ಮಹಿಳಾ ಸುರಕ್ಷತೆಗೆ ಮೊದಲ ಆದ್ಯತೆ; ರೌಡಿಶೀಟರ್‌ಗಳ ಮೇಲೆ ಹದ್ದಿನ ಕಣ್ಣು- 8 ಸಾವಿರ ಪೊಲೀಸ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ- ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ನಗರದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಮಹಿಳೆಯರ ಸುರಕ್ಷತೆ ಹಾಗೂ ಅಪರಾಧ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಬೆಂಗಳೂರು ಪೊಲೀಸ್ ಇಲಾಖೆಯ ನೂತನ ಪೊಲೀಸ್ ಆಯುಕ್ತರು ಹಾಗೂ ಹಿರಿಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಬೆಂಗಳೂರು ಪೊಲೀಸ್ ಇಲಾಖೆಯ ನೂತನ ಪೊಲೀಸ್ ಆಯುಕ್ತರೊಂದಿಗೆ ಸಭೆ ನಡೆಸಿದ ಅವರು, ನಗರದ ಭದ್ರತೆ, ಪೊಲೀಸ್ ಇಲಾಖೆಯ ಆಡಳಿತ ವ್ಯವಸ್ಥೆ ಮತ್ತು ಕಾರ್ಯಕ್ಷಮತೆ ಹೆಚ್ಚಿಸುವ ಕುರಿತು ಹಲವು ಮಹತ್ವದ ಸೂಚನೆಗಳನ್ನು ನೀಡಿದರು.

ಬೆಂಗಳೂರು ಐಟಿ-ಬಿಟಿ ಹಬ್ ಆಗಿರುವ ಹಿನ್ನೆಲೆಯಲ್ಲಿ ಮಹಿಳಾ ಉದ್ಯೋಗಿಗಳು, ಟೆಕ್ಕಿಗಳು ಹಾಗೂ ಹೂಡಿಕೆದಾರರ ಸುರಕ್ಷತೆಗೆ ವಿಶೇಷ ಗಮನಹರಿಸಬೇಕು. ರಾತ್ರಿ ವೇಳೆ ಮಹಿಳೆಯರು ಮತ್ತು ಸಾರ್ವಜನಿಕರು ನಿರ್ಭೀತಿಯಿಂದ ಸಂಚರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ದ್ವೇಷ ಭಾಷಣಗಳಿಗೆ ಕಡಿವಾಣ ಹಾಕುವುದರ ಜತೆಗೆ ಯಾವುದೇ ಕಾರಣಕ್ಕೂ ನೈತಿಕ ಪೊಲೀಸ್‌ಗಿರಿಯನ್ನು ಸಹಿಸಬಾರದು ಎಂದು ಸೂಚಿಸಿದರು.

ಪ್ರತಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಪ್ರಮುಖ ರೌಡಿಶೀಟರ್‌ಗಳನ್ನು ಗುರುತಿಸಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಂಡು ವರದಿ ಸಲ್ಲಿಸಬೇಕು. ಸೈಬರ್ ಅಪರಾಧಗಳ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಡ್ಯಾನ್ಸ್ ಬಾರ್‌ಗಳು, ಕ್ಲಬ್‌ಗಳು, ಪಬ್‌ಗಳು ಹಾಗೂ ಅಪಾರ್ಟ್‌ಮೆಂಟ್‌ಗಳು, ಖಾಸಗಿ ಬಡಾವಣೆಗಳು ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ನಡೆಯುವ ಕಾನೂನುಬಾಹಿರ ಚಟುವಟಿಕೆಗಳ ಮೇಲೆ ನಿರಂತರ ನಿಗಾ ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಹೊಸದಾಗಿ ರಚಿಸಿರುವ ಐದು ಪೊಲೀಸ್ ಆಯುಕ್ತರೇಟ್‌ಗಳ ವ್ಯಾಪ್ತಿಯನ್ನು ಸ್ಪಷ್ಟವಾಗಿ ಗುರುತಿಸಿ, ಆಡಳಿತಾತ್ಮಕ ಹಾಗೂ ಕಾರ್ಯಾಚರಣೆಯ ಸಮನ್ವಯ ಸಾಧಿಸಬೇಕು. ಸಂಚಾರ ನಿರ್ವಹಣೆ, ಪೊಲೀಸ್ ಗಸ್ತು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸರ ಉಪಸ್ಥಿತಿಯನ್ನು ಹೆಚ್ಚಿಸಬೇಕು ಎಂದು ತಿಳಿಸಿದರು.

ನಗರದ ಎಲ್ಲ ಪೊಲೀಸ್ ಠಾಣೆಗಳ ಕಾರ್ಯಕ್ಷಮತೆಯನ್ನು ಮೌಲ್ಯಮಾಪನ ಮಾಡಲು ರೇಟಿಂಗ್ ವ್ಯವಸ್ಥೆ ರೂಪಿಸಲಾಗುವುದು. ಪ್ರತಿ ತಿಂಗಳು ಪರಿಶೀಲನಾ ಸಭೆ ನಡೆಸಿ ಠಾಣೆಗಳ ಕಾರ್ಯವೈಖರಿಯನ್ನು ಪರಿಶೀಲಿಸಲಾಗುವುದು. ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ನೀಗಿಸಲು ಪ್ರತಿ ವರ್ಷ ನೇಮಕಾತಿ ನಡೆಸುವ ವ್ಯವಸ್ಥಿತ ನೀತಿ ರೂಪಿಸಲಾಗಿದ್ದು, ಈಗಾಗಲೇ ಸುಮಾರು 8 ಸಾವಿರ ಪೊಲೀಸ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಐದು ಪೊಲೀಸ್ ಆಯುಕ್ತರೇಟ್‌ಗಳ ರಚನೆಯ ನಂತರ ಇಲಾಖೆಯ ಜವಾಬ್ದಾರಿ ಮತ್ತು ನಿರೀಕ್ಷೆಗಳು ಹೆಚ್ಚಾಗಿದ್ದು, ಅದಕ್ಕೆ ತಕ್ಕಂತೆ ಕಾರ್ಯಕ್ಷಮತೆಯನ್ನು ವೃದ್ಧಿಸಬೇಕು. ಪೊಲೀಸ್ ಸಿಬ್ಬಂದಿಯ ವಸತಿ ಹಾಗೂ ಕಲ್ಯಾಣ ಸೌಲಭ್ಯಗಳಿಗೂ ಆದ್ಯತೆ ನೀಡಬೇಕು. ಗೃಹ ಇಲಾಖೆಯ ಅಧೀನದಲ್ಲಿರುವ ಐದು ಆಯೋಗಗಳು ತಮ್ಮ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಪೊಲೀಸ್ ಇಲಾಖೆ ಕೇವಲ ಕಾನೂನು ಜಾರಿಗೊಳಿಸುವ ವ್ಯವಸ್ಥೆಯಲ್ಲ, ಅದು ಜನರ ಸುರಕ್ಷತೆ ಮತ್ತು ಪ್ರಜಾಸೇವೆಯ ಪ್ರಮುಖ ಹೊಣೆಗಾರಿಕೆ ಹೊಂದಿದೆ. ಬೆಂಗಳೂರು ನಗರದ ಭದ್ರತೆ, ಮಹಿಳೆಯರ ಸುರಕ್ಷತೆ, ಹೂಡಿಕೆದಾರರ ವಿಶ್ವಾಸ ಹಾಗೂ ಸಾರ್ವಜನಿಕರ ನೆಮ್ಮದಿ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಇನ್ನಷ್ಟು ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!