ಯುವ ಸಂಸತ್ತು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಲಾ ಕಾಲೇಜಿನ ಪುನೀತ್ ಕುಮಾರ್‌ಗೆ ಪ್ರಥಮ ಸ್ಥಾನ; ರಾಜ್ಯಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಜಿಲ್ಲಾ ಮಟ್ಟದ ಯುವ ಸಂಸತ್ತು ಸ್ಪರ್ಧೆಯಲ್ಲಿ ದೊಡ್ಡಬಳ್ಳಾಪುರದ ಶ್ರೀ ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿ ಪುನೀತ್ ಕುಮಾರ್ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಯುವ ಸಂಸತ್ತು ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಭಾಧ್ಯಕ್ಷರು, ಮುಖ್ಯಮಂತ್ರಿ, ಸಚಿವರು, ವಿರೋಧ ಪಕ್ಷದ ನಾಯಕರು ಹಾಗೂ ಶಾಸಕರ ಪಾತ್ರಗಳನ್ನು ನಿರ್ವಹಿಸಿ ಅಣಕು ಸಂಸತ್ ಅಧಿವೇಶನ ನಡೆಸಿದರು. ರಾಜ್ಯದ ಸಮಸ್ಯೆಗಳು, ಶಿಕ್ಷಣ, ಆರೋಗ್ಯ, ಕೃಷಿ, ಅಭಿವೃದ್ಧಿ ಯೋಜನೆಗಳು, ಮಕ್ಕಳ ಹಕ್ಕುಗಳು ಹಾಗೂ ಮಹಿಳಾ ಸಬಲೀಕರಣ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು.

ಸಂಸತ್ ಅಧಿವೇಶನದ ಮಾದರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮ ವಾಕ್ ಚಾತುರ್ಯ, ಪ್ರಶ್ನಿಸುವ ಮನೋಭಾವ ಹಾಗೂ ಪ್ರಸ್ತುತ ವಿಷಯಗಳ ಮೇಲಿನ ಜ್ಞಾನವನ್ನು ಪ್ರದರ್ಶಿಸಿದರು. ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳು ಮಕ್ಕಳ ಸಂಸತ್ ಕಲಾಪವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಪುನೀತ್ ಕುಮಾರ್ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ್ ರೆಡ್ಡಿ ಹಾಗೂ ಉಪನ್ಯಾಸಕ ವರ್ಗ ಅಭಿನಂದನೆ ಸಲ್ಲಿಸಿ, ರಾಜ್ಯಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!