ಮಲ್ಲೋಹಳ್ಳಿ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದ ಬೀಗ ತೆರವು; ಮತ್ತೆ ಪೂಜೆಗೆ ಅವಕಾಶ: ಗ್ರಾಮಸ್ಥರ ಎರಡು ಬಣಗಳ ನಡುವಿನ ಭಿನ್ನಾಭಿಪ್ರಾಯಕ್ಕೆ ತಾತ್ಕಾಲಿಕ ತೆರೆ; ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ ನಡೆಸಿ ಮುಂದಿನ ಕ್ರಮ

ದೊಡ್ಡಬಳ್ಳಾಪುರ: ತಾಲೂಕಿನ ಮಲ್ಲೋಹಳ್ಳಿ ಗ್ರಾಮದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಹಾಕಲಾಗಿದ್ದ ಬೀಗವನ್ನು ಅಧಿಕಾರಿಗಳು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ತೆರವುಗೊಳಿಸಲಾಗಿದ್ದು, ದೇವಸ್ಥಾನದ ಬಾಗಿಲು ಮತ್ತೆ ತೆರೆದಿದೆ.

ದೇವಸ್ಥಾನದ ಒಡವೆಗಳ ನಿರ್ವಹಣೆ ಹಾಗೂ ಪೂಜಾ ಕೈಂಕರ್ಯಗಳ ವಿಚಾರವಾಗಿ ಗ್ರಾಮಸ್ಥರ ಎರಡು ಬಣಗಳ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಎರಡು ಬೀಗಗಳನ್ನು ಹಾಕಲಾಗಿತ್ತು. ಇದರಿಂದ ದೇವಸ್ಥಾನದಲ್ಲಿ ಪೂಜಾ ಕಾರ್ಯಗಳು ಸ್ಥಗಿತಗೊಂಡಿದ್ದವು ಎನ್ನಲಾಗಿದೆ.

ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಉಪವಿಭಾಗಾಧಿಕಾರಿ ಮಂಜುನಾಥ್ ಟಿ.ಆರ್. ಅವರು ಎರಡೂ ಬಣಗಳ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿ, ಎಲ್ಲರ ಮನವೊಲಿಸುವ ಮೂಲಕ ದೇವಸ್ಥಾನಕ್ಕೆ ಹಾಕಿದ್ದ ಬೀಗಗಳನ್ನು ತೆರವುಗೊಳಿಸಿದರು.

ಬಳಿಕ ಮಾತನಾಡಿದ ಉಪವಿಭಾಗಾಧಿಕಾರಿ ಮಂಜುನಾಥ್ ಟಿ.ಆರ್., ದೇವಸ್ಥಾನದ ಬಾಗಿಲು ತೆರೆಯಲಾಗಿದ್ದು, ಹೊರಗಿನಿಂದ ಅರ್ಚಕರನ್ನು ಕರೆಸಿ ಎಂದಿನಂತೆ ಪೂಜಾ ಕೈಂಕರ್ಯಗಳನ್ನು ನಡೆಸಲು ಕ್ರಮ ಕೈಗೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಿ, ದೇವಸ್ಥಾನದ ವಿಚಾರವಾಗಿ ಉಂಟಾಗಿರುವ ಭಿನ್ನಾಭಿಪ್ರಾಯಗಳ ಕುರಿತು ಚರ್ಚಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸ್ಥಳಕ್ಕೆ ಉಪವಿಭಾಗಾಧಿಕಾರಿ ಮಂಜುನಾಥ್ ಟಿ.ಆರ್., ತಹಶೀಲ್ದಾರ್ ಮಲ್ಲಪ್ಪ ಯರಗೋಳ್, ಡಿವೈಎಸ್ಪಿ ಪಾಂಡುರಂಗ, ದೊಡ್ಡಬೆಳವಂಗಲ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಸೇರಿದಂತೆ ಕಂದಾಯ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದರು.

Leave a Reply

Your email address will not be published. Required fields are marked *

error: Content is protected !!