
ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ನೀತಿಗಳು, ಅಗತ್ಯ ವಸ್ತುಗಳ ಬೆಲೆ ಏರಿಕೆ, ರೈತರ ಸಮಸ್ಯೆಗಳು ಹಾಗೂ ವಿವಿಧ ಇಲಾಖೆಗಳಲ್ಲಿನ ಅವ್ಯವಸ್ಥೆ ಖಂಡಿಸಿ ಜೆಡಿಎಸ್ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಹಳೆಯ ಬಸ್ ನಿಲ್ದಾಣ ರಸ್ತೆಯ ನೆಲದಾಂಜನೇಯಸ್ವಾಮಿ ದೇವಸ್ಥಾನದ ಬಳಿಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ತಾಲ್ಲೂಕು ಕಚೇರಿ ವೃತ್ತದವರೆಗೆ ಸಾಗಿತು. ಬಳಿಕ ಪ್ರತಿಭಟನಾಕಾರರು ತಹಶೀಲ್ದಾರರಿಗೆ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ತಾಲೂಕು ಅಧ್ಯಕ್ಷ ಹರೀಶ್ ಗೌಡ, ರೈತರ ಕೃಷಿ ಪಂಪ್ಸೆಟ್ಗಳಿಗೆ ದಿನಕ್ಕೆ ಕನಿಷ್ಠ ಏಳು ಗಂಟೆ ವಿದ್ಯುತ್ ಪೂರೈಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಕಾರ್ಖಾನೆಗಳಿಗೆ ವಿದ್ಯುತ್ ನೀಡುವ ಸರ್ಕಾರಕ್ಕೆ ರೈತರ ಕೃಷಿ ಚಟುವಟಿಕೆಗಳಿಗೆ ಸಮರ್ಪಕ ವಿದ್ಯುತ್ ನೀಡಲು ಸಾಧ್ಯವಾಗುತ್ತಿಲ್ಲ. ಪ್ರಸ್ತುತ ರೈತರಿಗೆ ದಿನಕ್ಕೆ ಕೇವಲ ಮೂರರಿಂದ ನಾಲ್ಕು ಗಂಟೆ ಮಾತ್ರ ವಿದ್ಯುತ್ ನೀಡಲಾಗುತ್ತಿದ್ದು, ಇದರಿಂದ ಬೆಳೆಗಳು ಒಣಗುವ ಆತಂಕ ಎದುರಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೆಐಎಡಿಬಿ ಮೂಲಕ ಮನಸೋಇಚ್ಛೆ ಭೂಸ್ವಾಧೀನ ಮಾಡಿಕೊಳ್ಳಲಾಗುತ್ತಿದೆ. ಕೆಐಎಡಿಬಿ ಸಂಸ್ಥೆಯು ಒಂದು ರೀತಿಯಲ್ಲಿ ರಿಯಲ್ ಎಸ್ಟೇಟ್ ದಂಧೆಯಾಗಿ ಮಾರ್ಪಟ್ಟಿದೆ. ನಮ್ಮನ್ನು ಹಳ್ಳಿ ಗುಗ್ಗು ಎಂದು ಕರೆಯುತ್ತಾರೆ. ಆದರೆ ಇದೇ ಹಳ್ಳಿ ಗುಗ್ಗುಗಳಿಗೆ ಸರ್ಕಾರದ ಕುರ್ಚಿ ಅಲುಗಾಡಿಸುವ ಶಕ್ತಿ ಇದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ನಾಲ್ಕು ವರ್ಷಗಳಾಗುತ್ತಿದ್ದರೂ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ. ಹಳ್ಳಿಗಳು ಹಾಗೂ ನಗರ ಪ್ರದೇಶಗಳ ಹಲವು ಭಾಗಗಳಲ್ಲಿ ಇಂದಿಗೂ ಸಮರ್ಪಕ ರಸ್ತೆಗಳಿಲ್ಲ. ಜನಸಾಮಾನ್ಯರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ದೂರಿದರು.
ಕೆಎಸ್ಆರ್ಟಿಸಿ ಬಸ್ ಪ್ರಯಾಣ ದರ ಏರಿಕೆಯಿಂದ ದಿನಗೂಲಿ ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಬಡ ಕುಟುಂಬಗಳ ಮೇಲೆ ಆರ್ಥಿಕ ಹೊರೆ ಹೆಚ್ಚಾಗಿದೆ. ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಏರಿಕೆಯಿಂದಲೂ ಜನಸಾಮಾನ್ಯರು ಸಂಕಷ್ಟ ಎದುರಿಸುವಂತಾಗಿದೆ. ಕೃಷಿ ಇಲಾಖೆಯಲ್ಲಿ ರೈತರಿಗೆ ದೊರೆಯಬೇಕಾದ ಸಬ್ಸಿಡಿ ಸೌಲಭ್ಯಗಳು ಸಮರ್ಪಕವಾಗಿ ತಲುಪುತ್ತಿಲ್ಲ. ಇಲಾಖೆಯಲ್ಲಿನ ಭ್ರಷ್ಟಾಚಾರ ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದ ರೈತರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿದರು.
ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ದೊಡ್ಡಬಳ್ಳಾಪುರ ತಾಲೂಕಿನ ಕೈಗಾರಿಕೆಗಳಲ್ಲಿ ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸದೆ ಹೊರರಾಜ್ಯದವರಿಗೆ ಆದ್ಯತೆ ನೀಡಲಾಗುತ್ತಿದೆ. ಇದರಿಂದ ಸ್ಥಳೀಯ ಯುವಕರು ನಿರುದ್ಯೋಗ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಹೇಳಿದರು.
ಕಂದಾಯ ಇಲಾಖೆಯಲ್ಲಿನ ಅವ್ಯವಸ್ಥೆ, ಸ್ಲಂ ನಿವಾಸಿಗಳು ಹಾಗೂ ಮೀನುಗಾರರಿಗೆ ಮೂಲಭೂತ ಸೌಲಭ್ಯಗಳ ಕೊರತೆ, ಹಿರಿಯ ರಾಜಕಾರಣಿಗಳ ಸ್ಟಿಂಗ್ ಆಪರೇಷನ್ ವಿಚಾರದಲ್ಲಿನ ಬೆಳವಣಿಗೆಗಳು ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬ ಸೇರಿದಂತೆ ಹಲವು ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲಾಗಿದೆ. ರೈತರು, ಕಾರ್ಮಿಕರು, ಬಡವರು ಹಾಗೂ ಸಾಮಾನ್ಯ ಜನರ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಡಾ.ವಿಜಯ್ ಕುಮಾರ್, ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ್, ತಾಲೂಕು ಜೆಡಿಎಸ್ ಉಪಾಧ್ಯಕ್ಷ ಆನಂದ್, ಪ್ರಧಾನ ಕಾರ್ಯದರ್ಶಿ ಬಿ. ಗೋವಿಂದರಾಜು, ನಿಕಟ ಪೂರ್ವ ನಗರಸಭಾ ಅಧ್ಯಕ್ಷರಾದ ಪ್ರಭಾ ನಾಗರಾಜ್, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಶಿವಣ್ಣ, ಉಪಾಧ್ಯಕ್ಷ ರಾಮಚಂದ್ರ ಬಾಬು, ಮುಖಂಡರಾದ ಪ್ರವೀಣ್ ಶಾಂತಿನಗರ, ಮಹೇಶ್ ಗೌಡ, ದಾಸಗೊಂಡನಹಳ್ಳಿ ಚಂದ್ರಣ್ಣ, ದೀಪಕ್ ಗೌಡ, ಬೆಳವಂಗಲ ರಾಮಣ್ಣ, ಸತ್ಯಪ್ಪ, ತಳವಾರ್ ನಾಗರಾಜು, ನಾರಾಯಣಪ್ಪ ಸೇರಿದಂತೆ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಭಾಗವಹಿಸಿದ್ದರು.