
ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿರುವ ಬಹುರಾಷ್ಟ್ರೀಯ ಕಂಪನಿಗಳು ಸ್ಥಳೀಯ ಕನ್ನಡಿಗರಿಗೆ ಉದ್ಯೋಗಾವಕಾಶ ನೀಡದೆ, ಹೊರರಾಜ್ಯದವರಿಗೆ ಹೆಚ್ಚಿನ ಆದ್ಯತೆ ನೀಡುತ್ತಿವೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ವತಿಯಿಂದ ಬೃಹತ್ ಸಭೆ ಹಾಗೂ ಎಚ್ಚರಿಕೆ ಪ್ರತಿಭಟನೆ ನಡೆಸಲಾಯಿತು.
ಸಭೆಯಲ್ಲಿ ನೂರಾರು ಕರವೇ ಕಾರ್ಯಕರ್ತರು ಹಾಗೂ ಸ್ಥಳೀಯ ಯುವಕರು ಭಾಗವಹಿಸಿ, ಕಂಪನಿಗಳ ಆಡಳಿತ ಮಂಡಳಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಸಭೆಯನ್ನುದ್ದೇಶಿಸಿ ಮಾತನಾಡಿದ ಕರವೇ ಮುಖಂಡರು, ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿ ದೇವನಹಳ್ಳಿ ತಾಲೂಕಿನ ರೈತರು ತಮ್ಮ ಫಲವತ್ತಾದ ಸುಮಾರು 4 ಸಾವಿರ ಎಕರೆಗೂ ಅಧಿಕ ಭೂಮಿಯನ್ನು ತ್ಯಾಗ ಮಾಡಿದ್ದಾರೆ. ಆದರೆ, ರೈತರ ಭೂಮಿಯಲ್ಲಿ ತಲೆ ಎತ್ತಿರುವ ಬಹುರಾಷ್ಟ್ರೀಯ ಕಂಪನಿಗಳು ಅದೇ ಸ್ಥಳೀಯ ರೈತರ ಮಕ್ಕಳಿಗೆ ಹಾಗೂ ಇಲ್ಲಿನ ಕಾರ್ಮಿಕರಿಗೆ ಉದ್ಯೋಗ ನೀಡದೆ ಅನ್ಯಾಯ ಮಾಡುತ್ತಿವೆ ಎಂದು ಆರೋಪಿಸಿದರು.
ದೇವನಹಳ್ಳಿ ತಾಲೂಕಿನಲ್ಲಿ ಐಟಿಐ, ಬಿಎ, ಬಿಕಾಂ, ಎಂಕಾಂ, ಎಂಜಿನಿಯರಿಂಗ್ ಹಾಗೂ ಎಂಬಿಬಿಎಸ್ ಸೇರಿದಂತೆ ವಿವಿಧ ಉನ್ನತ ಶಿಕ್ಷಣ ಪಡೆದ ಸಾವಿರಾರು ಯುವಕರು ಉದ್ಯೋಗವಿಲ್ಲದೆ ಅಲೆಯುತ್ತಿದ್ದಾರೆ. ಆದರೆ, ವಿಮಾನ ನಿಲ್ದಾಣದ ವ್ಯಾಪ್ತಿಯ ಕಂಪನಿಗಳಲ್ಲಿ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಬದಲು ತಮಿಳುನಾಡು, ಆಂಧ್ರಪ್ರದೇಶ ಹಾಗೂ ಕೇರಳ ಸೇರಿದಂತೆ ಹೊರರಾಜ್ಯಗಳ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಇದು ಕನ್ನಡಿಗರ ಪಾಲಿಗೆ ಆಗುತ್ತಿರುವ ಉದ್ಯೋಗ ತಾರತಮ್ಯ ಮತ್ತು ಅನ್ಯಾಯವಾಗಿದೆ ಎಂದು ಮುಖಂಡರು ಕಿಡಿಕಾರಿದರು.
ವಿಮಾನ ನಿಲ್ದಾಣದ ವ್ಯಾಪ್ತಿಯಲ್ಲಿರುವ ಎಲ್ಲಾ ಬಹುರಾಷ್ಟ್ರೀಯ ಕಂಪನಿಗಳು ಕೂಡಲೇ ಎಚ್ಚೆತ್ತುಕೊಂಡು ಸ್ಥಳೀಯ ಕನ್ನಡಿಗರಿಗೆ ಉದ್ಯೋಗದಲ್ಲಿ ಸಿಂಹಪಾಲು ನೀಡಬೇಕು. ಈ ಸಂಬಂಧ ಕಂಪನಿಗಳಿಗೆ ಒಂದು ತಿಂಗಳ ಗಡುವು ನೀಡಲಾಗುತ್ತಿದೆ. ನಿಗದಿತ ಅವಧಿಯೊಳಗೆ ಸ್ಥಳೀಯ ಯುವಕರಿಗೆ ಉದ್ಯೋಗ ಕಲ್ಪಿಸಲು ಕ್ರಮ ಕೈಗೊಳ್ಳದಿದ್ದರೆ ಕರವೇ ವತಿಯಿಂದ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು. ಕನ್ನಡಿಗರಿಗೆ ಉದ್ಯೋಗದಲ್ಲಿ ನ್ಯಾಯ ಸಿಗದಿದ್ದರೆ ಸಂಬಂಧಪಟ್ಟ ಕಂಪನಿಗಳು ಹಾಗೂ ಕಾರ್ಖಾನೆಗಳಿಗೆ ಬೀಗ ಜಡಿದು ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಸ್ಥಳೀಯ ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳು, ಕರವೇ ತಾಲೂಕು ಹಾಗೂ ಜಿಲ್ಲಾ ಮಟ್ಟದ ಪದಾಧಿಕಾರಿಗಳು ಮತ್ತು ನೂರಾರು ಕಾರ್ಯಕರ್ತರು ಭಾಗವಹಿಸಿ, ಸ್ಥಳೀಯ ಯುವಕರ ಉದ್ಯೋಗ ಹಕ್ಕುಗಳಿಗಾಗಿ ಒಗ್ಗಟ್ಟಿನಿಂದ ಹೋರಾಟ ನಡೆಸುವ ನಿರ್ಣಯ ಕೈಗೊಂಡರು.
ಈ ಸಂದರ್ಭದಲ್ಲಿ ಕರವೇ ರಾಜ್ಯ ಉಪಾಧ್ಯಕ್ಷ ಶಿವರಾಜುಗೌಡ, ಜಿಲ್ಲಾಧ್ಯಕ್ಷ ಎಸ್ ಡಿ ಮುನಿರಾಜು, ಉಪಾಧ್ಯಕ್ಷ ವೇಣು, ಜಿಲ್ಲಾ ಯುವ ಘಟಕದ ಅಧ್ಯಕ್ಷ ಹರ್ಷಿಗೌಡ, ತಾಲೂಕು ಅಧ್ಯಕ್ಷ ಬಾಬು, ಉಪಾಧ್ಯಕ್ಷರಾದ ಸತೀಶ್, ಪರಮೇಶ್ವರ್, ಮಹೇಶ್, ಬಾಬು, ಸಾಗರ್ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.