
ದೊಡ್ಡಬಳ್ಳಾಪುರ: ನಿಯಮಗಳನ್ನು ಗಾಳಿಗೆ ತೂರಿ, ಸಾಮರ್ಥ್ಯಕ್ಕಿಂತಲೂ ಅಧಿಕ ಪ್ರಮಾಣದಲ್ಲಿ ಮರದ ದಿಮ್ಮಿಗಳನ್ನು ತುಂಬಿಕೊಂಡು ಲಾರಿಯೊಂದು ರಾತ್ರಿ ವೇಳೆ ದೊಡ್ಡಬಳ್ಳಾಪುರ-ದೇವನಹಳ್ಳಿ ಮಾರ್ಗದಲ್ಲಿ ಸಂಚರಿಸುತ್ತಿರುವ ದೃಶ್ಯ ಕಂಡುಬಂದಿದೆ.

ಲಾರಿಯ ಹಿಂಭಾಗದಲ್ಲಿ ಅಪಾಯಕಾರಿಯಾಗಿ ಎತ್ತರದವರೆಗೆ ಮರದ ದಿಮ್ಮಿಗಳನ್ನು ತುಂಬಲಾಗಿದ್ದು, ಯಾವುದೇ ಕ್ಷಣದಲ್ಲಾದರೂ ದಿಮ್ಮಿಗಳು ಜಾರಿ ಬೀಳುವ ಆತಂಕ ಎದುರಾಗಿದೆ. ಇಂತಹ ಅತಿಯಾದ ಭಾರದ ಸಾಗಣೆಯಿಂದ ರಸ್ತೆಯಲ್ಲಿ ಸಂಚರಿಸುವ ಇತರ ವಾಹನ ಸವಾರರ ಜೀವಕ್ಕೂ ಅಪಾಯ ಎದುರಾಗುವ ಸಾಧ್ಯತೆಯಿದೆ.

ಸಂಚಾರ ನಿಯಮಗಳ ಉಲ್ಲಂಘನೆ ಕಂಡುಬಂದರೂ ಸಂಬಂಧಪಟ್ಟ ಅಧಿಕಾರಿಗಳು ಇಂತಹ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲವೇ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ. ನಿಗದಿತ ಪ್ರಮಾಣಕ್ಕಿಂತ ಹೆಚ್ಚು ಸರಕು ತುಂಬಿಕೊಂಡು ಸಂಚರಿಸುವ ವಾಹನಗಳ ವಿರುದ್ಧ ಸಾರಿಗೆ ಇಲಾಖೆ ಹಾಗೂ ಪೊಲೀಸರು ತಕ್ಷಣ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿಬಂದಿದೆ.