
ದೊಡ್ಡಬಳ್ಳಾಪುರ: ವಿಶ್ವಗುರು ಬಸವಣ್ಣನವರ ಕುರಿತು ಆಕ್ಷೇಪಾರ್ಹ ಅಂಶಗಳನ್ನು ಒಳಗೊಂಡಿದೆ ಎನ್ನಲಾದ ‘ಬಸವ ಮಂಟಪ’ ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ರಾಜ್ಯ ಸಚಿವ ಸಂಪುಟ ಕೈಗೊಂಡಿರುವ ನಿರ್ಧಾರ ಸ್ವಾಗತಾರ್ಹ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಯುವ ಘಟಕದ ಕಾರ್ಯದರ್ಶಿ ಉದಯ ಆರಾಧ್ಯ ತಿಳಿಸಿದ್ದಾರೆ.
ಬಸವಣ್ಣನವರು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ. ಸಮಾನತೆ, ಸಾಮಾಜಿಕ ನ್ಯಾಯ, ಕಾಯಕ, ದಾಸೋಹ ಹಾಗೂ ಮಾನವೀಯ ಮೌಲ್ಯಗಳನ್ನು ಸಾರಿದ ಜಾಗತಿಕ ಮಹಾನ್ ದಾರ್ಶನಿಕರು. ಅವರ ವ್ಯಕ್ತಿತ್ವ ಮತ್ತು ವಿಚಾರಧಾರೆಗೆ ಧಕ್ಕೆ ತರುವಂತಹ ತಪ್ಪು ಮಾಹಿತಿ ಅಥವಾ ಆಕ್ಷೇಪಾರ್ಹ ಅಂಶಗಳು ಕೃತಿಯಲ್ಲಿದ್ದರೆ ಅವುಗಳ ಸತ್ಯಾಸತ್ಯತೆಯನ್ನು ಸಮಗ್ರವಾಗಿ ಪರಿಶೀಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕೃತಿಯಲ್ಲಿನ ಅಂಶಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ಕಾನೂನುಬಾಹಿರ ಅಂಶಗಳು ಕಂಡುಬಂದಲ್ಲಿ ಲೇಖಕರು ಹಾಗೂ ಸಂಬಂಧಪಟ್ಟವರ ವಿರುದ್ಧ ಕಾನೂನಿನ ಅನ್ವಯ ಸೂಕ್ತ ಕ್ರಮ ಕೈಗೊಳ್ಳಬೇಕು. ಬಸವಣ್ಣನವರ ವಚನ ಸಾಹಿತ್ಯ ಮತ್ತು ತತ್ವಾದರ್ಶಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿದ್ದು, ಅವುಗಳನ್ನು ಮುಂದಿನ ಪೀಳಿಗೆಗೆ ಸಮರ್ಪಕವಾಗಿ ತಲುಪಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ.
ಸಚಿವ ಸಂಪುಟದ ನಿರ್ಧಾರವನ್ನು ಸಂವಿಧಾನ ಮತ್ತು ಕಾನೂನಿನ ಚೌಕಟ್ಟಿನಲ್ಲಿ ಜಾರಿಗೊಳಿಸಬೇಕು. ಈ ಸಂದರ್ಭದಲ್ಲಿ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಹಬಾಳ್ವೆಗೆ ಧಕ್ಕೆಯಾಗದಂತೆ ಸರ್ಕಾರ ಎಚ್ಚರಿಕೆ ವಹಿಸಿ, ಬಸವಣ್ಣನವರ ಘನತೆ ಮತ್ತು ಗೌರವ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಉದಯ ಆರಾಧ್ಯ ಒತ್ತಾಯಿಸಿದ್ದಾರೆ.