
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಮೃತ ವಿದ್ಯಾರ್ಥಿನಿಯನ್ನು ಆಂಧ್ರಪ್ರದೇಶ ಮೂಲದ ವರ್ಷಿತಾ (20) ಎಂದು ಗುರುತಿಸಲಾಗಿದೆ. ಈಕೆ ಗೀತಂ ವಿಶ್ವವಿದ್ಯಾಲಯದಲ್ಲಿ ತೃತೀಯ ವರ್ಷದ ಬಿ.ಟೆಕ್ ವ್ಯಾಸಂಗ ಮಾಡುತ್ತಿದ್ದಳು.
ವಿಶ್ವವಿದ್ಯಾಲಯದ ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದ್ದು, ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ವಿದ್ಯಾರ್ಥಿನಿಯ ಸಾವಿನ ಹಿಂದಿನ ಕಾರಣವೇನು ಎಂಬುದರ ಕುರಿತು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡಿದ್ದಾರೆ. ಮೃತಳ ಕುಟುಂಬಸ್ಥರಿಗೂ ಮಾಹಿತಿ ನೀಡಲಾಗಿದೆ.
ಮರಣೋತ್ತರ ಪರೀಕ್ಷೆಯ ವರದಿ ಹಾಗೂ ಪೊಲೀಸ್ ತನಿಖೆಯ ಬಳಿಕವೇ ಸಾವಿನ ನಿಖರ ಕಾರಣ ತಿಳಿದುಬರಬೇಕಿದೆ.