
ದೊಡ್ಡಬಳ್ಳಾಪುರ: ಶಾಸಕ ಧೀರಜ್ ಮುನಿರಾಜ್ ಅವರ ನೇತೃತ್ವದಲ್ಲಿ ದೊಡ್ಡಬಳ್ಳಾಪುರ ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಪರಿಹಾರ ಕೋರಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಲಿಖಿತ ಅರ್ಜಿಗಳನ್ನು ಸಲ್ಲಿಸಿದರು.
ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಲು ವಿವಿಧ ಇಲಾಖೆಗಳ ಪ್ರತ್ಯೇಕ ಕೌಂಟರ್ಗಳನ್ನು ತೆರೆಯಲಾಗಿತ್ತು. ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರಲು ಆಗಮಿಸಿದ್ದ ಜನರು ಆಯಾ ಇಲಾಖೆಗಳ ಕೌಂಟರ್ಗಳ ಮುಂದೆ ಸರತಿ ಸಾಲಿನಲ್ಲಿ ನಿಂತು ಅರ್ಜಿ ಸಲ್ಲಿಸುತ್ತಿದ್ದರು.

ಆದರೆ, ಕೌಂಟರ್ ಗಳ ಬಳಿ ಸಾರ್ವಜನಿಕರಿಗೆ ಕನಿಷ್ಠ ನೆರಳಿನ ವ್ಯವಸ್ಥೆಯನ್ನೂ ಕಲ್ಪಿಸದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಯಿತು. ಒಂದೆಡೆ ಬಿಸಿಲಿನ ತಾಪಕ್ಕೆ ಜನರು ಬಸವಳಿಯುತ್ತಾ ಸರತಿ ಸಾಲಿನಲ್ಲಿ ನಿಂತು ಅರ್ಜಿ ಸಲ್ಲಿಸುತ್ತಿದ್ದರೆ, ಮತ್ತೊಂದೆಡೆ ಶಾಸಕರು ಹಾಗೂ ಅಧಿಕಾರಿಗಳು ಪೆಂಡಾಲ್ನ ನೆರಳಿನಲ್ಲಿ ಕುಳಿತು ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸುತ್ತಿದ್ದ ದೃಶ್ಯ ಕಂಡುಬಂತು.
ಜನರ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಆಯೋಜಿಸಿದ್ದ ಪ್ರಜಾ ಸೇವಾ ಆಂದೋಲನದಲ್ಲೇ ಸಾರ್ವಜನಿಕರು ಬಿಸಿಲಿನಲ್ಲಿ ನಿಂತು ಪರದಾಡುವಂತಾಗಿದ್ದು ವಿಪರ್ಯಾಸದ ಸಂಗತಿಯಾಗಿದೆ. ಜನರ ಸಮಸ್ಯೆ ಆಲಿಸುವ ಕಾರ್ಯಕ್ರಮದಲ್ಲಿ ಜನರಿಗೆ ನೆರಳಿನ ವ್ಯವಸ್ಥೆ ಕಲ್ಪಿಸುವ ಕನಿಷ್ಠ ಕಾಳಜಿಯನ್ನೂ ವಹಿಸದಿರುವುದು ಆಯೋಜಕರ ಕಾರ್ಯವೈಖರಿಯ ಬಗ್ಗೆ ಪ್ರಶ್ನೆ ಮೂಡಿಸಿದೆ.

ಜನಸೇವೆಯ ಹೆಸರಿನಲ್ಲಿ ನಡೆಯುವ ಇಂತಹ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರ ಅನುಕೂಲಕ್ಕೆ ಮೊದಲ ಆದ್ಯತೆ ನೀಡಬೇಕು ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.