ಸ್ಟೀರಿಂಗ್ ಕಟ್ ಆಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕೆಎಸ್‌ಆರ್‌ಟಿಸಿ ಬಸ್; ತಪ್ಪಿದ ಭಾರೀ ಅನಾಹುತ: ರಸ್ತೆ ಗುಂಡಿಗಳೇ ಅವಘಡಕ್ಕೆ ಕಾರಣ ಎಂಬ ಶಂಕೆ

ದೊಡ್ಡಬಳ್ಳಾಪುರ: ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಸ್ಟೀರಿಂಗ್ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

ಮಂಚೇನಹಳ್ಳಿಯಿಂದ ದೊಡ್ಡಬಳ್ಳಾಪುರಕ್ಕೆ ಬರುವ ಮಾರ್ಗದ ತೂಬಗೆರೆ ಹೋಬಳಿಯ ದೊಡ್ಡತಿಮ್ಮನಹಳ್ಳಿ ಸಮೀಪದ ಖಾಸಗಿ ಶಾಲೆಯ ಬಳಿ ಬೆಳಗ್ಗೆ ಸುಮಾರು 6.30ರ ವೇಳೆಗೆ ಈ ಅವಘಡ ಸಂಭವಿಸಿದೆ.

ಮಂಚೇನಹಳ್ಳಿ-ದೊಡ್ಡಬಳ್ಳಾಪುರ ಮಾರ್ಗದಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಅಲ್ಲಲ್ಲಿ ಬಿದ್ದಿರುವ ಗುಂಡಿಗಳಿಂದ ವಾಹನ ಸವಾರರು ನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಇದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ರಸ್ತೆ ಗುಂಡಿಗಳಲ್ಲಿ ಹಾದುಹೋಗುವ ಸಂದರ್ಭದಲ್ಲಿ ಸ್ಟೀರಿಂಗ್ ಕಟ್ ಆಗಿ ಚಾಲಕನ ನಿಯಂತ್ರಣ ತಪ್ಪಿದೆ ಎನ್ನಲಾಗಿದೆ. ಪರಿಣಾಮ ಬಸ್ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ವಿದ್ಯುತ್ ಕಂಬಕ್ಕೆ ಹಾನಿಯಾದ ಪರಿಣಾಮ ವಿದ್ಯುತ್ ತಂತಿಗಳು ರಸ್ತೆಗೆ ಅಡ್ಡಲಾಗಿ ಬಿದ್ದಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಹದಗೆಟ್ಟ ರಸ್ತೆಗಳು ಹಾಗೂ ರಸ್ತೆ ಗುಂಡಿಗಳಿಂದಾಗಿ ಇಂತಹ ಅವಘಡಗಳು ಸಂಭವಿಸುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಸಾರ್ವಜನಿಕರಿಂದ ಕೇಳಿಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!