ದೇವನಹಳ್ಳಿ ಬಳಿ ಭೀಕರ ಅಪಘಾತ: ಓರ್ವ ಸಾವು: ಹಲವರಿಗೆ ಗಾಯ

ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಶಿವಕುಮಾರ್ ನಾಯಕ್ ಮೃತಪಟ್ಟಿರುವ ಘಟನೆ ದೇವನಹಳ್ಳಿ ಹೊರವಲಯದ ರಾಣಿ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ 648ರಲ್ಲಿ ನಡೆದಿದೆ.

ದೇವನಹಳ್ಳಿ-ದಾಬಸ್‌ಪೇಟೆ ಮಾರ್ಗದ ಎಸ್‌ಟಿಆರ್‌ಆರ್‌ (STRR) ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಮೊಳಕಾಲ್ಮೂರಿನಲ್ಲಿ ಆಯೋಜಿಸಿದ್ದ ವೀರ ಮದಕರಿ ಕಾರ್ಯಕ್ರಮಕ್ಕೆ ಸ್ನೇಹಿತರೆಲ್ಲರು ಸೇರಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ಲಾರಿಯನ್ನು ಹಿಂದಿಕ್ಕಲು (ಓವರ್‌ಟೇಕ್) ಪ್ರಯತ್ನಿಸಿದ ಸಂದರ್ಭದಲ್ಲಿ ಕಾರು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ಡಿಕ್ಕಿಯ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನ ಚಾಲಕನ ಪಕ್ಕದ ಆಸನದಲ್ಲಿ ಕುಳಿತಿದ್ದ ಶಿವಕುಮಾರ್ ನಾಯಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಾರಿನಲ್ಲಿದ್ದ ಪವನ್, ಪ್ರದೀಪ್, ಚಂದನ್ ಹಾಗೂ ವಿನೋದ್ ಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ದೇವನಹಳ್ಳಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!