಥೆಯಾಗಿ ರೂಪಿಸುವುದರ ಜೊತೆಗೆ, ಪರಿಷತ್ತಿಗೆ ಕಾಯಕಲ್ಪ ನೀಡುವ ಉದ್ದೇಶ ಹೊಂದಲಾಗಿದೆ ಎಂದು ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಿ. ಸೋಮಶೇಖರ್ ಹೇಳಿದರು.
ನಗರದ ಖಾಸಗಿ ಕನ್ವೆನ್ಷನ್ ಹಾಲ್‌ನಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ‘ಕನ್ನಡ, ಕನ್ನಡಿಗ, ಕರ್ನಾಟಕ’ ಪರಿಕಲ್ಪನೆಯಡಿ ವಿವಿಧ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುವ ಚಿಂತನೆ ಇದೆ. ಪರಿಷತ್ತಿನ ಮೂಲ ಧ್ಯೇಯ ಹಾಗೂ ಉದ್ದೇಶಗಳಾದ ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜನಪದದ ರಕ್ಷಣೆ, ಪ್ರಸಾರ ಹಾಗೂ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಲಾಗುವುದು ಎಂದರು.
ಅಖಿಲ ಭಾರತ ಲೋಕಸೇವಾ ಆಯೋಗದ ಪರೀಕ್ಷೆಯನ್ನು ಸಂಪೂರ್ಣವಾಗಿ ಕನ್ನಡ ಮಾಧ್ಯಮದಲ್ಲಿ ಬರೆದು ಕೇಂದ್ರದ ಪ್ರಥಮ ದರ್ಜೆ ಸೇವೆಗೆ ಆಯ್ಕೆಯಾಗಿದ್ದರೂ, ಕನ್ನಡ ನಾಡು-ನುಡಿಯ ಮೇಲಿನ ಅಭಿಮಾನದಿಂದ ಕರ್ನಾಟಕದಲ್ಲಿಯೇ ಸೇವೆ ಸಲ್ಲಿಸುವ ಉದ್ದೇಶದಿಂದ ಕರ್ನಾಟಕ ಆಡಳಿತ ಸೇವೆಯನ್ನು ಆಯ್ಕೆ ಮಾಡಿಕೊಂಡಿದ್ದೇನೆ. ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಗಡಿನಾಡ ಚೇತನ ಪ್ರಶಸ್ತಿಯನ್ನು ಆರಂಭಿಸಿ, ಗಡಿನಾಡಿನ ಸರ್ಕಾರಿ ಶಾಲೆಗಳ ಅಭಿವೃದ್ಧಿಗೂ ಶ್ರಮಿಸಿದ್ದೇನೆ ಎಂದು ತಿಳಿಸಿದರು.
ಕನ್ನಡದ ವಿಚಾರದಲ್ಲಿ ಸರ್ಕಾರದ ವಿರುದ್ಧ ದನಿ ಎತ್ತುವುದಿಲ್ಲ ಎಂಬ ಮನೋಭಾವ ಬದಲಾಗಬೇಕು. ಹಿಂದಿನ ಅವ್ಯವಸ್ಥೆಗಳು ಮರುಕಳಿಸದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆಗಳ ಮುಖಂಡರು ಸಭೆಯಲ್ಲಿ ಒತ್ತಾಯಿಸಿದರು.
ನಿವೃತ್ತ ಸರ್ಕಾರಿ ಅಧಿಕಾರಿಗಳು ಸರ್ಕಾರದ ವಿರುದ್ಧದ ವಿಚಾರಗಳಲ್ಲಿ ಮೌನ ವಹಿಸದೆ, ಜನಪರವಾಗಿ ಸ್ಪಂದಿಸಬೇಕು ಎಂಬ ಅಭಿಪ್ರಾಯವೂ ಸಭೆಯಲ್ಲಿ ವ್ಯಕ್ತವಾಯಿತು.
ಸಭೆಯಲ್ಲಿ ಶಿವರಾಮೇಗೌಡ, ಕೇಂದ್ರ ರೇಷ್ಮೆ ಮಂಡಳಿ ಮಾಜಿ ಅಧ್ಯಕ್ಷ ಕೆ.ಎಂ. ಹನುಮಂತರಾಯಪ್ಪ, ನಗರಸಭೆ ಅಧ್ಯಕ್ಷೆ ಪ್ರಭಾ ನಾಗರಾಜ್, ಸದಸ್ಯ ಟಿ.ಎನ್. ಪ್ರಭುದೇವ್, ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಅಧ್ಯಕ್ಷ ಹುಲಿಕಲ್ ನಟರಾಜ್, ಜಿಲ್ಲಾ ಕಸಾಪ ಅಧ್ಯಕ್ಷ ಕೃಷ್ಣಪ್ಪ, ಲಯನ್ಸ್ ಕ್ಲಬ್ ಅಧ್ಯಕ್ಷೆ ವಸುಂಧರಾ ಗದೀಶ್ ರೆಡ್ಡಿ, ಮಾಜಿ ಅಧ್ಯಕ್ಷೆ ಪ್ರಮೀಳಾ ಮಹದೇವ್, ಮಹಿಳಾ ಸಮಾಜದ ಅಧ್ಯಕ್ಷೆ ವತ್ಸಲಾ, ಲಯನ್ಸ್ ಕ್ಲಬ್ ಅಧ್ಯಕ್ಷೆ ವಸುಂಧರಾ ರೆಡ್ಡಿ, ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಚಂದ್ರಶೇಖರ್ ಹಡಪದ, ನಿವೃತ್ತ ಶಿಕ್ಷಕ ಕೆ. ಮಹಾಲಿಂಗಯ್ಯ, ಕಲಾವಿದ ಕೆ.ಎಂ. ಕೃಷ್ಣಮೂರ್ತಿ, ಲೇಖಕಿ ಸುಧಾ ಸೇರಿದಂತೆ ಹಲವರು ಭಾಗವಹಿಸಿದ್ದರು.